ಚಂದ್ರವಳ್ಳಿ ನ್ಯೂಸ್, ಸಂಡೂರು:
ಹಣ ಬಲ, ತೋಳು ಬಲದಲ್ಲಿ ಸಂಡೂರನ್ನು ವಶಪಡಿಸಿಕೊಳ್ಳಲು ಬರ್ತಾರೆ ಎಚ್ಚರ. ಕರ್ನಾಟಕ ಬಿಜೆಪಿ ಸೋಲಿಸಿ ಬಳ್ಳಾರಿ ಉಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತದಾರರಿಗೆ ಕರೆ ನೀಡಿದರು.
ಸಂಡೂರು ವಿಧಾನಸಭಾ ಕ್ಷೇತ್ರದ ಬನ್ನಿಹಟ್ಟಿ ಗ್ರಾಮದಲ್ಲಿ ನಡೆದ ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿದ ಮಾತುಗಳನ್ನು ಅವರು ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿ ತಿಳಿಸಿದ್ದಾರೆ. ನಾನು ಬಳ್ಳಾರಿಗೆ ಬಂದಾಗ ರೆಡ್ಡಿ ಬ್ರದರ್ಸ್ ಮತ್ತು ಶ್ರೀರಾಮುಲು ಭಾಷಣ ಮಾಡೋಕೆ ಜಾಗ ಕೊಡದೆ ಅವಮಾನ ಮಾಡಿದ್ರು.
ದೇವಸ್ಥಾನದ ಬಾಗಿಲಲ್ಲಿ ಒಬ್ನೇ ನಿಂತು ಭಾಷಣ ಮಾಡಿ ಹೋಗಿದ್ದೆ. ಒಂದು ಮನೆಗೆ ಹೋಗಿ ಕುಡಿಯೋಕೆ ನೀರು ಕೇಳಿದ್ರೂ ನನಗೆ ನೀರು ಕೊಡೋಕೂ ಜನ ಭಯ ಬೀಳ್ತಿದ್ರು. ಒಂದು ಕಾಲದಲ್ಲಿ ಜನಾರ್ದನ ರೆಡ್ಡಿ ಅವರ ದಬ್ಬಾಳಿಕೆ, ದೌರ್ಜನ್ಯಗಳಿಗೆ ಮಿತಿಯೇ ಇರಲಿಲ್ಲ ಎಂದು ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು.
ರೆಡ್ಡಿ ಬ್ರದರ್ಸ್ ಬಳ್ಳಾರಿಯನ್ನು ಹಾಳು ಮಾಡಲು ಬಿಡಬಾರದು ಎಂದು ನಾನು ಬೆಂಗಳೂರಿನಿಂದ ಪಾದಯಾತ್ರೆ ಮಾಡಿದೆ. ಬಳ್ಳಾರಿ ಜನರನ್ನು ಭಯಮುಕ್ತಗೊಳಿಸಿದ್ದು ಕಾಂಗ್ರೆಸ್ ಪಕ್ಷ ಎಂದರು.
ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಜಿಂದಾಲ್ ಗೆ ಕಾಲಿಟ್ಟರೂ ಜಿಲ್ಲಾ ಮಟ್ಟದ ಅಧಿಕಾರಿಗಳೂ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಾಣಲು ಬರಲಿಲ್ಲ. ಆ ಮಟ್ಟದಲ್ಲಿ ಜನಾರ್ಧನ ರೆಡ್ಡಿಯವರು ಅಧಿಕಾರಿಗಳಲ್ಲಿ ಭಯ, ಭೀತಿ ಸೃಷ್ಟಿ ಮಾಡಿದ್ದರು.
ನಾನು, ಇಬ್ರಾಹಿಂ ಚುನಾವಣಾ ಪ್ರಚಾರಕ್ಕೆ ಬಂದರೆ ಕಾರ್ಯಕ್ರಮ ಮಾಡಲು, ನನಗೆ ಭಾಷಣ ಮಾಡಲು ಜಾಗ ಕೊಡಲಿಲ್ಲ. ದೇವಸ್ಥಾನದ ಬಾಗಿಲಲ್ಲಿ ನಿಂತು ನಾನು ಭಾಷಣ ಮಾಡಿ ಹೋಗಿದ್ದೆ. ಮತ್ತೆ ಏನಾದರೂ ಜನಾರ್ಧನ ರೆಡ್ಡಿ ಪಟಾಲಂ ಬಳ್ಳಾರಿಯಲ್ಲಿ ಬೆಳೆದರೆ ಮತ್ತೆ ಅದೇ ಭೀತಿ, ಭಯದಲ್ಲಿ ಬಳ್ಳಾರಿ ನರಳಬೇಕಾಗುತ್ತದೆ.
ಆದ್ದರಿಂದ ಇದಕ್ಕೆ ಅವಕಾಶ ಕೊಡಬೇಡಿ. ಬಿಜೆಪಿಯನ್ನು ಸೋಲಿಸಿ ಬಳ್ಳಾರಿಯನ್ನು ಉಳಿಸಿ ಎಂದು ಸಿದ್ದರಾಮಯ್ಯ ಕರೆ ನೀಡಿದರು. ಸಂಡೂರಿನಲ್ಲಿ ರಸ್ತೆ, ನೀರು, ಶಾಲೆ, ಅಂಗನವಾಡಿ, ಆಸ್ಪತ್ರೆ, ಮೊಬೈಲ್ ಕ್ಲಿನಿಕ್ ಗಳು ಸೇರಿ ಏನೇನು ಅಭಿವೃದ್ಧಿ ಆಗಿದೆಯೋ ಅದೆಲ್ಲವೂ ಸಂತೋಷ್ ಲಾಡ್ ಮತ್ತು ತುಕಾರಾಮ್ ಅವರ ಅವಧಿಯಲ್ಲಿ ಆದವು.
