ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಾಣಿಜ್ಯ ಬೆಳೆ ತಂಬಾಕಿಗೆ ಸಮರ್ಪಕ ಬೆಂಬಲ ಬೆಲೆ ಮತ್ತು ತಂಬಾಕು ಬೆಳೆಗಾರರು ಹಲವು ವರ್ಷಗಳಿಂದ ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಮಂಗಳವಾರ ನವದೆಹಲಿಯಲ್ಲಿ ಜೆಡಿಎಸ್ ವರಿಷ್ಠರು ಹಾಗೂ ಮಾಜಿ ಪ್ರಧಾನಮಂತ್ರಿ ಮತ್ತು ರಾಜ್ಯಸಭಾ ಸದಸ್ಯರಾದ ಹೆಚ್.ಡಿ ದೇವೇಗೌಡ ಅವರನ್ನು ಹುಣಸೂರು ಕ್ಷೇತ್ರದ ಶಾಸಕರಾದ ಜಿ.ಡಿ. ಹರೀಶ್ ಗೌಡ ಅವರು ರೈತರೊಂದಿಗೆ ಭೇಟಿ ಮಾಡಿ ಮನವಿ ಸಲ್ಲಿಸಿ ಸೂಕ್ತ ಪರಿಹಾರ ಒದಗಿಸುವಂತೆ ಮನವಿ ಮಾಡಿದರು.
ಈ ಕುರಿತು ವಾಣಿಜ್ಯ ಸಚಿವರು ಹಾಗೂ ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿ, ಮುಂದಿನ ಕ್ರಮ ವಹಿಸುವುದಾಗಿ ಹೆಚ್. ಡಿ ದೇವೇಗೌಡರು ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ಬೆಲೆ ಕುಸಿತ ಸೇರಿ ಹಲವಾರು ಸಮಸ್ಯೆಗಳಿಗೆ ಸಿಲುಕಿ ತೀವ್ರ ಸಂಕಷ್ಟದಲ್ಲಿರುವ ರಾಜ್ಯದ ತಂಬಾಕು ಬೆಳೆಗಾರರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವರಾದ ಪಿಯೂಶ್ ಗೋಯಲ್ ಅವರನ್ನು ಭೇಟಿ ಮಾಡಿ ರೈತರ ನಿಯೋಗ ಮನವಿ ಸಲ್ಲಿಸಿತು.
ಅನ್ಯ ರಾಜ್ಯಗಳ ತಂಬಾಕು ಬೆಳೆಗಾರರಿಗೆ ಹೋಲಿಸಿದರೆ ರಾಜ್ಯದ ಬೆಳೆಗಾರರು ಬಹಳ ಸಂಕಷ್ಟದಲ್ಲಿದ್ದು, ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಹಾಗೂ ಬೆಳೆಗಾರರ ಜೀವನೋಪಾಯದ ದೃಷ್ಟಿಯಿಂದ ತಂಬಾಕಿಗೆ ಸೂಕ್ತ ಬೆಲೆ ನಿಗದಿಪಡಿಸುವ ನಿಟ್ಟಿನಲ್ಲಿ ಕೇಂದ್ರ ಸಚಿವರಲ್ಲಿ ಚರ್ಚೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ನಮ್ಮ ಜತೆಯಲ್ಲಿ ಇದ್ದು, ತಂಬಾಕು ಬೆಳೆಗಾರರ ಸಂಕಷ್ಟದ ಬಗ್ಗೆ ಮಾನ್ಯ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.
ಮೈಸೂರು ಕೊಡಗು ಲೋಕಸಭೆ ಕ್ಷೇತ್ರದ ಸಂಸದರಾದ ಯದುವೀರ್ ಒಡೆಯರ್,
ಹುಣಸೂರು ಶಾಸಕರಾದ ಜಿ.ಟಿ.ಹರೀಶ್ ಗೌಡ, ಕೋಲಾರ ಸಂಸದರಾದ ಮಲ್ಲೇಶ್ ಬಾಬು, ಮಾಜಿ ಸಚಿವ ಸಾ.ರಾ.ಮಹೇಶ್, ಪಿರಿಯಾಪಟ್ಟಣದ ರೈತ ಮುಖಂಡ ಪ್ರಸನ್ನ ಅವರು ಸೇರಿದಂತೆ ಹುಣಸೂರು ಭಾಗದ ಮುಖಂಡರು ಹಾಗೂ ರೈತರು ಉಪಸ್ಥಿತರಿದ್ದರು.