ಜಾತಿ ಗಣತಿ ವರದಿ, ಇಂದು ಕಾಂಗ್ರೆಸ್ ಪಕ್ಷದ ಒಕ್ಕಲಿಗ ಶಾಸಕರ ಸಭೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಠಿಸಿರುವ ಜಾತಿ ಗಣತಿ ವರದಿ ಕುರಿತ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ಒಕ್ಕಲಿಗ ಶಾಸಕರ ಮಹತ್ವದ ಸಭೆ ಕರೆದಿದ್ದಾರೆ.

ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಜಾತಿ ಗಣತಿ ವಿಚಾರವಾಗಿ ಮಂಗಳವಾರ ಕಾಂಗ್ರೆಸ್ ಪಕ್ಷದ ಒಕ್ಕಲಿಗ ಸಮುದಾಯದ ಶಾಸಕರ ಜೊತೆ ಚರ್ಚೆ ಮಾಡಿ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಜಾತಿ ಗಣತಿ ವರದಿಯನ್ನು ಸಂಪೂರ್ಣವಾಗಿ ನಾನು ಓದಿಲ್ಲ, ಅದರ ಅಧ್ಯಯನ ಮಾಡಲಾಗುತ್ತಿದೆ. ಕಾಂಗ್ರೆಸ್ ಪಕ್ಷದ ನಮ್ಮ ಸಮುದಾಯದ ಶಾಸಕರ ಸಭೆ ಕರೆದಿದ್ದೇನೆ. ಅವರ ಜತೆ ಚರ್ಚೆ ಮಾಡಿ, ಯಾರ ಮನಸ್ಸಿಗೂ ನೋಯಿಸದೇ ಎಲ್ಲರ ಗೌರವ ಕಾಪಾಡಲು ಸಲಹೆ ನೀಡುತ್ತೇವೆ ಎಂದು ಡಿಸಿಎಂ ತಿಳಿಸಿದರು.

 ಬೆಂಗಳೂರಿನ ಕುಮಾರ ಪಾರ್ಕ್ ಗಾಂಧಿ ಭವನ ರಸ್ತೆಯಲ್ಲಿರುವ ಡಿಸಿಎಂ ಅವರ ಸರ್ಕಾರಿ ನಿವಾಸದಲ್ಲಿ ಮಂಗಳವಾರ ಸಂಜೆ 6 ಗಂಟೆಗೆ ಕಾಂಗ್ರೆಸ್ ಪಕ್ಷದ ಒಕ್ಕಲಿಗ ಶಾಸಕರ ಸಭೆ ಕರೆಯಲಾಗಿದೆ. ಧರ್ಮದ ಆಧಾರದಲ್ಲಿ ಟೆಂಡರ್ ನೀಡಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಹಕ್ಕುಗಳನ್ನು ಕಾಂಗ್ರೆಸ್ ಸರ್ಕಾರ ಕಸಿಯುತ್ತಿದೆ ಎನ್ನುವ ಆರೋಪದ ಬಗ್ಗೆ ಕೇಳಿದಾಗ, ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೂ ಗುತ್ತಿಗೆಯಲ್ಲಿ ಮೀಸಲಾತಿ ನೀಡಲಾಗಿದೆ.

ಸಮಾಜದಲ್ಲಿ ಯಾರು ಆರ್ಥಿಕವಾಗಿ ಹಿಂದುಳಿದಿದ್ದಾರೋ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವುದು ನಮ್ಮ ಆದ್ಯತೆ. ಕಾಂಗ್ರೆಸ್ ಪಕ್ಷ ಸಮಾಜದ ಎಲ್ಲಾ ವರ್ಗಗಳಿಗೂ ನ್ಯಾಯ ಒದಗಿಸುವ ಪಕ್ಷ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷ ಒಬಿಸಿಗಳ ಮೀಸಲಾತಿ ಕಿತ್ತುಕೊಂಡಿದೆ ಎನ್ನುವ ಪ್ರಧಾನಿ ಮೋದಿ ಅವರ ಹೇಳಿಕೆ ಕುರಿತು ಪ್ರಶ್ನಿಸಿದಾಗ, ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಂಡಿಲ್ಲ. ಬೆಂಗಳೂರಿನ ಸಂಸದರೊಬ್ಬರು ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಎದೆ ಸೀಳಿದರೆ ಅಕ್ಷರವಿಲ್ಲ, ಪಂಕ್ಚರ್ ಹಾಕಲು ಮಾತ್ರ ಸೀಮಿತ ಎಂದು ದ್ವೇಷ ಕಾರಿದ್ದರು. ಆದರೆ ನಾವು ಆ ಸಮುದಾಯ ಇತರೇ ಕೆಲಸಗಳನ್ನು ಮಾಡಲು ಸಾಮರ್ಥ್ಯ ಹೊಂದಿದೆ ಎಂದು ತೋರಿಸಬೇಕಾಗಿದೆ ಎಂದು ಹೇಳಿದರು.

Share This Article
error: Content is protected !!
";