ಜಾತಿ ಗಣತಿ ವರದಿ ಚರ್ಚೆ ಮತ್ತೆ ಅಪೂರ್ಣ, ಮುಂದಿನ ಸಂಪುಟ ಸಭೆಯಲ್ಲಿ ಚರ್ಚೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯ ಮೇಲಿನ ಚರ್ಚೆ ಅಪೂರ್ಣವಾಗಿದ್ದು
ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮತ್ತೆ ಚರ್ಚಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಮಾಹಿತಿ ನೀಡಿದರು.

- Advertisement - 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೆಚ್ಚಿನ ಸಚಿವರು ಜಾತಿ ಗಣತಿ ಸಮೀಕ್ಷೆ ಕುರಿತು ತಮ್ಮ ಅಭಿಪ್ರಾಯವನ್ನು ಲಿಖಿತವಾಗಿ ಸಲ್ಲಿಸಿದ್ದಾರೆ ಎಂದರು.

- Advertisement - 

ಇಂದಿನ ಸಚಿವ ಸಂಪುಟ ಸಭೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯ ಕುರಿತು ಚರ್ಚಿಸಲಾಯಿತಾದರೂ ಚರ್ಚೆ ಅಪೂರ್ಣವಾಗಿದೆ. ಮುಖ್ಯಮಂತ್ರಿಗಳು ಈ ಹಿಂದೆ ಸಂಪುಟ ಸಚಿವರು ತಮ್ಮ ಅಭಿಪ್ರಾಯವನ್ನು ಲಿಖಿತವಾಗಿ ನೀಡುವಂತೆ ಕೇಳಿದ್ದರು ಮತ್ತು ಮೂರು ಅಥವಾ ನಾಲ್ಕು ಸಚಿವರು ಹೊರತುಪಡಿಸಿ ಹೆಚ್ಚಿನ ಸಚಿವರ ತಮ್ಮ ಅಭಿಪ್ರಾಯಗಳನ್ನು ಮುಖ್ಯಮಂತ್ರಿಗೆ ಲಿಖಿತವಾಗಿ ಸಲ್ಲಿಸಿದ್ದಾರೆ ಎಂದು ಕಾನೂನು ಸಚಿವ ಎಚ್ ಕೆ ಪಾಟೀಲ್ ತಿಳಿಸಿದರು.

ಕಾನೂನು ಸಚಿವ ಎಚ್ ಕೆ ಪಾಟೀಲ್ ಅವರು ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅಥವಾ ಅದರ ನಂತರದ ಸಭೆಯಲ್ಲಿ ಕೆಲವು ವಿವರಗಳನ್ನು ಪಡೆದು ಚರ್ಚಿಸಿದ ನಂತರ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

- Advertisement - 

 ಜಾತಿ ಗಣತಿ ಬಗ್ಗೆ ಸಂಪುಟದಲ್ಲಿ ಪರ, ವಿರುದ್ಧ ಅಭಿಪ್ರಾಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಎಲ್ಲ ಸಚಿವರಿಗೂ ತಮ್ಮ ನಿಲುವನ್ನು ಲಿಖಿತವಾಗಿ ತಿಳಿಸಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದರು. ಕೇವಲ 11 ಮಂದಿ ಮಾತ್ರ ಲಿಖಿತ ಅಭಿಪ್ರಾಯ ನೀಡಿದ್ದ ಹಿನ್ನೆಲೆಯಲ್ಲಿ ಮೇ 10 ರಂದು ನಡೆದ ಕ್ಯಾಬಿನೆಟ್‌ನಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳದೆ ಮುಂದೂಡಲಾಗಿತ್ತು ಎಂದು ಅವರು ತಿಳಿಸಿದರು.

ಬಿಜೆಪಿ ಅನರ್ಹ ಶಾಸಕರ ಕುರಿತು ಸಿಎಂ ಸಿದ್ದರಾಮಯ್ಯ ಅವರು ಸಂಪುಟ ಸಭೆಯಲ್ಲಿ ಚರ್ಚೆ ಮಾಡಿದ್ದು, ಮೇ 25ರಂದು ಸಭೆ ಕರೆಯಲು ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಮೇ 25ರಂದು ಸಂಜೆ 5 ಗಂಟೆಗೆ ವಿಧಾನಸೌಧದಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹಾಗೂ ಶಾಸಕರು ಭಾಗಿಯಾಗಲಿದ್ದಾರೆ. ಅಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

2011ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಆಯ್ಕೆ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳಲ್ಲಿ ಭಾಗಿಯಾಗಿರುವ ಕರ್ನಾಟಕ ಲೋಕಸೇವಾ ಆಯೋಗದ ಹಿಂದಿನ ಅಧ್ಯಕ್ಷರು ಹಾಗೂ ಹಿಂದಿನ ಎಂಟು ಸದಸ್ಯರುಗಳನ್ನು ಅಭಿಯೋಜನೆಗೊಳಪಡಿಸುವುದರ ಬಗ್ಗೆ ಕೈಬಿಟ್ಟು ಪ್ರಕರಣವನ್ನು ಮುಕ್ತಾಯಗೊಳಿಸಲಾಗಿದೆ ಎಂದು ವಿವರಿಸಿದ್ದಾರೆ.
ಭರತ್ ಲಾಲ್ ಮೀನಾ
, ನಿವೃತ್ತ ಐಎಎಸ್ ಅಧಿಕಾರಿ, ಅಂದಿನ ಆಯುಕ್ತರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮತ್ತು ಪಿ.ಬಿ.ರಾಮಮೂರ್ತಿ, ನಿವೃತ್ತ ಐಎಎಸ್ ಅಧಿಕಾರಿ, ಅಂದಿನ ಅಧ್ಯಕ್ಷರು, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇವರುಗಳ ವಿರುದ್ಧ ಲೋಕಾಯುಕ್ತರು, ಕರ್ನಾಟಕ ಲೋಕಾಯುಕ್ತ ಕಾಯ್ದೆ, 1984ರ ಕಲಂ 12(3)ರಡಿ ಇಲಾಖಾ ವಿಚಾರಣೆಗೆ ವಹಿಸಲು ಮಾಡಿರುವ ಶಿಫಾರಸನ್ನು ಕೈಬಿಡುವ ಬಗ್ಗೆ ತೀರ್ಮಾನಿಸಲಾಗಿದೆ ಎಂದಿದ್ದಾರೆ.

ಅನಿಲ್ ಕುಮಾರ್ ವೈ.ಡಿ. ಸಹಾಯಕ ಇಂಜಿನಿಯರ್ ಮತ್ತು ಮಹಾದೇವ ಬಿ.ಕೆ. ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಕಾವೇರಿ ನೀರಾವರಿ ನಿಗಮ ಇವರುಗಳ ವಿರುದ್ಧ ಮಾನ್ಯ ಉಪ ಲೋಕಾಯುಕ್ತರು ಕರ್ನಾಟಕ ಲೋಕಾಯುಕ್ತ ಕಾಯ್ದೆ, 1984ರ ಕಲಂ 12(3)ರಡಿ ಇಲಾಖಾ ವಿಚಾರಣೆಗೆ ವಹಿಸಲು ಮಾಡಿರುವ ಶಿಫಾರಸನ್ನು ಕೈಬಿಡುವ ಬಗ್ಗೆ ತೀರ್ಮಾನಿಸಲಾಗಿದೆ ಎಂದರು.

ಕರ್ನಾಟಕ ವೈದ್ಯಕೀಯ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ವಿಧೇಯಕ, 2025ಕ್ಕೆ ಅನುಮೋದನೆ ದೊರಕಿದೆ ಎಂದು ಸಚಿವ ಪಾಟೀಲ್ ಮಾಹಿತಿ ನೀಡಿದರು.

Share This Article
error: Content is protected !!
";