ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಜ್ಜನ ರಾಜಕಾರಣಿ ಎಸ್.ಎಂ. ಕೃಷ್ಣ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಮಂಗಳವಾರ ಬೆಳಗಿನ ಜಾವ(ತಡರಾತ್ರಿ) 02:45ರ ಸುಮಾರಿಗೆ ಬೆಂಗಳೂರಿನ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 93ವರ್ಷ ವಯಸ್ಸಾಗಿತ್ತು.
ಎಸ್.ಎಂ. ಕೃಷ್ಣ ಅವರು ರಾಜ್ಯ ಮತ್ತು ರಾಷ್ಟ್ರೀಯ ರಾಜಕಾರಣದಲ್ಲಿ ಸುಮಾರು 40 ವರ್ಷಗಳ ಕಾಲ ರಾಜಕಾರಣ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಅವರು ವಿದೇಶಾಂಗ ಸಚಿವ ಹಾಗೂ ಮಹಾರಾಷ್ಟ್ರದ ಮಾಜಿ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದ ಧೀಮಂತ ಹಿರಿಯ ರಾಜಕಾರಣಿ ಎಸ್.ಎಂ. ಕೃಷ್ಣ.
ಎಸ್.ಎಂ. ಕೃಷ್ಣ ಜೀವನ:
1932 ಮೇ 01 ರಂದು ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಸೋಮನಹಳ್ಳಿಯಲ್ಲಿ ಜನಿಸಿದ್ದರು. ಅವರ ತಂದೆಯ ಹೆಸರು ಎಸ್.ಸಿ. ಮಲ್ಲಯ್ಯ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ್ದ ಎಸ್.ಎಂ. ಕೃಷ್ಣ, ಬಳಿಕ ಬೆಂಗಳೂರಿನ ಸರ್ಕಾರಿ ಕಾಲೇಜಿನಲ್ಲಿ ಕಾನೂನು ಪದವಿ ಪಡೆದು, ಉನ್ನತ ಶಿಕ್ಷಣಕ್ಕಾಗಿ ಅಮೆರಿಕಾಕ್ಕೆ ತೆರಳಿದರು.
ಅಂತಾರಾಷ್ಟ್ರೀಯ ಕಾನೂನು ಕಲಿಕೆಯಲ್ಲಿ ಪದವಿ ಪಡೆದರು. 1962ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆ ಆಗುವ ಮಾಡುವ ಮೂಲಕ ಗಮನ ಸೆಳೆದರು.
ಕರ್ನಾಟಕಕ್ಕೆ ಹಿಂದಿರುಗಿದ ಕೂಡಲೇ 1962ರಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕಾಂಗ್ರೆಸ್ ಅಭ್ಯರ್ಥಿಯನ್ನು ಮಣಿಸುವ ಮೂಲಕ ಮೊದಲ ಬಾರಿಗೆ ವಿಧಾನಸಭಾ ಸದಸ್ಯರಾಗಿ ಆಯ್ಕೆಯಾದರು.
ಇದರ ಬೆನ್ನಲ್ಲೇ ಪ್ರಜಾ ಸೋಷಿಯಲಿಸ್ಟ್ ಪಕ್ಷವನ್ನು ಸೇರಿದ ಎಸ್.ಎಂ. ಕೃಷ್ಣ 1968ರಲ್ಲಿ ನಡೆದ ಮಂಡ್ಯ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲೂ ಸಹ ಸ್ಪರ್ಧಿಸಿ ವಿಜಯಶಾಲಿಯಾದರು. ಬಳಿಕ ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ಎಸ್.ಎಂ. ಕೃಷ್ಣ 1971ರ ಮಂಡ್ಯ ಲೋಕಸಭಾ ಕ್ಷೇತ್ರದ ಮರು ಚುನಾವಣೆಯಲ್ಲೂ ಗೆಲುವಿನ ನಗೆ ಬೀರಿದರು. 1983-84ರ ನಡುವೆ ಇಂದಿರಾಗಾಂಧಿ ಸರ್ಕಾರದಲ್ಲಿ ಹಾಗೂ 1984-85ರ ಅವಧಿಯಲ್ಲಿ ರಾಜೀವ್ ಗಾಂಧಿ ಸರ್ಕಾರದಲ್ಲಿ ಕೈಗಾರಿಕೆ ಮತ್ತು ಹಣಕಾಸು ರಾಜ್ಯ ಸಚಿವರಾಗಿಯೂ ಎಸ್.ಎಂ. ಕೃಷ್ಣ ಸೇವೆ ಸಲ್ಲಿಸಿ ಕೀರ್ತಿ ಗಳಿಸಿದ್ದರು.
1985ರಲ್ಲಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎಸ್. ಎಂ. ಕೃಷ್ಣ 1999 ರಿಂದ 2004ರವರೆಗೆ ಕರ್ನಾಟಕದ 16ನೇ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ನಂತರ 2004ರಿಂದ 2008ರವರೆಗೆ ಮಹಾರಾಷ್ಟ್ರದ ರಾಜ್ಯಪಾಲರಾಗಿದ್ದರು. 22 ಮೇ 2009ರಲ್ಲಿ ಆಗಿನ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಕೇಂದ್ರ ಸಚಿವ ಸಂಪುಟದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಜವಾಬ್ದಾರಿ ನಿರ್ವಹಿಸಿದ್ದರು.
ತಮ್ಮ ರಾಜಕೀಯ ಜೀವನದ ಬಹುಪಾಲು ಸಮಯವನ್ನು ಕಾಂಗ್ರೆಸ್ ಪಕ್ಷದಲ್ಲಿಯೇ ಕಳೆದಿದ್ದ ಎಸ್.ಎಂ. ಕೃಷ್ಣ 2017ರ ಮಾರ್ಚ್ ತಿಂಗಳಿನಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. 2023ರಲ್ಲಿ ಎಸ್.ಎಂ. ಕೃಷ್ಣ ಅವರಿಗೆ ಪದ್ಮವಿಭೂಷಣ ಗೌರವವನ್ನು ನೀಡಲಾಗಿದೆ. 2023ರ ಜನವರಿಯಲ್ಲಿ ತಾವಿನ್ನು ಸಕ್ರಿಯ ರಾಜಕಾರಣದಲ್ಲಿ ಇರುವುದಿಲ್ಲ ಎಂದು ಎಸ್.ಎಂ. ಕೃಷ್ಣ ಘೋಷಿಸಿದರು.
ಅಂತಿಮ ದರ್ಶನ-
ಬೆಂಗಳೂರಿನ ಸದಾಶಿವ ನಗರದ ಅವರ ಸ್ವಗೃಹದಲ್ಲಿ ಸಾರ್ವಜನಿಕರಿಗಾಗಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.