ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಾರ್ವಜನಿಕರಿಗೆ ಸಂವಿಧಾನ ನೀಡಿರುವ ವಾಕ್ ಸ್ವಾತಂತ್ರ್ಯ ಕಿತ್ತುಕೊಳ್ಳುವ ಷಡ್ಯಂತ್ರವನ್ನು ಕಾಂಗ್ರೆಸ್ ಸರ್ಕಾರ ಮಾಡಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಬೆಂಗಳೂರಿನ ಪಕ್ಷದ ರಾಜ್ಯ ಕಛೇರಿ ಜೆ.ಪಿ ಭವನದಲ್ಲಿ ಶುಕ್ರವಾರ ಕರ್ನಾಟಕ ದ್ವೇಷ ಭಾಷಣ ಮತ್ತುದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕವನ್ನು ಗೃಹ ಸಚಿವ ಜಿ.ಪರಮೇಶ್ವರ್ ಅವರ ಮಂಡಿಸಿದ ಹಿನ್ನೆಲೆಯಲ್ಲಿ ಈ ವಿಧೇಯಕ ವಿರೋಧಿಸಿ, ಸುದ್ಧಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ಕರ್ನಾಟಕ ದ್ವೇಷ ಭಾಷಣ ಮತ್ತುದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕವು ಸಂವಿಧಾನ ನಮಗೆ ನೀಡಿರುವ ವಾಕ್ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುತ್ತದೆ ಎಂದು ನಿಖಿಲ್ ಎಚ್ಚರಿಸಿದ್ದಾರೆ.
ಈ ವಿಧೇಯಕದ ಮೂಲಕ ಕಾಂಗ್ರೆಸ್ ಸರ್ಕಾರವು 1975 ರ ತುರ್ತು ಪರಿಸ್ಥಿತಿಯನ್ನು ಮರುಕಳಿಸುವ ಕುತಂತ್ರ ಮಾಡುತ್ತಿದ್ದು, ಇದರ ಮೂಲಕ ಪ್ರತಿ ಪಕ್ಷಗಳು, ಮಾಧ್ಯಮದವರ ಮೇಲೆ ನಿಯಂತ್ರಣ ಮತ್ತು ಹೆದರಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ನಿಖಿಲ್ ಗಂಭೀರ ಆರೋಪ ಮಾಡಿದರು.

ಈ ವಿಧೇಯಕದ ಮೂಲಕ ಪ್ರಜಾಪ್ರಭುತ್ವದ ಮೇಲೆ ಕಾಂಗ್ರೆಸ್ ದಾಳಿ ಮಾಡುತ್ತಿದೆ. ಈ ಬಿಲ್ ನನ್ನು ಬೇರೆ ಯಾರೋ ತಯಾರಿಸಿ, ಗೃಹ ಸಚಿವರಾದ ಜಿ.ಪರಮೇಶ್ವರ್ ಅವರ ಮೂಲಕ ಜಾರಿಗೆ ತರಲು ಯತ್ನಿಸುತ್ತಿದ್ದಾರೆ. ಏನು ಗೊತ್ತಿಲ್ಲದ ಮಂತ್ರಿಗಳು ಇಷ್ಟೊಂದು ಕಟುವಾದ ವಿಧೇಯಕ ಮಂಡಿಸಲು ಸಾಧ್ಯವಿಲ್ಲ ಎಂದು ನಿಖಿಲ್ ಅವರು ಪರಮೇಶ್ವರ್ ಅವರ ಕಾಲೆಳೆದರು.
ಈ ಕಾನೂನಿನ ಮೂಲಕ ಮಾಧ್ಯಮಗಳನ್ನು, ರಾಜಕೀಯ ಪಕ್ಷದ ಕಾರ್ಯಕರ್ತರನ್ನು ಹಾಗೂ ವಿರೋಧ ಪಕ್ಷದ ಕಾರ್ಯಕರ್ತರನ್ನು ಹೆದರಿಸುವ ಕೆಲಸಕ್ಕೆ ಕೈ ಹಾಕಿದ್ದಾರೆ. ಅದು ಈ ಸರ್ಕಾರದಿಂದ ಸಾಧ್ಯವಿಲ್ಲ. ಈ ವಿಧೇಯಕದ ವಿರುದ್ಧ ಸದನದ ಒಳಗೆ ಮತ್ತು ಹೊರಗೆ ನಮ್ಮ ಪಕ್ಷ ಹೋರಾಟ ಮಾಡಲಿದೆ ಎಂದು ನಿಖಿಲ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಅಲ್ಲದೇ, ಕಾಂಗ್ರೆಸ್ ಸರ್ಕಾರ ಪತ್ರಿಕೋದ್ಯಮದ ಸ್ವಾತಂತ್ರ್ಯ ಹತ್ತಿಕ್ಕುವ ಕೆಲಸ ಮಾಡುತ್ತಿದ್ದು, ನಾವು- ನೀವು ಒಗ್ಗಟ್ಟಾಗಿ ಈ ವಿಧೇಯಕ ಜಾರಿಯಾಗದಂತೆ ಹೋರಾಟ ಮಾಡೋಣ ಎಂದು ಮಾಧ್ಯಮ ಮಿತ್ರರಿಗೆ ಹಾಗೂ ಸಾಮಾಜಿಕ ಜಾಲತಾಣಗಳ ಅಡ್ಮಿನ್ ಗಳಿಗೆ ನಿಖಿಲ್ ಕುಮಾರಸ್ವಾಮಿ ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕೋರ್ ಕಮಿಟಿ ಅಧ್ಯಕ್ಷ ಜೆ.ಕೆ. ಕೃಷ್ಣಾರೆಡ್ಡಿ, ಮಾಜಿ ವಿಧಾನ ಪರಿಷತ್ ಅಧ್ಯಕ್ಷ ತಿಪ್ಪೇಸ್ವಾಮಿ, ವಕ್ತಾರರಾದ ಗಂಗಾಧರ್ ಮೂರ್ತಿ, ಪ್ರದೀಪ್ ಕುಮಾರ್ ಜತೆಯಲ್ಲಿದ್ದರು.

