ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಈ ಬಾರಿಯ ಬಜೆಟ್ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, ಮಾರಣಾಂತಿಕ ಕ್ಯಾನ್ಸರ್ ರೋಗಕ್ಕೆ ಸಂಬಂಧಿಸಿದ 36 ಔಷಧಿಗಳಿಗೆ ಕಸ್ಟಮ್ಸ್ ಸುಂಕದಿಂದ ವಿನಾಯಿತಿ ನೀಡಲಾಗಿದೆ ಎಂದು ಬಿಜೆಪಿ ತಿಳಿಸಿದೆ.
ಜೀವರಕ್ಷಕ ಔಷಧಿಗಳಿಗೆ ಕಸ್ಟಮ್ ಸುಂಕದಿಂದ ವಿನಾಯಿತಿ ನೀಡಿರುವುದು ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡಲಿದ್ದು ಇದು ಕ್ಯಾನ್ಸರ್ ಸೇರಿದಂತೆ ಇತರ ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಸಹಕಾರಿಯಾಗಲಿದೆ ಎಂದು ಬಿಜೆಪಿ ಹೇಳಿದೆ.
ಮುಂದಿನ ಮೂರು ವರ್ಷಗಳಲ್ಲಿ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇ ಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಸ್ಥಾಪಿಸುವ ಬಗ್ಗೆ ಘೋಷಿಸಲಾಗಿದ್ದು, 2025-26 ರಲ್ಲಿಯೇ 200 ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ವಿತ್ತ ಸಚಿವರು ಘೋಷಿಸಿದ್ದಾರೆ.
ಡೇ ಕೇರ್ ಸೆಂಟರ್ಗಳು ರೋಗಿಗಳಿಗೆ ಮತ್ತು ಅವರ ಕುಟುಂಬಗಳಿಗೆ ಕ್ಯಾನ್ಸರ್ನ ಸವಾಲುಗಳನ್ನು ನಿಭಾಯಿಸಲು ಸಹಾಯ ಮಾಡಲಿದೆ ಎಂದು ಬಿಜೆಪಿ ತಿಳಿಸಿದೆ.
ಸ್ವಿಗ್ಗಿ, ಜೊಮ್ಯಾಟೋದಂತಹ ಸಂಸ್ಥೆಗಳಲ್ಲಿ ಫುಡ್ಡೆಲಿವರಿ ಮಾಡುವ ಹಾಗೂ ಇ-ಕಾಮರ್ಸ್ಸಂಸ್ಥೆಗಳಾದ ಅಮೆಜಾನ್, ಪ್ಲಿಫ್ಕಾರ್ಟ್ ಮೊದಲಾದ ಸಂಸ್ಥೆಗಳಲ್ಲಿ ಡೆಲಿವರಿ ವೃತ್ತಿಯಲ್ಲಿ ತೊಡಗಿಸಿಕೊಂಡ ಎಲ್ಲಾ ಅಸಂಘಟಿತ ಗಿಗ್ ಕಾರ್ಮಿಕರಿಗೆ ಅಧಿಕೃತ ಗುರುತಿನ ಚೀಟಿ, ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (ಪಿಎಂ-ಜೆಎವೈ) ಅಡಿಯಲ್ಲಿ ಆರೋಗ್ಯ ಸೌಲಭ್ಯಗಳನ್ನು ಒದಗಿಸಲಾಗುವುದು. ಈ ಕ್ರಮವು ಸುಮಾರು 1 ಕೋಟಿ ಕಾರ್ಮಿಕರಿಗೆ ನೆರವಾಗಲಿದೆ ಎಂದು ಬಿಜೆಪಿ ತಿಳಿಸಿದೆ.

