ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ:
ಹೊಳಲ್ಕೆರೆ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ತಹಶೀಲ್ದಾರ್ ಬೀಬಿ ಫಾತಿಮಾ ಅಧ್ಯಕ್ಷತೆಯಲ್ಲಿ ಬಾಲಕಾರ್ಮಿಕ ಪುನರ್ವಸತಿ ಸಮಿತಿ ಸಭೆ ನಡೆಯಿತು.
ಮುಂಬರುವ ಜೂನ್ 12ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಲುವಾಗಿ ಸಭೆಯಲ್ಲಿ ಚರ್ಚಿಸಲಾಯಿತು.
ಜೂನ್ 12ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಅಂಗವಾಗಿ ವಿವಿಧ ಶಾಲಾ ಮಕ್ಕಳಿಂದ ಜಾಥಾ ಕಾರ್ಯಕ್ರಮ ಹಾಗೂ ಕಚೇರಿಗಳಲ್ಲಿ ಬಾಲ ಕಾರ್ಮಿಕ ನಿಷೇಧ ಕುರಿತು ಪ್ರಮಾಣ ವಚನ ಸ್ವೀಕರಿಸುವುದು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಂಚಾಯಿತಿ ವತಿಯಿಂದ ತಾಲ್ಲೂಕಿನ ಎಲ್ಲಾ ಗ್ರಾಮಗಳಲ್ಲಿ ಹಾಗೂ ಪುರಸಭೆ ವತಿಯಿಂದ ಕಸದ ವಾಹನಗಳಲ್ಲಿ ಬಾಲ ಕಾರ್ಮಿಕ ನಿಷೇಧ ಕುರಿತು ಆಡಿಯೋ ರೆಕಾರ್ಡಿಂಗ್ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ತಿಳಿಸಿದ ಅವರು,
ಎಲ್ಲ ತಾಲ್ಲೂಕು ಮಟ್ಟದ ಅಧಿಕಾರಿಗಳು ಜೂನ್ 12ರಂದು ನಡೆಯುವ ಜಾಥಾ ಕಾರ್ಯಕ್ರಮ ಹಾಗೂ ಜೂನ್ 12ರ ನಂತರ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಕುರಿತ ಅಭಿಯಾನವನ್ನು ಜೂನ್ 30 ರವರೆಗೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಕಾರ್ಮಿಕ ನಿರೀಕ್ಷಕ ಡಿ.ರಾಜಣ್ಣ, ಬಾಲಕಾರ್ಮಿಕ ಯೋಜನಾ ನಿರ್ದೇಶಕ ಪಿ.ಸತೀಶ್ ಕುಮಾರ್ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.