ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ದಿಢೀರ್ ಭೇಟಿ ನೀಡಿದ್ದು ಸೋಮವಾರ ಕಾಂಗ್ರೆಸ್ ವರಿಷ್ಠರನ್ನು ಭೇಟಿ ಮಾಡುವ ಸಾಧ್ಯತೆಯಿದ್ದು ರಾಜಕೀಯ ವಲಯದಲ್ಲಿ ಊಹಾಪೋಹಗಳು ಶುರುವಾಗಿವೆ.
ಡಿಕೆ.ಶಿವಕುಮಾರ್ ಅವರ ಭಾನುವಾರವೇ ದೆಹಲಿಗೆ ತೆರಳಿದ್ದಾರೆ. ಡಿಸಿಎಂ ಭೇಟಿ ಬೆನ್ನಲ್ಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಜೂ.13ರಂದು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.
ರಾಜ್ಯದ ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ಇಬ್ಬರೂ ನಾಯಕರ ವರಿಷ್ಠರ ಭೇಟಿ ಮಾಡುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳೊದಿಗೆ ದೆಹಲಿ ಮಹಾನಗರ ಪಾಲಿಕೆ ಅಧಿಕಾರಿಗಳ ಜತೆ ಆಡಳಿತ ಹಾಗೂ ಘನ ತ್ಯಾಜ್ಯ ನಿರ್ವಹಣೆ ಕುರಿತು ಡಿ.ಕೆ.ಶಿವಕುಮಾರ್ ಸಭೆ ನಡೆಸಲಿದ್ದಾರೆ. ಬಳಿಕ ಜಲಶಕ್ತಿ ಸಚಿವರು, ಇಂಧನ ಸಚಿವರನ್ನು ಭೇಟಿ ಮಾಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಇದರ ನಡುವೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಸೇರಿ ಇತ್ತೀಚಿನ ರಾಜ್ಯದ ಬೆಳವಣಿಗೆಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ. ಇದರ ಬೆನ್ನಲ್ಲೇ ಜೂ.12ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಜೂ.13 ರಂದು ಹಣಕಾಸು ಆಯೋಗದ ಸಭೆಯಲ್ಲಿ ಭಾಗವಹಿಸಲಿದ್ದು, ಬಳಿಕ ಎಐಸಿಸಿ ವರಿಷ್ಠರನ್ನು ಭೇಟಿ ಮಾಡಲಿದ್ದಾರೆ. ಈ ವೇಳೆ ರಾಜ್ಯದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಚರ್ಚಿಸ ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದೆಹಲಿ ಭೇಟಿ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ.ಶಿವಕುಮಾರ್ ಅವರು, ದೆಹಲಿ ಭೇಟಿ ಸಂಪೂರ್ಣವಾಗಿ ತಾಂತ್ರಿಕವಾಗಿದೆ ಎಂದು ಹೇಳಿದರು. ಹೈದರಾಬಾದ್, ಚೆನ್ನೈ ಮತ್ತು ಈಗ ದೆಹಲಿಯಲ್ಲಿ ಈಗಾಗಲೇ ಜಾರಿಯಲ್ಲಿರುವ ಘನತ್ಯಾಜ್ಯ ನಿರ್ವಹಣಾ ತಂತ್ರಜ್ಞಾನಗಳನ್ನು ಪರಿಶೀಲಿಸಲು ನಿರ್ಧರಿಸಿದ್ದೆ. ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ಬಳಸಲಾಗುತ್ತಿರುವ ತಂತ್ರಜ್ಞಾನವನ್ನು ವೀಕ್ಷಿಸಲು ನಾನು ಹಾಗೂ ಬೆಂಗಳೂರು ಪಾಲಿಕೆಯಿಂದ ಸುಮಾರು 15 ಸದಸ್ಯರ ತಂಡ ದೆಹಲಿಗೆ ಆಗಮಿಸಿದ್ದೇವೆ. ಇಲ್ಲಿ ನಗರದ ಹೊರಭಾಗದಲ್ಲಿ ವಾಸನೆ ರಹಿತವಾಗಿ ತ್ಯಾಜ್ಯ ವಿಲೇವಾರಿ ಕೇಂದ್ರ ಮಾಡಿದ್ದಾರೆ ಎಂದು ಕೇಳಿದ್ದೇನೆ.
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಂಬಂಧ ಟೆಂಡರ್ ಕರೆಯಲಾಗಿದ್ದು, ಕಸದಿಂದ ಇಂಧನ, ಅನಿಲ ಉತ್ಪಾದನೆ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ಈಗಾಗಲೇ ಹೈದರಾಬಾದ್ ಹಾಗೂ ಚೆನ್ನೈಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದ್ದೇನೆ. ದೆಹಲಿಯಲ್ಲಿನ ತಂತ್ರಜ್ಞಾನ ಅಳವಡಿಕೆ ಬಗ್ಗೆ ನಮಗೆ ಪ್ರಸ್ತಾವನೆ ಬಂದಿದ್ದು, ಹೀಗಾಗಿ ಅದನ್ನು ವೀಕ್ಷಣೆ ಮಾಡುತ್ತೇವೆ. ದೆಹಲಿಯಲ್ಲಿ ನಗರ ಯೋಜನಾ ಪ್ರಾಧಿಕಾರದಲ್ಲಿ ರಸ್ತೆ ವಿಚಾರವಾಗಿ ಪ್ರತ್ಯೇಕ ನೀತಿ ಹೊಂದಿದ್ದು, ಇದನ್ನು ಪರಿಶೀಲನೆ ಮಾಡಲಾಗುವುದು ಎಂದು ತಿಳಿಸಿದರು.
ಹೈಕಮಾಂಡ್ ನಾಯಕರ ಭೇಟಿ ಸಧ್ಯಕ್ಕೆ ಇಲ್ಲ. ಸಮಯ ಸಿಕ್ಕರೆ ಭೇಟಿ ಮಾಡುತ್ತೇನೆ. ಜೂನ್.10 ರಂದು ಎತ್ತಿನಹೊಳೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ಕರೆದಿದ್ದಾರೆ. ಹೀಗಾಗಿ ನಾಳೆ ಸಂಜೆ ಬೆಂಗಳೂರಿಗೆ ವಾಪಸ್ಸಾಗುತ್ತೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.