ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಪಕ್ಷದ ನಿರುದ್ಯೋಗಿ ಕಾರ್ಯಕರ್ತರಿಗೆ ಗ್ಯಾರಂಟಿ ಅನುಷ್ಠಾನ ಸಮಿತಿ ಹೆಸರಿನಲ್ಲಿ ಕೋಟಿ ಕೋಟಿ ಅನುದಾನವನ್ನು ಕರ್ನಾಟಕ ಕಾಂಗ್ರೆಸ್ ಸರ್ಕಾರ ನೀಡುತ್ತಿದೆ ಎಂದು ಬಿಜೆಪಿ ದೂರಿದೆ.
ಕಾನೂನು ಬಾಹಿರವಾಗಿರುವ ಗ್ಯಾರಂಟಿ ಅನುಷ್ಠಾನ ಸಮಿತಿ ಹೆಸರಿನಲ್ಲಿ ಜನರ ತೆರಿಗೆ ಹಣವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.
ತನ್ನ ಪಕ್ಷದ ಕಾರ್ಯಕರ್ತರನ್ನು ಖುಷಿಪಡಿಸಲು ಸಿದ್ದರಾಮಯ್ಯ ಸರ್ಕಾರ ಜನರ ತೆರಿಗೆ ಹಣವನ್ನು ಬಳಸುತ್ತಿದೆ. ಗ್ಯಾರಂಟಿ ಜಾರಿ ಸಮಿತಿಯ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಬರೋಬ್ಬರಿ 7.65 ಕೋಟಿ ಹಣ ಮುಂಗಡವಾಗಿ ಬಿಡುಗಡೆ ಮಾಡಿ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ ಎಂದು ಬಿಜೆಪಿ ಕಿಡಿಕಾರಿದೆ.
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಹಣ ನೀಡದೆ, ಗ್ಯಾರಂಟಿ ಅನುಷ್ಠಾನ ಸಮಿತಿ ಎಂಬ ಕಾಂಗ್ರೆಸ್ಸಿನ ನಿರುದ್ಯೋಗಿ ಸಂಘಟನೆಯ ಸದಸ್ಯರಿಗೆ ಹಣ ನೀಡಿರುವುದು ಖಂಡನೀಯ. ಗ್ಯಾರಂಟಿಗಳು ಸರಿಯಾಗಿ ಅನುಷ್ಠಾನವಾಗಿಲ್ಲವೆಂದ ಮೇಲೆ, ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರಿಗೆ ಗೌರವಧನ ನೀಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಬಿಜೆಪಿ ಹರಿಹಾಯ್ದಿದೆ.