ಚಂದ್ರವಳ್ಳಿ ನ್ಯೂಸ್, ಮೈಸೂರು:
ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಹೈಕಮಾಂಡ್ ನಾಯಕತ್ವ ಬದಲಾವಣೆ ವಿಚಾರವಾಗಿ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ ಅದಕ್ಕೆ ಬದ್ಧ ಇರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಮೈಸೂರು ನಗರದ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಾಯಕತ್ವ ಗೊಂದಲವನ್ನು ಸ್ಥಳೀಯ ಮಟ್ಟದಲ್ಲೇ ಬಗೆಹರಿಸಿಕೊಳ್ಳಬೇಕೆಂದು ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿ, ನಾನು ಹೈಕಮಾಂಡ್ ಜೊತೆ ಮಾತನಾಡಿದ್ದೇನೆ, ಅವರು ಈ ಬಗ್ಗೆ ನಾವು ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದಾರೆ. ಅವರ ತೀರ್ಮಾನಕ್ಕೆ ನಾನು ಬದ್ಧ ಎಂದು ಸಿದ್ದರಾಮಯ್ಯ ಪುನರುಚ್ಚರಿಸಿದರು.
ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ಸ್ಪಷ್ಟಪಡಿಸಿದ್ದರೂ ಯಾಕೆ ಈ ವಿಚಾರ ಚರ್ಚೆಯಾಗುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ, ಈ ವಿಷಯ ಕುರಿತು ಮಾಧ್ಯಮದವರು ಚರ್ಚೆ ಮಾಡುತ್ತಿದ್ದೀರಿ. ಇಷ್ಟೊಂದು ಪ್ರಶ್ನೆ ಕೇಳಬೇಕಾದ ಅಗತ್ಯವೇನಿದೆ?. ನಾನು ಸದನದಲ್ಲಿ ಸ್ಪಷ್ಟನೆ ನೀಡಿದ್ದೇನೆ, ಆದರೂ ಮತ್ತೇಕೆ ಚರ್ಚೆ? ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.
ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ, ಅವರು ಹೇಳಿರುವ ವಿಷಯ ಒಪ್ಪಬೇಕಾದ ವಿಚಾರ. ಯಾರೂ ಪಕ್ಷಕ್ಕಿಂತ ದೊಡ್ಡವರಾಗಲು ಸಾಧ್ಯವೇ ಇಲ್ಲ. ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್ ಗಾಂಧಿಯವರು ತೀರ್ಮಾನಿಸಬೇಕು.
ಅವರ ತೀರ್ಮಾನಕ್ಕೆ ನಾವು ಬದ್ಧ. ನಾನು ನಾಯಕತ್ವ ಬದಲಾವಣೆ ವಿಚಾರದ ಬಗ್ಗೆ ಪಕ್ಷದ ವರಿಷ್ಠರ ಬಳಿ ಮಾತನಾಡಿದ್ದು, ಈ ಬಗ್ಗೆ ನಾವು ತೀರ್ಮಾನಿಸುತ್ತೇವೆ ಎಂದು ಹೇಳಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರನ್ನು ಭೇಟಿಯಾದ ಬಗ್ಗೆ ಮಾತನಾಡಿ, ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ, ಅವರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿದೆ? ಎಂದು ಸಿದ್ದರಾಮಯ್ಯ ತೀಕ್ಷ್ಣವಾಗಿ ಪ್ರಶ್ನಿಸಿದರು.
ಕೆ.ಎನ್.ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಮಾಡಿದ್ದೇ ನಾನು ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ, ಅಧಿಕಾರದಲ್ಲಿದ್ದಾಗ ನಾನು ಮಾಡಿದೆ, ಅವರು ಮಾಡಿದರು ಎನ್ನುವುದು ಮುಖ್ಯವಲ್ಲ. ಅದರ ಪ್ರಶ್ನೆಯೇ ಇಲ್ಲ. ಆಗ ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದರು, ಸರ್ಕಾರ ಮಾಡಿತ್ತು ಎಂದು ಟಾಂಗ್ ಕೊಟ್ಟರು.