ಬಿಜೆಪಿ ಅವಧಿಯಲ್ಲಿ ಲೂಟಿ ಮಾಡಿದ್ದು ಬಿಟ್ಟರೆ ಬೇರೇನೂ ಇಲ್ಲ. ಹೈದ್ರಾಬಾದ್ ಕರ್ನಾಟಕ, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371ಜೆ ಜಾರಿ ಮಾಡಿದ್ದು ಕಾಂಗ್ರೆಸ್. ನಮ್ಮ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ವರಿಷ್ಠರಾದ ಸೋನಿಯಾಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಧರಂಸಿಂಗ್ ಮತ್ತು ನಾನು ಸೇರಿ 371 ಜೆ ಜಾರಿ ಮಾಡಿದೆವು.
ಬಳಿಕ ನಾನು ಮುಖ್ಯಮಂತ್ರಿಯಾಗಿ ₹5,000 ಕೋಟಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಅನುದಾನ ನೀಡಿದೆ. 371ಜೆ ಬಂದಿದ್ದರಿಂದ ಇಲ್ಲಿನ ಮಕ್ಕಳು ಎಂಜಿನಿಯರ್, ಡಾಕ್ಟರ್ ಗಳಾದರು. ಸರ್ಕಾರಿ ಕೆಲಸಕ್ಕೆ ಸಾವಿರಾರು ಸಂಖ್ಯೆಯಲ್ಲಿ ಸೇರಲು ಅವಕಾಶವಾಯಿತು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಈಗ ಬಿಜೆಪಿ ಅವರು ಅಕ್ರಮ ಗಣಿಗಾರಿಕೆಯ ಹಣದ ಚೀಲಗಳನ್ನು ಹೊತ್ತುಕೊಂಡು ಬಂದು ಕುಳಿತಿದ್ದಾರೆ. ಅವರ ಹಣಕ್ಕೆ ಮರುಳಾಗುತ್ತೀರಾ? ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಭಾಗ್ಯದ ಬಾಗಿಲು ತೆರೆದ ಕಾಂಗ್ರೆಸ್ ಕೈ ಹಿಡಿಯುತ್ತೀರಾ ಪ್ರಾಮಾಣಿಕವಾಗಿ ಯೋಚಿಸಿ ನಿರ್ಧರಿಸಿ.
ಹತ್ತು ಹಲವು ಭಾಗ್ಯಗಳನ್ನು ಕೊಟ್ಟಿದ್ದು, ಐದಕ್ಕೆ ಐದೂ ಗ್ಯಾರಂಟಿಗಳನ್ನೂ ಜಾರಿ ಮಾಡಿ ವರ್ಷಕ್ಕೆ ₹56 ಸಾವಿರ ಕೋಟಿ ಹಣವನ್ನು ನಿಮ್ಮ ಖಾತೆಗೆ ನೇರವಾಗಿ ಹಾಕ್ತಾ ಇರುವುದು ನಮ್ಮ ಸರ್ಕಾರ. ಆದ್ದರಿಂದ ನಿಮ್ಮ ಬದುಕಿಗೆ ಪ್ರತೀ ತಿಂಗಳು ಬೆಳಕು ನೀಡುವ ನಮಗೆ ಬೆಂಬಲಿಸಬೇಕೋ, ಚುನಾವಣೆ ಬಂದಾಗ ಕೊಡುವ ಅಕ್ರಮ ಗಣಿಗಾರಿಕೆಯ ಹಣಕ್ಕೆ ಓಟು ಹಾಕಬೇಕೋ? ನೀವೇ ತೀರ್ಮಾನಿಸಿ ಎಂದು ಅವರು ತಿಳಿಸಿದರು.
ನಾವಿನ್ನೂ ಮೂರೂವರೆ ವರ್ಷ ಅಧಿಕಾರದಲ್ಲಿ ಇರ್ತೀವಿ. ಅಲ್ಲಿಯವರೆಗೂ ನಾವು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಮುಂದುವರೆಸ್ತೀವಿ. ಬಿಜೆಪಿ ಅಪಪ್ರಚಾರವನ್ನು ನಂಬಬೇಡಿ. ಸುಳ್ಳುಗಳಿಗೆ ಮೋಸ ಹೋಗಬೇಡಿ. ಹೃದಯದ ಮಾತು ಕೇಳಿ ಅಭಿವೃದ್ಧಿಗೆ ನಿಮ್ಮ ಮತ ನೀಡಿ ಎಂದರು.
ಅನ್ನಪೂರ್ಣಮ್ಮ ಗೆದ್ದರೆ ನಾನೇ ಗೆದ್ದ ಹಾಗೆ. ಅನ್ನಪೂರ್ಣಮ್ಮ ಅವರಿಗೆ ಬೀಳುವ ಪ್ರತೀ ಓಟು ನನಗೆ ಹಾಕಿದಂತೆ, ಸಂತೋಷ್ ಲಾಡ್ ಅವರಿಗೆ ಹಾಕಿದಂತೆ ಎಂದು ಸಿದ್ದರಾಮಯ್ಯ ಹೇಳಿದರು.