ಮತಗಳ್ಳತನ ವಿರುದ್ಧದ ಕಾಂಗ್ರೆಸ್ ಪ್ರತಿಭಟನೆ ಆ-8ಕ್ಕೆ ಮುಂದೂಡಿಕೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಹುಲ್ ಗಾಂಧಿ ನೇತೃತ್ವದಲ್ಲಿ ಆ.5ರಂದು ಮಂಗಳವಾರ ನಗರದ ಫ್ರೀಡಂ ಪಾರ್ಕ್​ನಲ್ಲಿ ನಡೆಸಲು ಉದ್ದೇಶಿಸಿದ್ದ ಮತಗಳ್ಳತನ ವಿರುದ್ಧದ ಕಾಂಗ್ರೆಸ್ ಪ್ರತಿಭಟನಾ ಸಮಾವೇಶವನ್ನು ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್​ ನಿಧನದ ಹಿನ್ನೆಲೆಯಲ್ಲಿ ಆಗಸ್ಟ್-​​ 8ಕ್ಕೆ ಮುಂದೂಡಲಾಗಿದೆ.

ಈ ಬಗ್ಗೆ ಮಾತನಾಡಿರುವ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

- Advertisement - 

ಮಾಜಿ ಸಿಎಂ ಶಿಬು ಸೊರೇನ್ ನಿಧನರಾಗಿದ್ದು ಈ ಬಗ್ಗೆ ಸಿಎಂ ಹೇಮಂತ್ ಸೊರೇನ್ ಮಾಹಿತಿ ನೀಡಿದ್ದಾರೆ. ನಮ್ಮ ಶ್ರದ್ಧಾಂಜಲಿಯನ್ನು ಶಿಬು ಸೊರೇನ್​​ಗೆ ಅರ್ಪಿಸುತ್ತೇವೆ. ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅಂತ್ಯಕ್ರಿಯೆಯಲ್ಲಿ ಭಾಗಿಯಾಗುತ್ತಿದ್ದಾರೆ. ರಾಹುಲ್ ಗಾಂಧಿ ಅವರು ಡಿ.ಕೆ.ಶಿವಕುಮಾರ್ ಜೊತೆ ಮಾತನಾಡಿದ್ದಾರೆ. ಹೀಗಾಗಿ ಪ್ರತಿಭಟನೆ ಮುಂದೂಡಿ ಆಗಸ್ಟ್ 8 ರಂದು ಮಾಡಲು ತೀರ್ಮಾನ ಮಾಡಿದ್ದೇವೆ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್ ಇದೇ ವೇಳೆ ಮಾತನಾಡಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದ ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆಯನ್ನು ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ಅವರ ನಿಧನಕ್ಕೆ ಮೂರು ದಿನಗಳ ಶೋಕಾಚರಣೆ ಹಿನ್ನೆಲೆಯಲ್ಲಿ ಆಗಸ್ಟ್ 8ಕ್ಕೆ ಮುಂದೂಡಲಾಗಿದೆ. ಶಿಬು ಸೊರೇನ್ ಬುಡಕಟ್ಟು ಸಮುದಾಯದ ಹಿರಿಯ ನಾಯಕರು. ಕಾಂಗ್ರೆಸ್ ಪಕ್ಷದ ಬಹುಕಾಲದ ಮೈತ್ರಿ ನಾಯಕರು. ಅವರಿಗೆ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯ ಎಂದು ತಿಳಿಸಿದರು.

- Advertisement - 

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರು ಶಿಬು ಸೊರೇನ್ ಅವರಿಗೆ ಗೌರವ ಸಲ್ಲಿಸಬೇಕು. ಅವರ ಅಂತ್ಯಕ್ರಿಯೆ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಆತುರದಲ್ಲಿ ಮಾಡುವುದು ಬೇಡ ಎಂಬ ಕಾರಣಕ್ಕೆ ಈ ತೀರ್ಮಾನಕ್ಕೆ ಬರಲಾಗಿದೆ. ಶೋಕಾಚರಣೆ ಆಚರಿಸುವ ದಿನ ದೇಶಕ್ಕೆ ಒಂದು ಸಂದೇಶ ನೀಡುವ ಕಾರ್ಯಕ್ರಮ ಬೇಡ ಎಂದು ನಿರ್ಧರಿಸಿದ್ದೇವೆ. ಈ ವಿಚಾರವಾಗಿ ನಮ್ಮ ನಾಯಕರ ಜೊತೆ ಚರ್ಚಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಡಿಸಿಎಂ ಅವರು ಮಾಹಿತಿ ನೀಡಿದರು.

ಪಕ್ಷದ ನಾಯಕರು, ಶಾಸಕರು, ಕಾರ್ಯಕರ್ತರಿಗೆ ಮಂಗಳವಾರದ ಕಾರ್ಯಕ್ರಮಕ್ಕೆ ಮಾಡಿಕೊಂಡಿರುವ ಸಿದ್ಧತೆ ಹಾಗೆಯೇ ಮುಂದುವರಿಸಿಕೊಂಡು ಹೋಗಬೇಕು ಎಂದು ಮನವಿ ಮಾಡುತ್ತೇನೆ. ಆ.8ರಂದು ಅದೇ ಸ್ಥಳದಲ್ಲಿ, ಅದೇ ಸಮಯಕ್ಕೆ ನಡೆಯಲಿದೆ.

ನಮ್ಮ ಕಾರ್ಯಕರ್ತರು, ಮುಖಂಡರು ಹಾಗೂ ಮತದಾರರು ಈ ಹೋರಾಟದಲ್ಲಿ ಭಾಗವಹಿಸಲು ಬಹಳ ಉತ್ಸುಕರಾಗಿದ್ದಾರೆ. ಅಂತ್ಯಕ್ರಿಯೆ ನಂತರ ಇದರ ಬಗ್ಗೆ ಚರ್ಚಿಸಿ ಮಾಹಿತಿಯನ್ನು ಅವರು ತಿಳಿಸಲಿದ್ದಾರೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

 

Share This Article
error: Content is protected !!
";