ಸಿಎಂ ಹಾಗೂ 140 ಶಾಸಕರು ನನ್ನ ಬೆಂಬಲಿಗರೇ-ಡಿಸಿಎಂ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪಕ್ಷದ ಎಲ್ಲ 140 ಶಾಸಕರೂ ನನ್ನ ಬೆಂಬಲಕ್ಕೆ ಇದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಿಮ್ಮ ಬೆಂಬಲಿಗರು ಹೈಕಮಾಂಡ್ ತೀರ್ಮಾನದ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಸಿಎಂ ಅವರು, ಯಾರು ಹೇಳಿದರು? 140 ಶಾಸಕರು ಕೂಡ ನನ್ನ ಬೆಂಬಲಿಗರೇ. ಸಿಎಂ ಸಿದ್ದರಾಮಯ್ಯ ಅವರು ಕೂಡ ನನಗೆ ಬೆಂಬಲವಾಗಿದ್ದಾರೆ.

- Advertisement - 

ನಾನು ಹಾಗೂ ಸಿಎಂ ಅವರು ಏನು ಮಾತನಾಡಿದ್ದೇವೆ ಎಂದು ನಿಮಗೆ ಗೊತ್ತಿದೆಯಾ? ರಾಹುಲ್ ಗಾಂಧಿ ಸಮ್ಮುಖದಲ್ಲಿ ನಾವು ಏನು ಮಾತನಾಡಿಕೊಂಡಿದ್ದೇವೆ, ಹೈಕಮಾಂಡ್ ಸಮ್ಮುಖದಲ್ಲಿ ಏನು ಮಾತನಾಡಿದ್ದೇವೆ, ಎಲ್ಲ ಕೂತು ಏನು ತೀರ್ಮಾನ ಮಾಡಿದ್ದೇವೆ ಎಂದು ನಮಗೆ ಗೊತ್ತಿದೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು. ಸಿಎಂ-ಡಿಸಿಎಂ ನಡುವೆ ಏನು ಚರ್ಚೆಯಾಗಿದೆ ಎಂದು ನಮಗೆ ಗೊತ್ತು, ಇದನ್ನು ಸಾರ್ವಜನಿಕವಾಗಿ ಚರ್ಚೆ ಮಾಡುವುದಿಲ್ಲ ಈ ವಿಚಾರವನ್ನು ನಿಮ್ಮ ಮುಂದೆ ಬಹಿರಂಗವಾಗಿ ಚರ್ಚೆ ಮಾಡಲು ಸಾಧ್ಯವೇ? ಕಾಲವೇ ಎಲ್ಲದಕ್ಕೂ ಉತ್ತರ ನೀಡಲಿದೆ ಎಂದು ಡಿಸಿಎಂ ಮಾರ್ಮಿಕವಾಗಿ ಹೇಳಿದರು.

ದೆಹಲಿ ಭೇಟಿ ಕುರಿತು ಮಾತನಾಡಿದ ಡಿಸಿಎಂ ಮಾಧ್ಯಮಗಳು ರಾಹುಲ್ ಗಾಂಧಿ ಭೇಟಿಯಾಗಿಲ್ಲ ಎಂದು ಬರೆದಿವೆ. ನಾವು ದೆಹಲಿಗೆ ಹೋಗುವುದೇ ರಾಜಕೀಯ, ಪಕ್ಷ ಹಾಗೂ ಸರ್ಕಾರದ ಕೆಲಸಗಳಿಗೆ. ಒಂದು ದಿನ ನಾವು ಜೊತೆಯಲ್ಲಿ ಕೂತು ಚರ್ಚೆ ಮಾಡಿರುವ ಫೋಟೋ ವರದಿ ಮಾಡಿದ್ದೀರಿ, ಮರುದಿನ ಭೇಟಿಯೇ ಆಗಿಲ್ಲ ಎಂದು ಹೇಳುತ್ತಿದ್ದೀರಿ. ಈ ವಿಚಾರದಲ್ಲಿ ಕಾಲವೇ ಉತ್ತರ ನೀಡಲಿದೆ ಎಂದು ಹೇಳಿದ್ದೇನೆ. ಇದರ ಹೊರತಾಗಿ ನಾನು ಬೇರೆ ವಿಚಾರ ಚರ್ಚೆ ಮಾಡುವುದಿಲ್ಲ ಎಂದು ಅವರು ತಿಳಿಸಿದರು.

- Advertisement - 

ನಿಮ್ಮ ಸಹೋದರ ಹೈಕಮಾಂಡ್ ಒಳ್ಳೆಯ ಸುದ್ದಿ ನೀಡಲಿದೆ ಎಂದು ಹೇಳಿದ್ದಾರೆ ಎಂದು ಪತ್ರಕರ್ತರು ಪ್ರಶ್ನಿಸಿದಾಗ, ನನ್ನ ತಮ್ಮ, ನಮ್ಮ ಕಾರ್ಯಕರ್ತರು, ಮಾಧ್ಯಮಗಳು ಕೂಡ ಹೇಳುತ್ತಿವೆ ಎಂದು ಡಿಸಿಎಂ ಮಾರ್ಮಿಕವಾಗಿ ಹೇಳಿದರು.

