ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳಲ್ಲಿ 2000 ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ: ಎಂ.ಸಿ.ಸುಧಾಕರ್ ವಿಧಾನಸಭೆಯಲ್ಲಿ ತಿಳಿಸಿದರು.
ಇಂದು ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರದ ರಾಘವೇಂದ್ರ ಬಸವರಾಜ್ ಹಿಟ್ನಾಳ್ ಕೆ ಅವರ ಪ್ರಶ್ನೆಗೆ ಉತ್ತರಿಸಿದ ಅವರು ರಾಜ್ಯದ ಹಲವು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಹುದ್ದೆಗಳ ಕೊರತೆ ಇದೆ. ಕಾಲಾಜು ಶಿಕ್ಷಣ ಇಲಾಖೆ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಒಟ್ಟು 2000 ಹುದ್ದೆಗಳ ಭರ್ತಿಗೆ ಆಯವ್ಯಯದಲ್ಲಿ ಅವಕಾಶ ಕಲ್ಪಿಸಲಾಗಿದೆ.
ರಾಜ್ಯದಲ್ಲಿ ಒಟ್ಟು 18 ಹೊಸ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳು ಮಂಜೂರಾಗಿರುತ್ತವೆ. ಅದರಲ್ಲಿ 16 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಕಟ್ಟಡ ಕಾಮಗಾರಿ ಪೂರ್ಣಗೊಂಡು ಶೈಕ್ಷಣಿಕ ಚಟುವಟಿಕೆ ಪ್ರಾರಂಭಗೊಂಡಿದೆ. ಅರಸೀಕೆರೆ ಮತ್ತು ದೇವದುರ್ಗ ಇಂಜಿನಿಯರಿಂಗ್ ಕಾಲೇಜುಗಳ ಕಟ್ಟಡ ನಿರ್ಮಾಣ ಪ್ರಗತಿಯಲ್ಲಿದೆ.
ಹೊಸ ಇಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಸರ್ಕಾರಿ ಕಾಲೇಜುಗಳನ್ನು ಸ್ಥಾಪಿಸಲು 11-07-2024ರಲ್ಲಿ ಅಧಿಕಾರಿಗಳ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯ ವರದಿಯನುಸಾರ ಮುಂದಿನ ಕ್ರಮ ವಹಿಸಲಾಗುವುದು ಎಂದರು. ಪ್ರಸ್ತುತ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ತಳಕಲ್ ಗ್ರಾಮದಲ್ಲಿ ಹಾಗೂ ಗಂಗಾವತಿಯಲ್ಲಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ತಳಕಲ್ ನಲ್ಲಿ ವಿಟಿಯು ನೊಂದಿಗೆ ಒಪ್ಪಂದ ಮಾಡಿಕೊಂಡು ದೊಡ್ಡಮಟ್ಟದ ಕೌಶಲ್ಯ ತರಬೇತಿ ಕೇಂದ್ರವನ್ನು ಸ್ಥಾಪಿಸಲು ಕ್ರಮ ವಹಿಸಲಾಗುತ್ತಿದೆ ಎಂದು ವಿವರಿಸಿದರು.