ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಪೌರ ನೌಕರರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ನಗರಸಭೆಯಿಂದ ಮೆರವಣಿಗೆ ಮೂಲಕ ಹೊರಟ ಪೌರ ಕಾರ್ಮಿಕರು ಹಾಗೂ ಪೌರ ನೌಕರರು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.
ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಡಿ.ದುರುಗೇಶ್ ಮಾತನಾಡಿ ಪೌರ ಕಾರ್ಮಿಕರನ್ನು ಖಾಯಂಗೊಳಿಸುವುದಾಗಿ ರಾಮನಗರದಲ್ಲಿ ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಂಗಳೂರಿನ ಬಿ.ಬಿ.ಎಂ.ಪಿ.ಯಲ್ಲಿರುವ ಪೌರ ಕಾರ್ಮಿಕರನ್ನು ಮಾತ್ರ ಖಾಯಂಗೊಳಿಸಿದ್ದು, ಉಳಿದಂತೆ ರಾಜ್ಯದ ನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಜೀವನ ಭದ್ರತೆಯಿಲ್ಲದೆ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರು ಹಾಗೂ ಪೌರ ನೌಕರರನ್ನು ಖಾಯಂಗೊಳಿಸದೆ ಮಲತಾಯಿ ಧೋರಣೆ ಅನುಸರಿಸುತ್ತಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು?
ನಗರಸಭೆಯಲ್ಲಿ ನೀರು ಸರಬರಾಜು ಮಾಡುವವರು, ವಾಹನ ಚಾಲಕರುಗಳನ್ನು ಖಾಯಂಗೊಳಿಸಬೇಕು. ದಿನನಿತ್ಯದ ಬದುಕು ಕಷ್ಟದಲ್ಲಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪೌರ ಕಾರ್ಮಿಕರನ್ನು ಖಾಯಂಗೊಳಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದೆಂದು ಎಚ್ಚರಿಸಿದರು.
ಪೌರ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷೆ ರೇಣುಕ ಮಾತನಾಡಿ ಪೌರ ಕಾರ್ಮಿಕರು ಮತ್ತು ನೀರು ಸರಬರಾಜುದಾರರು, ಹೊರ ಗುತ್ತಿಗೆ ನೌಕರರಿಗೆ ನೇರ ಪಾವತಿಯಾಗಬೇಕು. ಪ್ರತಿ ತಿಂಗಳು ವೇತನ ಸಿಗುತ್ತಿಲ್ಲದ ಕಾರಣ ಕುಟುಂಬದ ನಿರ್ವಹಣೆ ಕಷ್ಟವಾಗಿದೆ. ರಾಜ್ಯ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿರುವುದು ಸರಿಯಲ್ಲ. ಹಾಗಾಗಿ ಮೇ.೨೭ ರಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪೌರ ಕಾರ್ಮಿಕರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ಜ್ಯೋತಿ ಸಂಜೀವಿನಿ ಯೋಜನೆ ಪೌರ ಕಾರ್ಮಿಕರಿಗೂ ಅನ್ವಯವಾಗಬೇಕು. ಗುತ್ತಿಗೆ, ಹೊರ ಗುತ್ತಿಗೆ ಬದಲು ನೇರ ಪಾವತಿಯಾಗಬೇಕು. ಯಾವುದೇ ಕಾರಣಕ್ಕೂ ಮುಷ್ಕರದಿಂದ ಹಿಂದೆ ಸರಿಯುವುದಿಲ್ಲವೆಂದು ಹೇಳಿದರು.
ಪೌರ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಲ್.ಪಿ.ಲವ, ಜಗದೀಶ್, ರಾಜಣ್ಣ, ಕೆ.ಕುಮಾರ್, ಪೌರ ನೌಕರರ ಸಂಘದ ಪದಾಧಿಕಾರಿಗಳಾದ ಪುಟ್ಟಪ್ಪ, ಮೋಕ್ಷದಾಯಿನಿ, ನವೀನ್ ಸೇರಿದಂತೆ ನೂರಾರು ಪೌರ ಕಾರ್ಮಿಕರು ಹಾಗೂ ಪೌರ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ ನಂತರ ನಗರಸಭೆಗೆ ಆಗಮಿಸಿದ ಪ್ರತಿಭಟನಾಕಾರರು ನಗರಸಭೆ ಅಧ್ಯಕ್ಷರು ಹಾಗೂ ಪೌರಾಯುಕ್ತರಿಗೂ ಮನವಿ ಸಲ್ಲಿಸಿದರು.