ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಗುರುವಾರ ಮಧ್ಯಾಹ್ನ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆಯಿತು.
ಕೋರ್ ಕಮಿಟಿ ಸಭೆಯಲ್ಲಿ ರಾಜ್ಯಾಧ್ಯಂತ ಪಕ್ಷ ಸಂಘಟನೆಗೆ ಒತ್ತು ನೀಡಿ ಬೇರು ಮಟ್ಟದಿಂದ ಕಾರ್ಯಕರ್ತರನ್ನು ಸಂಘಟಿಸಬೇಕು. ಹಾಗೂ ಆಡಳಿತ ರೂಢ ಸರ್ಕಾರದ ಲೋಪಗಳನ್ನು ಜನರಿಗೆ ತಿಳಿಸುವುದಲ್ಲದೆ ಪರಿಶಿಷ್ಟರ ಮೇಲೆ ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ ದೌರ್ಜನ್ಯದ ವಿರುದ್ಧ ಮತ್ತು ಹಿಂದೂಗಳ ರಕ್ಷಣೆಗೆ ನಿರಂತರ ಕಾರ್ಯಕ್ರಮಗಳನ್ನು ಹಾಕಿಕೊಳ್ಳುವ ಬಗ್ಗೆ ಸಾಕಷ್ಟು ಚರ್ಚೆ ನಡೆಯಿತು ಎನ್ನಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ಅಧ್ಯಕ್ಷತೆ ವಹಿಸಿದ್ದರು. ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ಮಾಜಿ ಉಪಮುಖ್ಯಮಂತ್ರಿ ಮತ್ತು ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ, ಮಾಜಿ ಸಚಿವ ಬಿ. ಶ್ರೀರಾಮುಲು, ಬಿಜೆಪಿ ಪುದುಚೇರಿ ರಾಜ್ಯ ಉಸ್ತುವಾರಿ ನಿರ್ಮಲ್ ಕುಮಾರ್ ಸುರಾಣ ಅವರು ಪಾಲ್ಗೊಂಡಿದ್ದರು.
ವಿಶೇಷ ಆಹ್ವಾನಿತರಾದ ಬಿಜೆಪಿ ಕರ್ನಾಟಕ ರಾಜ್ಯ ಉಸ್ತುವಾರಿ ಮತ್ತು ರಾಜ್ಯಸಭಾ ಸಂಸದ ಡಾ. ರಾಧಾಮೋಹನ್ ದಾಸ್ ಅಗ್ರವಾಲ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಸಹ ಉಸ್ತುವಾರಿ ಸುಧಾಕರ್ ರೆಡ್ಡಿ ಮತ್ತು ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ತಿನ ಸದಸ್ಯ ಸಿ.ಟಿ.ರವಿ ಅವರು ಭಾಗವಹಿಸಿದ್ದರು.