ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹೈಕಮಾಂಡ್ ಸೂಚನೆ ಮೇರೆಗೆ ಮುಖ್ಯಮಂತ್ರಿ ಹುದ್ದೆ ಚರ್ಚೆಗಳು ಹಾಗೂ ಪಕ್ಷದೊಳಗಿನ ಬಿಕ್ಕಟ್ಟು ಪರಿಹರಿಸುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶನಿವಾರ ಉಪಾಹಾರ ಕೂಟದಲ್ಲಿ ಭಾಗಿಯಾಗಿದ್ದರು.
ಸಿಎಂ ಆಹ್ವಾನ ಮೇರೆಗೆ ಡಿಸಿಎಂ ಶಿವಕುಮಾರ್ ಅವರು ಮುಖ್ಯಮಂತ್ರಿಗಳು ಏರ್ಪಡಿಸಿದ್ದ ಉಪಹಾರ ಕೂಟದಲ್ಲಿ ಪಾಲ್ಗೊಂಡಿದ್ದರು. ಪ್ರಸ್ತುತ ರಾಜಕೀಯ ಬಿಕ್ಕಟ್ಟಿನ ಕುರಿತು ಇಬ್ಬರೇ ನಾಯಕರು ಮಹತ್ವದ ಮಾತುಕತೆ ನಡೆಸುತ್ತಿದ್ದಾರೆ. ಉಪಾಹಾರ ಸಭೆಯ ನಂತರ ಶಿವಕುಮಾರ್ ಅವರು ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಹೈಕಮಾಂಡ್ ಭೇಟಿ ಮಾಡಲು ದೆಹಲಿಗೆ ಪ್ರಯಾಣಿಸಿದ್ದಾರೆ.
ತಮ್ಮ ನಿಲುವಿಗೆ ಬದ್ಧವಾದ ಸಿದ್ದರಾಮಯ್ಯ:
ಹೈಕಮಾಂಡ್ ನಮ್ಮಿಬ್ಬರನ್ನೂ ದೆಹಲಿಗೆ ಬರುವಂತೆ ಕರೆದಿದೆ. ಆದ್ದರಿಂದ ನಾನು ಡಿ ಕೆ ಶಿವಕುಮಾರ್ ಅವರನ್ನು ಉಪಾಹಾರಕ್ಕೆ ಆಹ್ವಾನಿಸಿದ್ದೇನೆ. ಈ ವೇಳೆ ಮಾತನಾಡುತ್ತೇವೆ. ನಾನು ಮೊದಲೇ ಹೇಳಿದಂತೆ ಹೈಕಮಾಂಡ್ ಏನು ಹೇಳುತ್ತದೋ ಅದನ್ನು ನಾನು ಸ್ವೀಕರಿಸುತ್ತೇನೆ. ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಅವರು ಕೂಡ ಹೈಕಮಾಂಡ್ ಏನು ಹೇಳುತ್ತದೋ ಅದನ್ನು ನಾವು ಅನುಸರಿಸುತ್ತೇವೆ ಎಂದು ಹೇಳಿದ್ದಾರೆ ಎಂದು ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದರು.
ಶಿವಕುಮಾರ್ ಅವರು ಕಾಂಗ್ರೆಸ್‌ಗೆ ತಮ್ಮ ನಿಷ್ಠೆಯನ್ನು ಪುನರುಚ್ಚರಿಸಿದ್ದಾರೆ ಮತ್ತು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದಲ್ಲಿ ನಾಯಕತ್ವದ ಕುರಿತು ಪಕ್ಷದ ಹೈಕಮಾಂಡ್ ಯಾವುದೇ ನಿರ್ಧಾರವನ್ನು ತೆಗೆದುಕೊಂಡರು ನಾವು ಅದಕ್ಕೆ ಬದ್ಧ ಎಂದು ಅವರು ಹೇಳಿದ್ದಾರೆ.
ನವೆಂಬರ್ 30 ರಂದು ನಡೆಯಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮುನ್ನ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯ ನಂತರ, ಕರ್ನಾಟಕ ಕಾಂಗ್ರೆಸ್ ನಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಬಗ್ಗೆ ಕೇಂದ್ರ ನಾಯಕರು ಚರ್ಚಿಸುವ ಸಾಧ್ಯತೆಯಿದೆ.
ಆತುರದಲ್ಲಿಲ್ಲ ಎಂದ ಡಿ ಕೆಶಿ:
ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಸುದ್ದಿಗಾರರೊಂದಿಗೆ ಮಾತನಾಡಿ, ತಮ್ಮ ಬೆಂಬಲಿಗರು ತಮ್ಮನ್ನು ಮುಂದಿನ ಸಿಎಂ ಆಗಿ ನೋಡಲು ಬಯಸುತ್ತಿದ್ದಾರಾ ಎಂಬ ಪ್ರಶ್ನೆಗಳಿಗೆ ಅವರು ಉತ್ತರಿಸಿ, ಪಕ್ಷದ ಕಾರ್ಯಕರ್ತರು ಉತ್ಸುಕರಾಗಿರಬಹುದು. ಆದರೆ ನಾನು ಯಾವುದೇ ಆತುರದಲ್ಲಿಲ್ಲ. ಪಕ್ಷವು ಎಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ ಎಂದು ಡಿಸಿಎಂ ಸ್ಪಷ್ಟಪಡಿಸಿದರು.
ರಾಷ್ಟ್ರ ರಾಜಧಾನಿಗೆ ಭೇಟಿ ನೀಡುವ ಸಾಧ್ಯತೆಯನ್ನು ಅವರು ತಳ್ಳಿಹಾಕಲಿಲ್ಲ, ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮುನ್ನ ಕಾಂಗ್ರೆಸ್ ನಾಯಕತ್ವದೊಂದಿಗೆ ಹಲವಾರು ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು ದೆಹಲಿಗೆ ಹೋಗುತ್ತಿರುವುದಾಗಿ ಅವರು ಸ್ಪಷ್ಟಪಡಿಸಿದರು.

