ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ಒದಗಿಸುವ ಸಂಚಾರಿ ಆರೋಗ್ಯ ಘಟಕದ ಎರಡು ವಾಹನಗಳಿಗೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಚಾಲನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಗುರುವಾರ ಕಾರ್ಮಿಕ ಇಲಾಖೆ ಹಾಗೂ ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ಸಂಚಾರಿ ಆರೋಗ್ಯ ಕ್ಲಿನಿಕ್ಗಳಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಕಾರ್ಮಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಕ್ರಮವಹಿಸಿದ್ದು, ಈ ನಿಟ್ಟಿನಲ್ಲಿ ಜಿಲ್ಲೆಯ ಕಟ್ಟಡ ನಿರ್ಮಾಣ ಕಾರ್ಮಿಕರನ್ನು ಅವರಿರುವ ಸ್ಥಳಕ್ಕೆ ತೆರಳಿ ಉಚಿತವಾಗಿ ಆರೋಗ್ಯ ತಪಾಸಣೆಗೆ ಒಳಪಡಿಸುವುದು, ಚಿಕಿತ್ಸೆ ಹಾಗೂ ಸಲಹೆ ಸೇರಿದಂತೆ ಮೊದಲಾದ ಸೇವೆ ಒದಗಿಸಲು ಸಂಚಾರಿ ಆರೋಗ್ಯ ಕ್ಲಿನಿಕ್ಗಳು ಕಾರ್ಯಾರಂಭಗೊಂಡಿದ್ದು, ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಅವರ ಅವಲಂಬಿತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಕಾರ್ಮಿಕ ಅಧಿಕಾರಿ ಅನಿಲ ಬಾಲಚಂದ್ರ ಬಗಟಿ ಮಾತನಾಡಿ, ಎರಡು ತಾಲ್ಲೂಕುಗಳಿಗೆ ಒಂದರಂತೆ ಜಿಲ್ಲೆಗೆ ಮೂರು ಸಂಚಾರಿ ಆರೋಗ್ಯ ಘಟಕ ವಾಹನಗಳು ಮಂಜೂರಾಗಿದ್ದು, ಸದ್ಯದ ಮಟ್ಟಿಗೆ ಎರಡು ವಾಹನಗಳು ಕಾರ್ಯನಿರ್ವಹಿಸಲಿವೆ ಎಂದು ಹೇಳಿದರು.
ಸಂಚಾರಿ ಆರೋಗ್ಯ ಘಟಕವು ರೂಟ್ ಮ್ಯಾಪ್ನಂತೆ ನಿಗಧಿತ ಸ್ಥಳಗಳಲ್ಲಿ ಕನಿಷ್ಟ 4 ಗಂಟೆ ಕಾರ್ಯನಿರ್ವಹಿಸಲಿದೆ. ಸಂಚಾರಿ ಆರೋಗ್ಯ ಘಟಕದಲ್ಲಿ ವೈದ್ಯರು ಒಳಗೊಂಡಂತೆ, ಒಟ್ಟು ಆರು ಸಿಬ್ಬಂದಿಗಳು ಕಾರ್ಯನಿರ್ವಹಿಸಲಿದ್ದಾರೆ. ಈ ಘಟಕದಲ್ಲಿ ವೈದ್ಯಕೀಯ ಉಪಕರಣಗಳು, ಪ್ರಯೋಗಾಲಯಗಳು ಹಾಗೂ ವೈದ್ಯಕೀಯ ಬಳಕೆಯ ವಸ್ತುಗಳು ಲಭ್ಯವಿವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ರಘುಮೂರ್ತಿ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಕಾರ್ಮಿಕ ನಿರೀಕ್ಷಕರಾದ ರಾಜಣ್ಣ, ಕುಸುಮ, ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಪಿ.ಸತೀಶ್ ಕುಮಾರ್ ಸೇರಿದಂತೆ ಕಾರ್ಮಿಕ ಸಂಘಟನೆಗಳ ಮುಖಂಡರು ಇದ್ದರು.