ಚಂದ್ರವಳ್ಳಿ ನ್ಯೂಸ್, ತುಮಕೂರು:
ಜನ ಸ್ಪಂದನ, ಕುಂದು-ಕೊರತೆ ಸಭೆಗಳಲ್ಲಿ ಸಾರ್ವಜನಿಕರು ಸಲ್ಲಿಸುವ ಅರ್ಜಿಗಳನ್ನು ತಡ ಮಾಡದೆ ಶೀಘ್ರವಾಗಿ ವಿಲೇವಾರಿ ಮಾಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶಿರಾ ತಾಲ್ಲೂಕು ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿಂದು ನಡೆದ ಕುಂದು-ಕೊರತೆ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ಅವರು, ಅಧಿಕಾರಿಗಳು ಸರ್ಕಾರಿ ಕೆಲಸಗಳನ್ನು ತಮ್ಮ ಮನೆಯ ಕೆಲಸಗಳಂತೆ ಜವಾಬ್ದಾರಿಯಿಂದ ನಿರ್ವಹಿಸಬೇಕು. ಸಾರ್ವಜನಿಕರೊಂದಿಗೆ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಿದಾಗ ಮಾತ್ರ ಸರ್ಕಾರಿ ಕಾರ್ಯಕ್ರಮಗಳು ಯಶಸ್ವಿಯಾಗಿ ಅನುಷ್ಠಾನಗೊಳ್ಳಲು ಸಾಧ್ಯ ಎಂದರು.
ಉದ್ದರಾಮನಹಳ್ಳಿಯ ಮಂಜುನಾಥ್ ಅವರು ರಸ್ತೆ ಒತ್ತುವರಿ ತೆರವುಗೊಳಿಸುವಂತೆ, ಬುಕ್ಕಾಪಟ್ಟಣ ಗ್ರಾಮದ ನಾಗರಾಜು ಅವರು ಪಹಣಿ ಪತ್ರ ನೀಡುವಂತೆ ಹಾಗೂ ದೊಡ್ಡ ಅಗ್ರಹಾರದ ಕೆಂಚಣ್ಣ ಪಡಿತರ ಧಾನ್ಯಗಳನ್ನು ಸರಿಯಾದ ರೀತಿಯಲ್ಲಿ ವಿತರಿಸಲು ಕೋರಿ ಅರ್ಜಿ ಸಲ್ಲಿಸಿದರು. ಸಭೆಯಲ್ಲಿ ಪವತಿ ಖಾತೆ, ರಾಜ ಕಾಲುವೆ ತೆರವು, ಸಾಗುವಳಿ ಚೀಟಿ ಸೇರಿದಂತೆ ಸುಮಾರು ೬೯ ಅರ್ಜಿಗಳನ್ನು ಸ್ವೀಕರಿಸಲಾಯಿತು.
ಗಿರಿನಾಥನಹಳ್ಳಿಯ ನಾಗರಾಜು ಎಂಬುವವರು ಗ್ರಾಮನಕ್ಷೆ ಕೋರಿ ಸಲ್ಲಿಸಿದ ಅರ್ಜಿಗೆ ಕೂಡಲೇ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ಗ್ರಾಮ ನಕ್ಷೆಯನ್ನು ಸ್ಥಳದಲ್ಲಿಯೇ ನೀಡಿದರು.
ಇದಕ್ಕೂ ಮುನ್ನ ತಹಶೀಲ್ದಾರ್ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಸೆಪ್ಟೆಂಬರ್ ೧೫ರಂದು ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ನಿರ್ಮಿಸಲಿರುವ ಮಾನವ ಸರಪಳಿ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಸಮಯಕ್ಕೆ ಸರಿಯಾಗಿ ಎಲ್ಲಾ ಅಧಿಕಾರಿಗಳು ತಮಗೆ ನಿಯೋಜಿಸಿರುವ ಸ್ಥಳಗಳಲ್ಲಿ ಹಾಜರಿರಬೇಕು ಎಂದು ಸೂಚನೆ ನೀಡಿದರು.
ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಿಸುತ್ತಿರುವುದರಿಂದ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ವಿಶ್ವದಲ್ಲಿಯೇ ಮೊದಲ ಬಾರಿಗೆ ಬಹುದೊಡ್ಡ ಮಾನವ ಸರಪಳಿಯನ್ನು ನಿರ್ಮಿಸಲಾಗುತ್ತಿದ್ದು, ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಲೋಪ ದೋ? ಉಂಟಾಗದಂತೆ ಕ್ರಮ ಕೈಗೊಳ್ಳಬೇಕು. ಎಲ್ಲಾ ಗ್ರಾಮ ಪಂಚಾಯಿತಿ ಮತ್ತು ಇಲಾಖೆಗಳಿಗೆ ಮಾನವ ಸರಪಳಿಯಲ್ಲಿ ಭಾಗವಹಿಸುವ ಸ್ಥಳವನ್ನು ಗುರುತಿಸಲಾಗಿದ್ದು, ಸಂಬಂಧಪಟ್ಟ ನೋಡಲ್ ಅಧಿಕಾರಿಗಳು ತಮಗೆ ನಿಯೋಜಿಸಿರುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದರು.
ಕಾರ್ಯಕ್ರಮದಲ್ಲಿ ಉಪ ವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ತಹಶೀಲ್ದಾರ್ ಸಚ್ಚಿದಾನಂದ ಕುಚನೂರ, ತಾಲ್ಲೂಕ್ ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.