ಇಬ್ಬಗೆಯ ನೀತಿ ದೇವೇಗೌಡರಿಗೆ ಇದೆ, ನಮಗಲ್ಲ- ಸಿದ್ದರಾಮಯ್ಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಹಾಗೂ ಪತ್ತೆ ಹಚ್ಚಲು ಒಂದು ವಿಶೇಷ ಪಡೆಯ ಅಗತ್ಯವಿದೆ. ಕರಾವಳಿಯಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚಿಸುವ ಸಂಬಂಧ ಗೃಹ ಸಚಿವರೊಂದಿಗೆ ಮಾತನಾಡಿ ಕ್ರಮ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಹಾವೇರಿ ಜಿಲ್ಲೆಯ ಅಕ್ಕಿಆಲೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಅವರ ಪ್ರತಿಕ್ರಿಯೆ ನೀಡಿ ಮಾತನಾಡಿದರು.

ಸುಹಾಸ್ ಶೆಟ್ಟಿ ಹತ್ಯೆಗೆ ಸುಪಾರಿ ನೀಡಿದ್ದು ಯಾವ ಹಣದಲ್ಲಿ ಎನ್ನುವ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ತಿಳಿದಿಲ್ಲ. ನಿನ್ನೆ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ಇಬ್ಬರೂ ಮಂಗಳೂರಿಗೆ ಭೇಟಿ ನೀಡಿದ್ದಾರೆ. ಅವರೊಂದಿಗೆ ಮಾತನಾಡಿದ ನಂತರ ಪ್ರತಿಕ್ರಿಯಿಸುತ್ತೇನೆ ಎಂದು ಸಿಎಂ ತಿಳಿಸಿದರು.

ಸರ್ಕಾರಕ್ಕೆ ಎರಡು ವರ್ಷಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಎರಡು ವರ್ಷಗಳ ಸಾಧನೆಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಾತಿಗಣತಿಯನ್ನು ಮಾಡಿಸುವ ಮೂಲಕ ಸಿದ್ದರಾಮಯ್ಯ ಜಾತಿ ಜಾತಿಗಳ ನಡುವೆ ಸಂಘರ್ಷಕ್ಕೆ ಎಡೆಮಾಡಿಕೊಡುತ್ತಿದ್ದಾರೆ ಎಂದು ಟೀಕೆ ಮಾಡುತ್ತಿದ್ದವರು ಕೇಂದ್ರ ಸರ್ಕಾರ ಜಾತಿಗಣತಿ ಮಾಡಿಸುವುದನ್ನು ಮುಕ್ತ ಮನಸ್ಸಿನಿಂದ ಸ್ವಾಗತ ಮಾಡುತ್ತಿದ್ದಾರೆ.

ಶಂಖದಿಂದ ಬಂದರೆ ಮಾತ್ರ ತೀರ್ಥ ಎಂಬಂತಾಗಿದೆ. ಮೊದಲು ರಾಜಕೀಯವಾಗಿ ಹೇಳುತ್ತಿದ್ದರು. ವಾಸ್ತವಿಕತೆಯ ಆಧಾರದ ಮೇಲೆ ಮಾತನಾಡುತ್ತಿರಲಿಲ್ಲ ಎಂದು ಅರ್ಥವಾಗುತ್ತದೆ ಅಲ್ಲವೇ? ಎಂದು ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು.

ಪಾಕಿಸ್ತಾನದ ವಿಚಾರದಲ್ಲಿ ಕಾಂಗ್ರೆಸ್ ಬಗ್ಗೆ ಟೀಕಿಸಿರುವ ದೇವೇಗೌಡರು ಬಿಜೆಪಿ ಸೇರುವ ಮುನ್ನ ನರೇಂದ್ರ ಮೋದಿಯವರ ಬಗ್ಗೆ ಏನು ಮಾತನಾಡುತ್ತಿದ್ದರು? ಈಗ ಏನು ಮಾತನಾಡುತ್ತಿದ್ದಾರೆ? ಇಬ್ಬಗೆಯ ನೀತಿ ದೇವೇಗೌಡರಿಗೆ ಇದೆ, ನಮಗಲ್ಲ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದರು.

 

Share This Article
error: Content is protected !!
";