ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೇಶ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವವಾಗಿದೆ. ಶಿಕ್ಷಕರು ದೇಶದ ಸರ್ವೋತೊಮುಖ ಏಳಿಗೆಗೆ ಶ್ರಮಿಸುವವರು. ವಿಜ್ಞಾನ ಓದಿ ಕರ್ಮಸಿದ್ಧಾಂತ ನಂಬಿದರೆ, ಮೌಡ್ಯಕ್ಕೆ ಜೋತು ಬಿದ್ದರೆ ಅಂಥಾ ಶಿಕ್ಷಣ ನಿರರ್ತಕ. ರೈತರು -ಶಿಕ್ಷಕರು – ಸೈನಿಕರು ದೇಶದ ನಿರ್ಮಾತೃಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಶಾಲಾ ಶಿಕ್ಷಣ ಮತ್ತು ಮತ್ತು ಸಾಕ್ಷರತಾ ಇಲಾಖೆಯ ಹಾಗೂ ಉನ್ನತ ಶಿಕ್ಷಣ ಇಲಾಖೆಯ ವತಿಯಿಂದ ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಹಮ್ಮಿಕೊಳ್ಳಲಾದ ಭಾರತ ರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳು, ದೇಶದ ಎರಡನೇ ರಾಷ್ಟ್ರಪತಿಗಳಾಗಿದ್ದ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ಅವರು ಶ್ರೇಷ್ಠ ಶಿಕ್ಷಕರಾಗಲು ಸಾಧ್ಯವಾಗಿದೆ ಅಂದರೆ, ಇದೇ ಸಾಧ್ಯತೆ ಎಲ್ಲಾ ಶಿಕ್ಷಕರಿಗೂ ಇದ್ದೇ ಇರುತ್ತದೆ. ಹೀಗಾಗಿ ಪ್ರತಿಯೊಬ್ಬ ಶಿಕ್ಷಕರೂ ರಾಧಾಕೃಷ್ಣನ್ ಅವರ ಮಾರ್ಗದಲ್ಲಿ ನಡೆಯಲು ಪ್ರಯತ್ನಿಸಬೇಕು ಎಂದು ಹೇಳಿದರು.
ವಿದ್ಯಾರ್ಥಿಗಳನ್ನು ಪುಸ್ತಕ ಹುಳುಗಳನ್ನಾಗಿ ಮಾಡದೆ ಮೌಲ್ಯಗಳಿಗೆ ಒತ್ತು ನೀಡಿ ದೇಶದ ಉತ್ತಮ ಪ್ರಜೆಗಳಾಗಿ ರೂಪಿಸುವುದು ಶಿಕ್ಷಕರ ಅದ್ಯ ಕರ್ತವ್ಯವಾಗಬೇಕು. ವಿದ್ಯಾರ್ಥಿಗಳು ತಪ್ಪು ದಾರಿಯಲ್ಲಿ ನಡೆದಾಗ ಅದನ್ನು ಗುರುತಿಸಿ, ಅವರನ್ನು ತಿದ್ದಿ, ಬುದ್ದಿ ಹೇಳಿ ಒಳ್ಳೆಯ ಮಾರ್ಗದಲ್ಲಿ ನಡೆಯುವಂತೆ ಅವರ ವ್ಯಕ್ತಿತ್ವವನ್ನು ರೂಪಿಸುವ ಮೂಲಕ ದೇಶದ ವ್ಯಕ್ತಿತ್ವವನ್ನು ರೂಪಿಸುವವರು ಶಿಕ್ಷಕರು. ಇದು ಶಿಕ್ಷಕರ ಮೂಲಭೂತ ಜವಾಬ್ದಾರಿ. ಆಕಸ್ಮಿಕವಾಗಿ ಶಿಕ್ಷಕ ವೃತ್ತಿಗೆ ಬಂದವರಿಗಿಂತ ಶಿಕ್ಷಕ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರೇ ಅತಿ ಹೆಚ್ಚಾಗಿದ್ದಾರೆ. ಹೀಗೆ ಈ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರ ಬಗ್ಗೆ ನನಗೆ ಹೆಮ್ಮೆ ಎನಿಸುತ್ತದೆ ಎಂದರು.
