ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಅಧ್ಯಕ್ಷ ರಘುರಾಮ್ ಭಟ್ ಮತ್ತು ಇತರ ಕೆಲವು ಪದಾಧಿಕಾರಿಗಳು ಶುಕ್ರವಾರ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಆರ್‌ಸಿಬಿ, ಈವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆ ಡಿಎನ್‌ಎ ಎಂಟರ್‌ಟೈನ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ವಿರುದ್ಧ ಪೊಲೀಸರು ಗುರುವಾರ ಎಫ್‌ಐಆರ್ ದಾಖಲಿಸು ಮಾಡಿದ್ದಾರೆ.
ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ, ಡಿಎನ್‌ಎ ಎಂಟರ್‌ಟೈನ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಮತ್ತು ಕೆಎಸ್‌ಸಿಎ ಪ್ರತಿನಿಧಿಗಳ ಕಡೆಯಿಂದ ಬೇಜವಾಬ್ದಾರಿ ಮತ್ತು ಅಜಾಗರೂಕತೆ ಕಂಡುಬಂದಿದೆ ಎಂದು ಹೇಳಲಾಗಿದ್ದು, ಅವರನ್ನು ತಕ್ಷಣವೇ ಬಂಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ರಾಜ್ಯ ಡಿಜಿಪಿ ಮತ್ತು ಐಜಿಪಿಗೆ ಸೂಚನೆ ನೀಡಿದ್ದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18 ವರ್ಷಗಳ ಬಳಿಕ ಐಪಿಎಲ್ ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಐಪಿಎಲ್ ವಿಜಯೋತ್ಸವದಲ್ಲಿ ಭಾಗವಹಿಸಲು ಹೆಚ್ಚಿನ ಸಂಖ್ಯೆಯ ಜನರು ಸೇರಿದ್ದರು. ಈ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಬುಧವಾರ ಸಂಜೆ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ ಹನ್ನೊಂದು ಜನರು ಸಾವಿಗೀಡಾಗಿದ್ದಾರೆ ಮತ್ತು 56 ಜನರು ಗಾಯಗೊಂಡಿದ್ದಾರೆ.
ಈಮಧ್ಯೆ, ಆರ್‌ಸಿಬಿ ಮತ್ತು ಡಿಎನ್‌ಎ ಎಂಟರ್‌ಟೈನ್‌ಮೆಂಟ್‌ನ ನಾಲ್ವರು ಅಧಿಕಾರಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ಶುಕ್ರವಾರ ತಿಳಿಸಿವೆ.