ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ರಾಜ್ಯ ಬಜೆಟ್ ಅತ್ಯಂತ ನಿರಾಶಾದಾಯಕ, ಅಭಿವೃದ್ಧಿ ಶೂನ್ಯ, ದೂರದೃಷ್ಟಿ ರಹಿತ ಅಡ್ಡಕಸುಬಿ ಬಜೆಟ್ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹರಿಹಾಯ್ದಿದ್ದಾರೆ.
ಸಿದ್ದರಾಮಯ್ಯನವರು ಹೊರ ಹೋಗುತ್ತಿರುವ ಸಿಎಂ(Outgoing CM) ಎಂದು ಜನಸಾಮಾನ್ಯರ ಮನಸ್ಸಿನಲ್ಲಿ ಗಟ್ಟಿಯಾದ ಅಭಿಪ್ರಾಯ ಮೂಡಿರುವುದರಿಂದ, ಈ ಬಜೆಟ್ ನಿಂದ ಕನ್ನಡಿಗರಿಗೆ ಹೆಚ್ಚಿನ ನಿರೀಕ್ಷೆಗಳೇನೂ ಇರಲಿಲ್ಲ. ಆದರೂ ತಮ್ಮ ಕಡೆಯ ಬಜೆಟ್ ನಲ್ಲಿ ಒಂದಿಷ್ಟಾದರೂ ಜನಪರ ಯೋಜನೆಗಳನ್ನ ಘೋಷಿಸುತ್ತಾರೆ ಎಂದು ಎದುರು ನೋಡುತ್ತಿದ್ದ ಜನರಿಗೆ ಈ ಬಜೆಟ್ ಸಂಪೂರ್ಣ ನಿರಾಸೆ ಮೂಡಿಸಿದೆ. ಇದುಕೇವಲ ‘ಬೊಗಳೆರಾಮಯ್ಯ ಬಜೆಟ್‘ಎಂದು ಅಶೋಕ್ ಅವರು ತೀಕ್ಷ್ಣವಾಗಿ ಟೀಕಿಸಿದ್ದಾರೆ.
ಸಾಧನೆಯ ಬಲದಿಂದಾಗಲಿ, ದಿಟ್ಟ ನಾಯಕತ್ವದಿಂದಾಗಲಿ, ಅಹಿಂದ ನಾಮ ಜಪದಿಂದಾಗಲಿ ಚುನಾವಣೆಯನ್ನು ಎದುರಿಸಲು ಅಸಾಧ್ಯವೆಂದು ಗೊತ್ತಾದಾಗ ಅವಸರದಲ್ಲಿ ಐದು ಗ್ಯಾರೆಂಟಿ ಯೋಜನೆಗಳನ್ನು ಘೋಷಣೆ ಮಾಡಿ ಕರ್ನಾಟಕ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂತು.
ಈ ಗ್ಯಾರೆಂಟಿಗಳು ಬಡವರ ಮೇಲಿನ ಪ್ರೀತಿ ಇಲ್ಲವೇ ಕಾಳಜಿಯಿಂದ ಘೋಷಿಸಿದ್ದಲ್ಲ, ಇದರ ಹಿಂದಿನ ದುರುದ್ದೇಶ ಜನರನ್ನ ದಿಕ್ಕು ತಪ್ಪಿಸಿ, ಮತಗಳಿಸಿ ಅಧಿಕಾರಕ್ಕೆ ಏರುವುದು ಮಾತ್ರ ಆಗಿತ್ತು ಎಂದು ಅವರು ಆರೋಪಿಸಿದ್ದಾರೆ.
ಆದರೆ ಅಧಿಕಾರಕ್ಕೆ ಬಂದ ಮೇಲೆ ಬಿಸಿ ತುಪ್ಪದಂತಾಗಿರುವ ಗ್ಯಾರೆಂಟಿಗಳನ್ನು ಮುಂದುವರೆಸಲು ಆಗದೆ ನಿಲ್ಲಿಸಲೂ ಆಗದೆ ಕಾಂಗ್ರೆಸ್ ಸರ್ಕಾರ ಅಡಕತ್ತರಿಯಲ್ಲಿ ಸಿಕ್ಕಿಹಾಕಿಕೊಂಡಿದೆ.
ಕೆಡಿಪಿ ಅಂಕಿ-ಅಂಶದ ಪ್ರಕಾರ, ಕಳೆದ ವರ್ಷದ ಅಂದರೆ 2024-25 ನೇ ಬಜೆಟ್ ವರ್ಷದ 10 ತಿಂಗಳಲ್ಲಿ ಶೇ.62% ರಷ್ಟು ಮಾತ್ರ ಪ್ರಗತಿ ಸಾಧಿಸಲಾಗಿದೆ. ಕಳೆದ ವರ್ಷದ ಅನುದಾನವೇ ಖರ್ಚು ಆಗದೆ ಇರುವಾಗ ಈಗ ಇನ್ನೊಂದು ಬಜೆಟ್ ಮಂಡಿಸಿದರೆ ಪ್ರಯೋಜನವೇನು? ಐದನೇ ಕ್ಲಾಸು ಪಾಸಾಗದ ವಿದ್ಯಾರ್ಥಿ ಆರನೇ ಕ್ಲಾಸಿನ ಪರೀಕ್ಷೆಗೆ ಕಟ್ಟಿದರೆ ಏನು ಪ್ರಯೋಜನ? ಹಾಗಾಗಿದೆ ಸಿದ್ದರಾಮಯ್ಯ ನವರ ಬಜೆಟ್ ನ ಕಥೆ-ವ್ಯಥೆ ಎಂದು ಅವರು ದೂರಿದ್ದಾರೆ.
ಇದು ಕೇವಲ ನಾಮಕಾವಸ್ತೆ ಬಜೆಟ್. ಪಾಪರ್ ಸರ್ಕಾರದ ಪಾಪರ್ ಬಜೆಟ್. ನಿವೃತ್ತಿ ಆಗುತ್ತಿರುವ ಮುಖ್ಯಮಂತ್ರಿಗಳ ನಿರ್ಗಮನದ ಬಜೆಟ್. ಇದರಿಂದ ಕರ್ನಾಟಕಕ್ಕೆ, ಕನ್ನಡಿಗರಿಗೆ ನಯಾಪೈಸೆ ಉಪಯೋಗವಿಲ್ಲ ಇದು ಬೊಗಳೆರಾಮಯ್ಯ ಬಜೆಟ್ ಎಂದು ಆರೋಪಿಸಿದ್ದಾರೆ.
ಬಜೆಟ್ ಬ್ರೀಫ್ ಕೇಸ್ ಸಚಿವ ಜಮೀರ್ ಅಹಮದ್ ಅವರ ಕೈಯಲ್ಲಿ ಇದ್ದಾಗಲೇ ಅಂದುಕೊಂಡೆ ಇದು ಓಲೈಕೆ ಬಜೆಟ್ ಅಂತ. ಮಾನ್ಯ ಸಿದ್ದರಾಮಯ್ಯನವರೇ, ಈ ಬಜೆಟ್ ತಾವು ಸಿದ್ಧಪಡಿಸಿದ್ದೋ ಅಥವಾ ಜಮೀರ್ ಅವರು ಸಿದ್ಧಪಡಿಸಿದ್ದೋ? ಒಮ್ಮೆ ಸ್ಪಷ್ಟನೆ ಕೊಟ್ಟುಬಿಡಿ ಎಂದು ಅಶೋಕ್ ಆಗ್ರಹ ಮಾಡಿದ್ದಾರೆ.