ಇಡಿ ಚಾರ್ಜ್ ಶೀಟ್ ನಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಕಿಂಗ್‌ಪಿನ್

khushihost

ಚಂದ್ರವಳ್ಳಿ ನ್ಯೂಸ್, ಬೆಂಗಳೂರು :
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ(ಇಡಿ) ಮಂಗಳವಾರ ಶಾಸಕರು/ಸಂಸದರ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ.

ಜೈಲು ಪಾಲಾಗಿರುವ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಹಗರಣದ ಮಾಸ್ಟರ್ ಮೈಂಡ್ ಎಂದು ಇಡಿ ತನ್ನ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದೆ ಎಂದು ಮೂಲಗಳು ತಿಳಿಸಿವೆ.

ಆದರೆ ಕರ್ನಾಟಕ ಪೊಲೀಸ್‌ನ ಅಪರಾಧ ತನಿಖಾ ಇಲಾಖೆ(ಸಿಐಡಿ) ಅಡಿಯಲ್ಲಿ ರಚನೆಯಾಗಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ) ಸಲ್ಲಿಸಿದ ಚಾರ್ಜ್‌ಶೀಟ್‌, ಇಡಿ ಚಾರ್ಜ್ ಶೀಟ್ ಗೆ ವಿರುದ್ಧವಾಗಿದೆ. ಎಸ್ಐಟಿ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ನಾಗೇಂದ್ರ ಅವರ ಹೆಸರನ್ನು ಉಲ್ಲೇಖಿಸಿಲ್ಲ ಮತ್ತು ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ.

ಕಳೆದ ತಿಂಗಳು ಎಸ್‌ಐಟಿ, ವಾಲ್ಮೀಕಿ ಹಗರಣ ಮತ್ತು ನಿಗಮದ ಖಾತೆ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಚಾರ್ಜ್ ಶೀಟ್‌ಗಳನ್ನು ಸಲ್ಲಿಸಿತ್ತು.

ರಾಜ್ಯ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಸ್‌ಐಟಿ ಕಾಂಗ್ರೆಸ್‌ನ ಮಾಜಿ ಸಚಿವ ನಾಗೇಂದ್ರ ಮತ್ತು ಬುಡಕಟ್ಟು ಕಲ್ಯಾಣ ಮಂಡಳಿ ಅಧ್ಯಕ್ಷ ಮತ್ತು ಕಾಂಗ್ರೆಸ್ ಶಾಸಕ ಬಸನಗೌಡ ದದ್ದಲ್ ಅವರನ್ನು ರಕ್ಷಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

- Advertisement -  - Advertisement -  - Advertisement - 
Share This Article
error: Content is protected !!
";