ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧ ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟಿದ್ದ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸೋಮವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಮಾಡಿದೆ.
ವಾಲ್ಮೀಕಿ ಹಗರಣದ ರೂವಾರಿ ಆರೋಪಿ ಮಾಜಿ ಸಚಿವ ಬಿ.ನಾಗೇಂದ್ರ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, 2 ಲಕ್ಷ ರೂ ಬಾಂಡ್, ಇಬ್ಬರ ಶ್ಯೂರಿಟಿ ಮೇಲೆ ಜಾಮೀನು ನೀಡಿ ಆದೇಶ ಮಾಡಿದೆ.
ಮಾಜಿ ಸಚಿವ ನಾಗೇಂದ್ರ ಅವರ ನಿರ್ದೇಶನದಂತೆ ಸಂಪೂರ್ಣ ಹಣದ ವಹಿವಾಟು ನಡೆದಿದೆ. ವಾಲ್ಮೀಕಿ ಹಗರಣ ಸಂಬಂಧ ಈಗಾಗಲೇ ಚಾರ್ಜ್ ಶೀಟ್ ಸಲ್ಲಿಸಿರುವ ಇಡಿ, ಬಿ.ನಾಗೇಂದ್ರ ಪ್ರಕರಣದ ಮಾಸ್ಟರ್ ಮೈಂಡ್ ಎಂದು ಉಲ್ಲೇಖಿಸಿತ್ತು. ಲೋಕಸಭೆ ಚುನಾವಣೆ ಸಂದರ್ಭದಲ್ಲಿ 21 ಕೋಟಿ ರೂ. ದುರುಪಯೋಗವಾಗಿದೆ. ಬೆಂಗಳೂರು ಹಾಗೂ ಬಳ್ಳಾರಿ ನಗರಗಳಿಂದ ವಿವಿಧೆಡೆಗೆ ಹಣ ರವಾನೆಯಾಗಿದೆ ಎಂದು ಇಡಿ ತನ್ನ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿತ್ತು.