ಯಾವ ಜಾತಿಗೂ ಅನ್ಯಾಯವಾಗಬಾರದು-ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮೂಲ ಪ್ರತಿ ಮುಖ್ಯಮಂತ್ರಿಗಳ ಬಳಿಯಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮತ್ತೊಮ್ಮೆ ಹಾಸ್ಯಾಸ್ಪದ ಹೇಳಿಕೆ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹರಿಹಾಯ್ದರು.

ಬೆಳಗಾವಿಯ ಸಾಂಭ್ರಾ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮ‌ಗಳೊಂದಿಗೆ ಮಾತನಾಡಿದರು.

ಅವರು ಯಾವತ್ತಾದರೂ ಸತ್ಯವನ್ನು ಹೇಳಿದ್ದಾರೆಯೇ? ಮೂಲ ಪ್ರತಿ ನನ್ನ ಬಳಿಯಿರಲು ಹೇಗೆ ಸಾಧ್ಯ? ರಾಹುಲ್ ಗಾಂಧಿಯವರಿಗೆ ನಾವು ಪತ್ರ ಬರೆದಿಲ್ಲ ಆದರೆ ಅವರೊಂದಿಗೆ ಚರ್ಚೆ ಮಾಡಿ ಸಚಿವ ಸಂಪುಟ ಸಭೆಯಲ್ಲಿ ಸಮೀಕ್ಷೆಯ ವರದಿಯನ್ನು ಮಂಡಿಸಿದ್ದೇವೆ ಎಂದು ಸಿಎಂ ತಿಳಿಸಿದರು.

ಸಚಿವ ಸಂಪುಟ ಸಭೆಯಲ್ಲಿ ಯಾರೂ ಈ ಬಗ್ಗೆ ವಿರೋಧ ವ್ಯಕ್ತಪಡಿಸಿ, ಜೋರಾಗಿ ಮಾತನಾಡಿಲ್ಲ. ಸಮೀಕ್ಷೆಯನ್ನು ಓದಿಕೊಂಡು ಅಭಿಪ್ರಾಯಗಳನ್ನು ತಿಳಿಸುವಂತೆ ಸೂಚಿಸಲಾಗಿದ್ದು, ಸಚಿವರು ಅಭಿಪ್ರಾಯ ತಿಳಿಸಿದ ನಂತರ ಪುನ: ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ಸಿಎಂ ತಿಳಿಸಿದರು.

ಯಾವ ಜಾತಿಗೂ ಅನ್ಯಾಯವಾಗಬಾರದು ಎನ್ನುವುದು ಸರ್ಕಾರದ ಉದ್ದೇಶ. ಇದು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ. ಸಂವಿಧಾನ ಜಾರಿಯಾಗಿ 75 ವರ್ಷಗಳಾಗಿದ್ದರೂ ಬಡವ ಬಡವನಾಗಿಯೇ ಉಳಿಯಬೇಕೆ? ಸಮಾನತೆ ಬೇಡವೇ, ಜಾತಿಗೆ ಅಂಟಿಕೊಂಡೇ ಇರಬೇಕೆ? ಎಂದು ಸಿದ್ದರಾಮಯ್ಯ ತೀಕ್ಷ್ಣವಾಗಿ ಪ್ರಶ್ನಿಸಿದರು.

ಹಿಂದುಳಿದವರಿಗೆ, ಮುಸ್ಲಿಂಮರಿಗೆ ಮಾತ್ರವಲ್ಲದೆ ಎಲ್ಲಾ ಧರ್ಮದ, ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು, ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು. ಇದೇ ನಮ್ಮ ಗುರಿ. ಇದು ಸಾಮಾಜಿಕ, ಶೈಕ್ಷಣಿಕ ಗಣತಿಯ ಆಶಯ ಎಂದು ಸಿಎಂ ತಿಳಿಸಿದರು.

 

 

Share This Article
error: Content is protected !!
";