ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶುಕ್ರವಾರ ಬೆಳ್ಳಂಬೆಳಗ್ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ಕೆಲ ನಾಯಕರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸುವ ಮೂಲಕ ಆಘಾತ ನೀಡಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದ ಹೆಚ್.ಕುಸುಮ ಅವರ ಮುದ್ದಿಪಾಳ್ಯ ರಸ್ತೆಯ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ಕೆಲ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲಿಸುತ್ತಿದ್ದಾರೆ.
ಅಧಿಕಾರಿಗಳಿಗೆ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಚಿತ್ರದುರ್ಗ ಶಾಸಕ ಕೆಸಿ ವಿರೇಂದ್ರ ಪಪ್ಪಿ ಅವರ ವ್ಯಾಪಾರಗಳಲ್ಲಿ ಕುಸುಮ ಅವರ ಸಹೋದರ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಹಾಗಾಗಿ ಶುಕ್ರವಾರ ಬೆಳಗಿನ ಜಾವ 4.30ಕ್ಕೆ 2 ಕಾರುಗಳಲ್ಲಿ ಬಂದ ಇಡಿ ಅಧಿಕಾರಿಗಳು ಕುಸುಮ ಮನೆ ಮೇಲೆ ದಾಳಿ ನಡೆಸಿ ಶೋಧ ಕಾರ್ಯ ಮಾಡುತ್ತಿದ್ದಾರೆ.

