ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೋವಿಡ್ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ. ನಾವು ಎಂತಹ ಪರಿಸ್ಥಿತಿ ಎದುರಾದರೂ ಎದುರಿಸಲು ಸಿದ್ಧರಾಗಿರಬೇಕು. ವೆಂಟಿಲೇಟರ್, ಆಮ್ಲಜನಕ, ವಾರ್ಡ್ ಗಳಿಗೆ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿ ಮಾತನಾಡಿದರು.
ರಾಜ್ಯದಲ್ಲಿ ಸುಮಾರು 65 ಇದ್ದ ಕೋವಿಡ್ ಪ್ರಕರಣಗಳು 80 ಆಗಿವೆ. ಇದು ಗಂಭೀರವಾದ ತಳಿಯಲ್ಲ. ನೆಗಡಿ, ಕೆಮ್ಮು, ಜ್ವರ ಬಂದಿರುವ ಮಕ್ಕಳನ್ನು ಶಾಲೆಗೆ ಕಳುಹಿಸಬಾರದು ಹಾಗೂ ವೃದ್ಧರು, ವಿವಿಧ ಕಾಯಿಲೆಗಳಿಗೆ ತುತ್ತಾಗಿರರುವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಲಸಿಕೆಗಳನ್ನು ಮುನ್ನೆಚ್ಚರಿಕಾ ಕ್ರಮವಾಗಿ ಸಂಗ್ರಹಿಸಬೇಕು ಎಂದು ಸೂಚಿಸಲಾಗಿದೆ ಎಂದು ಅವರು ಹೇಳಿದರು.
ಎಲ್ಲರೂ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಿಲ್ಲ. ಆದರೆ ವೃದ್ಧರು, ಕಾಯಿಲೆಯಿರುವವರು ಮಾಸ್ಕ್ ಕಡ್ಡಾಯವಾಗಿ ಹಾಕಿಕೊಳ್ಳುವಂತೆ ಸೂಚಿಸಲಾಗಿದೆ. ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ಮಾಡಲು ಕೇಂದ್ರದಿಂದ ಇನ್ನೂ ಸೂಚನೆ ಬಂದಿಲ್ಲ, ಆದರೂ ಎಚ್ಚರಿಕೆ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.