ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶೇ.40ರಷ್ಟು ಕಮಿಷನ್ ಎಂದು ಬಿಜೆಪಿ ಸರ್ಕಾರದ ಮೇಲೆ ಇಲ್ಲಸಲ್ಲದ ಸುಳ್ಳು ಆರೋಪ, ಅಪಪ್ರಚಾರ ಮಾಡಿ ಕನ್ನಡಿಗರ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದ ಕರ್ನಾಟಕ ಕಾಂಗ್ರೆಸ್ ಪಕ್ಷ ಈಗ ಸಂಪೂರ್ಣವಾಗಿ ಕಮಿಷನ್ ದಂಧೆಯಲ್ಲಿ ಮುಳುಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯನವರೇ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರೇ, ನಿಮ್ಮ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಕಮಿಷನ್ ದಾಹ ಮಿತಿಮೀರಿದೆ ಎಂದು ಗುತ್ತಿಗೆದಾರರ ಸಂಘ ಆರೋಪಿಸಿದೆ. ಜಿಎಸ್ಟಿ ಪಾವತಿ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದು ಅನಿವಾರ್ಯ ಎಂದು ಗುತ್ತಿಗೆದಾರರು ಅಳಲು ತೋಡಿಕೊಂಡಿದ್ದಾರೆ. ಈಗೇನು ಹೇಳುತ್ತೀರಿ? ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡುತ್ತೀರಾ? ಎಂದು ಅಶೋಕ್ ಆಗ್ರಹ ಮಾಡಿದ್ದಾರೆ.
ಸುಳ್ಳು, ಅಪಪ್ರಚಾರ, ಕುತಂತ್ರದಿಂದ 136 ಸೀಟು ಪಡೆದ ಕಾಂಗ್ರೆಸ್ ಪಕ್ಷ, ಈಗ ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿದರೆ, 36 ಸೀಟೂ ಬರುವುದಿಲ್ಲ. ಇದು ನನ್ನ ಗ್ಯಾರೆಂಟಿ ಎಂದು ಅಶೋಕ್ ಕಾಂಗ್ರೆಸ್ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ.