ಆಹಾರ ಸುರಕ್ಷತಾ ಕ್ರಮ ಪಾಲಿಸದ ಹಾಸ್ಟೆಲ್ ವಾರ್ಡನ್ ಗಳ ಶಿಸ್ತು ಕ್ರಮ- ಜಿಲ್ಲಾಧಿಕಾರಿ ವೆಂಕಟೇಶ್

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಆಹಾರ ಸುರಕ್ಷತಾ ಕ್ರಮ ಹಾಗೂ ಗುಣಮಟ್ಟ, ಸ್ವಚ್ಛತೆ ಕಾಪಾಡದ ವಸತಿ ನಿಲಯಗಳ ನಿಲಯಪಾಲಕರಿಗೆ ನೋಟಿಸ್ ನೀಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಜಿಲ್ಲಾಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ವಸತಿ ನಿಲಯಗಳಲ್ಲಿ ಆಹಾರ ಸುರಕ್ಷತೆ, ಗುಣಮಟ್ಟಕ್ಕೆ ಸಂಬಂಧಿಸಿದಂತೆ ಸಾಕಷ್ಟು ದೂರುಗಳು ಬರುತ್ತಿದ್ದು, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುವ ವಸತಿ ನಿಲಯಗಳು ಹಾಗೂ ಅಂಗನವಾಡಿ ಕೇಂದ್ರಗಳು ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಕಾಪಾಡಿಕೊಳ್ಳುವ ಜತೆಗೆ ವಸತಿ ನಿಲಯಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ನಿಲಯಪಾಲಕರು ಕ್ರಮವಹಿಸಬೇಕು ಎಂದು ಹೇಳಿದರು.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಂಕಿತಾಧಿಕಾರಿ ಡಾ.ರಾಜಶೇಖರ್ ಪಾಳೇದವರ ಮಾತನಾಡಿ, ಆಹಾರ ಸುರಕ್ಷತೆ ಹಾಗೂ ಗುಣಮಟ್ಟಕ್ಕೆ ಸಂಬಂಧಿಸಿದಂತೆ ಹೆಚ್ಚಿನದಾಗಿ ವಸತಿನಿಲಯಗಳಿಗೆ ಒತ್ತು ನೀಡಲಾಗುತ್ತಿದೆ. ಆಹಾರ ಸುರಕ್ಷತಾ ಅಧಿಕಾರಿಗಳು ಕಳೆದ ಎರಡು ತಿಂಗಳಿಂದಲೂ ವಿವಿಧ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ನಿಲಯಗಳಿಗೆ ಭೇಟಿ ನೀಡಿ, ಆಹಾರ ಪೂರೈಕೆಗೆ ಸಂಬಂಧಪಟ್ಟಂತೆ ತಪಾಸಣೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಪಾಡುವ ಕುರಿತು ಹಾಗೂ ವೈಯಕ್ತಿಕ ಸ್ವಚ್ಛತೆ ಕುರಿತು ಆರೋಗ್ಯ ಶಿಕ್ಷಣ ನೀಡಿ ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.

ಸಭೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಂಕಿತಾಧಿಕಾರಿ ಡಾ.ರಾಜಶೇಖರ್ ಪಾಳೇದವರ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಆಹಾರ ಇಲಾಖೆ ಜಂಟಿ ನಿರ್ದೇಶಕ ಮಧುಸೂದನ್, ಚಿತ್ರದುರ್ಗ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪಿ.ಕೆ.ದಿನಕರ್,  ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಆಹಾರ ಸುರಕ್ಷತಾಧಿಕಾರಿಗಳು ಇದ್ದರು.

- Advertisement -  - Advertisement - 
Share This Article
error: Content is protected !!
";