ವಿದ್ಯಾರ್ಥಿಗಳು ಸ್ವತಂತ್ರವಾಗಿ ಯೋಚಿಸುವಂತೆ ರೂಪಿಸುವುದೇ ಶಿಕ್ಷಕರ ಜವಾಬ್ದಾರಿ. ವೈಜ್ಞಾನಿಕತೆ ಮತ್ತು ವೈಚಾರಿಕತೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಂಡರೆ ಮಾತ್ರ ಅವರಿಗೆ ಸಮಾಜ ಅರ್ಥ ಆಗುತ್ತದೆ. ಸಮಾಜದ ಸಮಸ್ಯೆಗಳಿಗೆ ಪರಿಹಾರ ರೂಪಿಸುತ್ತಾರೆ. ವಿಜ್ಞಾನ ಓದಿರುವ ವಿದ್ಯಾರ್ಥಿಗಳು ಮೌಡ್ಯಕ್ಕೆ ಜೋತು ಬೀಳುವುದು, ಜಾತಿ ತಾರತಮ್ಯ ಮಾಡುವುದಾದರೆ ಅವರಿಗೆ ಸಿಕ್ಕ ಶಿಕ್ಷಣಕ್ಕೆ ಅರ್ಥ ಇರುವುದಿಲ್ಲ. ಆದ್ದರಿಂದ ವಿದ್ಯಾರ್ಥಿಗಳನ್ನು ವೈಚಾರಿಕವಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರದ್ದಾಗಿದೆ ಎಂದು ಹೇಳಿದರು.
ಈ ಹಿಂದೆ ಕೆಲವೊಂದು ಸಮುದಾಯಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದರು. ಕೆಲವರಿಗೆ ಶಿಕ್ಷಣ ದೊರಕದಂತೆ ತಡೆಯುತ್ತಿದ್ದರು. ಆಂತಹ ಕಾಲ ಈಗ ಇಲ್ಲ. ಈಗ ಪ್ರತಿಯೊಬ್ಬರಿಗೂ ಶಿಕ್ಷಣ ಕಡ್ಡಾಯಗೊಳಿಸಲಾಗಿದೆ. ಕಡ್ಡಾಯ ಶಿಕ್ಷಣದ ಜೊತೆಗೆ ಅತ್ಯುತ್ತಮ ವ್ಯಕ್ತಿತ್ವಗಳನ್ನು ರೂಪಿಸುವ ರೂವಾರಿಗಳು ನಮ್ಮ ಶಿಕ್ಷಕರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮನುಷ್ಯ ಮನುಷ್ಯನನ್ನು ಪ್ರೀತಿಸುವ ಮಾನವೀಯ ಜವಾಬ್ದಾರಿಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವುದು ಶಿಕ್ಷಕರಿಂದ, ಶಿಕ್ಷಣದಿಂದ ಮಾತ್ರ ಸಾಧ್ಯ. 800 ವರ್ಷಗಳ ಹಿಂದೆಯೇ ಕರ್ಮ ಸಿದ್ಧಾಂತವನ್ನು ಬಸವಾದಿ ಶರಣರು ತಿರಸ್ಕರಿಸಿದ್ದರು. ಆದರೂ ಇವತ್ತಿನ ಶಿಕ್ಷಕರೂ ಹಣೆಬರಹ ಮುಂತಾದ ಕರ್ಮಸಿದ್ಧಾಂತವನ್ನು ನಂಬುತ್ತಾರೆ. ಇದು ಸರಿಯಲ್ಲ. ಸಾವಿತ್ರಿ ಬಾಯಿ ಫುಲೆ, ಸರ್ವಪಲ್ಲಿ ರಾಧಾಕೃಷ್ಣನ್ ಅವರ ಆದರ್ಶಗಳು ಇಡೀ ಶಿಕ್ಷಕ ಸಮುದಾಯಕ್ಕೆ ಮಾದರಿಯಾಗಲಿ ಎಂದು ಹಾರೈಸಿದರು.
ಶಿಕ್ಷಕರ ಸಮಸ್ಯೆಗಳನ್ನು ಶಿಕ್ಷಕರ ಸಂಘದ ಜೊತೆ ಸೇರಿ ಸುದೀರ್ಘವಾಗಿ ಚರ್ಚಿಸಿದ್ದೇನೆ. ಪದವಿಪೂರ್ವ ಶಿಕ್ಷಕರ ಸಮಸ್ಯೆಗಳು ಅರ್ಥವಾಗಿದೆ. ಇವುಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನವನ್ನು ಪ್ರಾಮಾಣಿಕವಾಗಿ ಮಾಡುತ್ತೇವೆ ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.
ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಅವರು ಮಾತನಾಡಿ, ಭಾರತದ ಮಾಜಿ ರಾಷ್ಟ್ರಪತಿ ದಿ. ಸರ್ವಪಲ್ಲಿ ರಾಧಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ. ಶಿಕ್ಷಕರ ವೃತ್ತಿ ಪವಿತ್ರವಾದದನ್ನು. ಸರ್ಕಾರ ಸರ್ಕಾರಿ ಶಾಲೆಯ ಎಲ್ಲಾ ಮಕ್ಕಳಿಗೂ ಪೌಷ್ಠಿಕ ಆಹಾರ ನೀಡುತ್ತಿದೆ. ಅಜೀಮ ಪ್ರೇಮ್‍ಜಿ ಫೌಂಡೇಷನ್ ಎಲ್ಲಾ ಶಾಲೆಗಳಿಗೂ ಮೊಟ್ಟೆ ಪೂರೈಸಲು 1500 ಕೋಟಿ ರೂ ಹಣ ನೀಡಿದೆ. ಶಾಲೆಗಳಲ್ಲಿ ಉಚಿತ ನೀರು, ವಿದ್ಯುತ್ ಕಲ್ಪಿಸಲಾಗಿದೆ. ರಾಜ್ಯದ 1008 ಶಾಲೆಗಳಲ್ಲಿ ಎಲ್.ಕೆ.ಜಿ, ಯು.ಕೆ.ಜಿ ಯನು ಪ್ರಾರಂಭಿಸಿದ್ದು, ಈವರೆಗೂ ಸುಮಾರು 40,000 ಕ್ಕೂ ಹೆಚ್ಚು ಮಕ್ಕಳು ಕಲಿಯುತ್ತಿದ್ದಾರೆ. ಅತಿಥಿ ಶಿಕ್ಷಕರನ್ನು ಈ ಬಾರಿ ಮೊದಲೇ ತೆಗೆದುಕೊಂಡು ತರಗತಿಗಳನ್ನು ನಡೆಸಲಾಗುತ್ತಿದೆ. ಶಿಕ್ಷಕರ ವರ್ಗಾವಣೆಯನ್ನು ಸಹ ಸರ್ಕಾರ ಯಶಸ್ವಿಯಾಗಿ ನಡೆಸಿದೆ. ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳಿಗೂ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದೆ. ಈ ಬಾರಿ ಶಿಕ್ಷಕರಿಗೆ ಹಾಗೂ ಒಳ್ಳೆಯ ಶಿಕ್ಷಣ ಸಂಸ್ಥೆಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದರು.
ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಮಾತನಾಡಿ, ಶಿಕ್ಷಕರ ದಿನಾಚರಣೆಯಂದು ಶಿಕ್ಷಕರಿಗೆ ಗೌರವ ಸಲ್ಲಿಸುವ ದಿನ. ದೇಶದಲ್ಲಿ ಸೈನಿಕರು ಹಾಗೂ ಶಿಕ್ಷಕರು ದೇಶವನ್ನು ಕಟ್ಟುವವರು. ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಕೌಶಲ್ಯವನ್ನು ಸಹ ನೀಡಬೇಕು. ನಾವು 2024-25ನೇ ಸಾಲಿನಲ್ಲಿ ರಾಜ್ಯ ಶಿಕ್ಷಣ ನೀತಿಯನ್ನು ತರುವಲ್ಲಿ ಯಶಸ್ವಿಯಾಗಿದ್ದೇವೆ. ಅಲ್ಲದೆ 1001 ಸಹಾಯಕ ಪ್ರಾಧ್ಯಾಪಕರಿಗೆ ನೇಮಕಾತಿ ಆದೇಶ ಹೊರಡಿಸಲಾಗುತ್ತಿದೆ. ಪ್ರಾಂಶುಪಾಲರ ನೇಮಕ, ಭೋದ, ಸಹ ಪ್ರಾಧ್ಯಾಪಕರ ಪದೊನ್ನತಿ, ಖಾಲಿ ಹುದ್ದೆಗಳ ಭರ್ತಿಗೆ ಇಲಾಖೆ ಕ್ರಮ ವಹಿಸುತ್ತಿದೆ ಎಂದರು.
ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೀಶ್ ಕುಮಾರ್ ಸಿಂಗ್, ಆಯುಕ್ತೆ ಬಿ.ಬಿ. ಕಾವೇರಿ, ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀಕರ್ ಎಂ.ಎಸ್, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಜಿ. ಜಗದೀಶ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿ ಸಿಂಧು ರೂಪೇಶ್ ಸೇರಿದಂತೆ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು, ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು, ಶಿಕ್ಷಕರು, ಉಪನ್ಯಾಸಕರು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಉತ್ತಮ ಶಿಕ್ಷಕರಿಗೆ ರಾಜ್ಯಮಟ್ಟದ ಪ್ರಶಸ್ತಿ ಪ್ರಧಾನ ಮಾಡಲಾಯಿತು.