ವಿರೋಧ ಪಕ್ಷದ ನಾಯಕರನ್ನು ವಿಶ್ವಾಸಕ್ಕೆ ಪಡೆದ ನಂತರ ಗ್ರೇಟರ್ ವರದಿ ಕುರಿತು ಸಂಪುಟದಲ್ಲಿ ಚರ್ಚೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗ್ರೇಟರ್ ಬೆಂಗಳೂರು ಪ್ರಾಧಿಕಾರ ವರದಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡುವ ಮುನ್ನ ವಿರೋಧ ಪಕ್ಷದ ನಾಯಕರನ್ನು ವಿಶ್ವಾಸಕ್ಕೆ ಪಡೆದ ನಂತರ ಸಂಪುಟದಲ್ಲಿ ಪ್ರಸ್ತಾಪಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

- Advertisement - 

ವಿಧಾನಸೌಧದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿದರು.

- Advertisement - 

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಪಾಲಿಕೆಗಳನ್ನು ಹೇಗೆ ವಿಂಗಡಿಸಬೇಕು ಎಂಬುದರ ಬಗ್ಗೆ ಸಮಿತಿಯವರು ಅಂತಿಮ ವರದಿ ಸಲ್ಲಿಸಿದ್ದಾರೆ. ಈ ವಿಚಾರವಾಗಿ ವಿರೋಧ ಪಕ್ಷದ ನಾಯಕರ ಜೊತೆ ಚರ್ಚೆ ಮಾಡಿ ಅವರನ್ನು ವಿಶ್ವಾಸಕ್ಕೆ ಪಡೆಯಬೇಕು ಎಂದು ಸಮಿತಿ ಅಧ್ಯಕ್ಷರಿಗೆ ಸೂಚಿಸಿದ್ದೇನೆ. ಇದಾದ ಬಳಿಕ ಸಚಿವ ಸಂಪುಟ ಸಭೆಯ ಮುಂದೆ ವರದಿ ಬಗ್ಗೆ ಪ್ರಸ್ತಾಪ ಮಾಡುತ್ತೇನೆ. ಈಗ ಹಾಲಿ ಇರುವ ಪಾಲಿಕೆ ವ್ಯಾಪ್ತಿಯಲ್ಲೇ ಇದನ್ನು ಜಾರಿಗೊಳಿಸುತ್ತೇವೆ. ಮುಂದಿನ ದಿನಗಳಲ್ಲಿ ವಿಸ್ತರಣೆ ಮಾಡಲಾಗುವುದು. ಸಚಿವ ಸಂಪುಟ ಸಭೆಯಲ್ಲಿ ಇದನ್ನು ಪ್ರಸ್ತಾಪಿಸಿ, ಆದಷ್ಟು ಬೇಗ ಚುನಾವಣೆ ನಡೆಸಬೇಕಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

ಎತ್ತಿನಹೊಳೆ ಯೋಜನೆ ಸಂಬಂಧ ಸಚಿವ ಡಾ.ಜಿ.ಪರಮೇಶ್ವರ್ ಅವರ ಭೇಟಿ ಮಾಡಿದ್ದರು. ಎತ್ತಿನಹೊಳೆ ವಿಚಾರವಾಗಿ ಕೆಲವು ಸಮಸ್ಯೆ ಇತ್ತು. ಅವರ ತಾಲೂಕನ್ನು ಕೈಬಿಡಬೇಕು ಎಂಬ ಪ್ರಸ್ತಾವನೆ ಇತ್ತು. ಈ ಭಾಗದಲ್ಲಿ ನೀರು ನಿಲ್ಲಿಸಬೇಕಾಗಿದ್ದು, ಯಾವುದೇ ಹಳ್ಳಿ ಮುಳುಗಡೆಯಾಗದಂತೆ ಈ ಯೋಜನೆ ಜಾರಿಗೆ ಮುಂದಾಗಿದ್ದೇವೆ. ಸ್ಥಳೀಯರೇ ಒಂದೆರಡು ಕೆರೆಗಳ ಬಗ್ಗೆ ಸಲಹೆ ನೀಡಿದ್ದು, ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪ ಮಾಡಿ ಅಂತಿಮ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಶಿವಕುಮಾರ್ ತಿಳಿಸಿದರು.

- Advertisement - 

ದೆಹಲಿ ಪ್ರವಾಸ ಹೋಗುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ, ತುಮಕೂರು ಹಾಗೂ ಹಾಸನ ಭಾಗದಲ್ಲಿ ಎತ್ತಿನಹೊಳೆ ಯೋಜನೆಯ ಅರಣ್ಯ ಭೂಮಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವರ ಅನುಮತಿ ಬಗ್ಗೆ ಚರ್ಚಿಸಲು ಸಮಯಾವಕಾಶ ನಿಗದಿಯಾಗಿದೆ. ಕೇಂದ್ರ ಜಲಶಕ್ತಿ ಸಚಿವರನ್ನೂ ಭೇಟಿ ಮಾಡಿ ಚರ್ಚಿಸಲಾಗುವುದು ಎಂದು ಅವರು ತಿಳಿಸಿದರು. 

ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತೀರಾ? ಎಂದು ಕೇಳಿದಾಗ, ಪಕ್ಷದ ಕಚೇರಿ ನಮಗೆ ದೇವಾಲಯವಿದ್ದಂತೆ. ದೆಹಲಿಗೆ ಭೇಟಿ ನೀಡಿದಾಗ ಅಲ್ಲಿಗೆ ಹೋಗಿ ಕೈಮುಗಿದು ಬರುತ್ತೇವೆ ಎಂದು ತೀಕ್ಷ್ಣವಾಗಿ ಡಿಕೆ ಶಿವಕುಮಾರ್ ಹೇಳಿದರು.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಭೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಸಮಿತಿ ಅಧ್ಯಕ್ಷ ರಿಜ್ವಾನ್ ಹರ್ಷದ್, ಬ್ರಾಂಡ್ ಬೆಂಗಳೂರು ಸಮಿತಿ ಅಧ್ಯಕ್ಷ ಬಿ.ಎಸ್.ಪಾಟೀಲ್, ಸದಸ್ಯ ರವಿಚಂದರ್, ಜಿಬಿಎ ಆಡಳಿತಾಧಿಕಾರಿ ತುಷಾರ್ ಗಿರಿನಾಥ್, ಮುಖ್ಯ ಆಯುಕ್ತ ಮಹೇಶ್ವರ ರಾವ್, ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿತರರು ಭಾಗವಹಿಸಿದ್ದರು.

 

 

Share This Article
error: Content is protected !!
";