ಒಂದೇ ಬಾರಿಗೆ ಚುನಾವಣೆ ನಡೆಸಲು ಚಿಂತನೆ:
ಜೂನ್ ಅಂತ್ಯದ ವೇಳೆಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವಂತೆ ನ್ಯಾಯಾಲಯ ಆದೇಶ ನೀಡಿದೆ. ನಮ್ಮ ಸರ್ಕಾರ ಸಂವಿಧಾನದ
73, 74ನೇ ತಿದ್ದುಪಡಿಗೆ ಬದ್ಧವಾಗಿದೆ. ಯುವಕರಿಗೆ ಅಧಿಕಾರ ನೀಡಬೇಕು, ಹೊಸ ಪೀಳಿಗೆ ಅಧಿಕಾರಕ್ಕೆ ಬರಬೇಕು. ಈಗ ಐದು ಪಾಲಿಕೆಗಳಿಂದ 369 ವಾರ್ಡ್​​ಗಳನ್ನು ರಚಿಸಲಾಗಿದೆ. ಇನ್ನು ಬೆಂಗಳೂರಿನ ಹೊರವಲಯವನ್ನು ಪಾಲಿಕೆ ವ್ಯಾಪ್ತಿಗೆ ಸೇರಿಸಿಕೊಳ್ಳುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಅವರು ತಿಳಿಸಿದರು.

ನಮ್ಮ ಸರ್ಕಾರ ಜಿಪಂ ಹಾಗೂ ತಾಪಂ ಚುನಾವಣೆ ನಡೆಸಲು ತೀರ್ಮಾನಿಸಿದೆ. ಇವುಗಳಿಗೆ ಇದ್ದ ಮೀಸಲಾತಿ ಸಮಸ್ಯೆ ಬಗೆಹರಿಸಲು ಸಿಎಂ ಹಾಗೂ ಸಚಿವರು ತಿಳಿಸಿದ್ದಾರೆ. ಗ್ರಾಮ ಪಂಚಾಯತ್ ಚುನಾವಣೆಗಳನ್ನೂ ಪಕ್ಷದ ಚಿಹ್ನೆ ಮೇಲೆ ನಡೆಸಬೇಕು ಎಂದು ಅನೇಕರು ಸಲಹೆ ನೀಡಿದ್ದು, ನಾವಿನ್ನೂ ಆ ಬಗ್ಗೆ ತೀರ್ಮಾನ ಮಾಡಿಲ್ಲ. ಒಂದೇ ಬಾರಿಗೆ ಎಲ್ಲವನ್ನು ನಡೆಸಲು ಚಿಂತನೆ ನಡೆಯುತ್ತಿದೆ ಎಂದು ಡಿ.ಕೆ ಶಿವಕುಮಾರ್ ಹೇಳಿದರು.

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮತಯಂತ್ರದ ಹೊರತಾಗಿ ಮತಪತ್ರ ಬಳಸುವ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ, ನನಗೂ ಈ ಬಗ್ಗೆ ಮಾಹಿತಿ ಬಂದಿದೆ. ಇದು ರಾಜ್ಯ ಚುನಾವಣಾ ಆಯೋಗಕ್ಕೆ ಬಿಟ್ಟ ವಿಚಾರ. ಮತಪತ್ರ ಬಳಸುವುದರಲ್ಲಿ ತಪ್ಪೇನು ಇಲ್ಲ. ಯಾವ ರೂಪದಲ್ಲಿ ಚುನಾವಣೆ ನಡೆಸಲಾಗುವುದು ಎನ್ನುವುದಕ್ಕಿಂತ ಮತದಾನ ನಡೆಯುವುದು ಬಹಳ ಮುಖ್ಯ.

ಈಗ ಕರಡು ಮತದಾರರ ಪಟ್ಟಿ ಬಿಡುಗಡೆಯಾಗಿದ್ದು, ನಾವು ಈಗಾಗಲೇ ಬಿಎಲ್ಎಗಳ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಅವರು ತಿಳಿಸಿದರು. ಯಾವುದೇ ಮತದಾರರ ಹೆಸರು ಪಟ್ಟಿಯಲ್ಲಿ ಬಿಟ್ಟುಹೋಗಿದ್ದರೆ ಅವರಿಗೆ ಮತ್ತೆ ಅವಕಾಶ ಕಲ್ಪಿಸಬೇಕು ಹಾಗೂ ಅವರ ಹಕ್ಕನ್ನು ಅವರಿಗೆ ನೀಡಬೇಕು. ಅಧಿಕಾರಿಗಳ ಕಾರ್ಯದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ಅದಕ್ಕಾಗಿಯೇ ಇರುವ ಕಾನೂನು ಚೌಕಟ್ಟಿನಲ್ಲಿ ಚುನಾವಣಾ ಆಯೋಗ ಕೆಲಸ ಮಾಡಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದರು.

ಚುನಾವಣಾ ಆಯೋಗದ ಮೇಲೆ ಅನುಮಾನದಿಂದ ಮತಪತ್ರ ಬಳಸಲಾಗುವುದೇ ಎಂದು ಕೇಳಿದಾಗ, ಚುನಾವಣೆ ನಡೆಸುತ್ತಿರುವುದು ಚುನಾವಣಾ ಆಯೋಗ. ಚುನಾವಣೆ ಮಾಡಲು ನಾವ್ಯಾರು?  ರಾಜ್ಯ ಚುನಾವಣಾ ಆಯೋಗ ನಮ್ಮ ಸರ್ಕಾರದ ನಿಯಂತ್ರಣಕ್ಕೆ ಬರುವುದಿಲ್ಲ. ಅವರೇ ಏನು ಮಾಡಬೇಕು ಎಂದು ತೀರ್ಮಾನ ಮಾಡುತ್ತಾರೆ ಎಂದು ಡಿಸಿಎಂ ತಿಳಿಸಿದರು.

 

Share This Article
error: Content is protected !!
";