ಸ್ವಚ್ಛತೇಯೇ ಸೇವೆ ಆಂದೋಲನಕ್ಕೆ ಜಿಪಂ ಸಿಇಒ ಚಾಲನೆ
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ಅವರು ಸ್ವಚ್ಛತೆಯೇ ಸೇವೆ-2024ರ ಪ್ರಯುಕ್ತ ಸಸಿಗೆ ನೀರೆರೆಯುವ ಮೂಲಕ ಸ್ವಚ್ಛತಾ ಹೀ ಸೇವಾ ಆಂದೋಲನಕ್ಕೆ ಚಾಲನೆ ನೀಡಿ, ಸ್ವಚ್ಛತೆ ಬಗ್ಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಈ ವೇಳೆ ಮಾತನಾಡಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಗ್ರಾಮೀಣ ಪ್ರದೇಶದ ಜನರಲ್ಲಿ ನೈರ್ಮಲ್ಯ, ಶುಚಿತ್ವ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಈಗಾಗಲೇ ಸೆಪ್ಟೆಂಬರ್ 14 ರಿಂದ ಸ್ವಚ್ಛತಾ ಹಿ ಸೇವಾ ಪಾಕ್ಷಿಕ ಆಚರಣೆ ಪ್ರಾರಂಭವಾಗಿದ್ದು, ಅಕ್ಟೋಬರ್ 02 ರವರೆಗೆ ನಡೆಯಲಿದೆ. ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಅಂದೋಲನ ರೀತಿಯಲ್ಲಿ ಸ್ವಚ್ಛತಾ ಅಭಿಯಾನ ನಡೆಸುವಂತೆ ತಿಳಿಸಿದರು.
ಸ್ವಚ್ಛ ಭಾರತ ಅಭಿಯಾನದ 10ನೇ ವಾರ್ಷಿಕೋತ್ಸವವನ್ನು ಸ್ವಭಾವ ಸ್ವಚ್ಛತೆ, ಸಂಸ್ಕಾರ ಸ್ವಚ್ಛತೆ ಧ್ಯೇಯವಾಕ್ಯದೊಂದಿಗೆ ಸ್ವಚ್ಛತಾ ಕಿ ಭಾಗಿದಾರ, ಸಂಪೂರ್ಣ ಸ್ವಚ್ಛತಾ ಚಟುವಟಿಕೆಗಳು ಹಾಗೂ ಸಫಾಯಿ ಮಿತ್ರ ಸುರಕ್ಷಾ ಮೂರು ಚಟುವಟಿಕೆಗಳನ್ನು ಕೇಂದ್ರಿಕರಿಸಿ ಈ ಪಾಕ್ಷಿಕ ಆಂದೋಲನವನ್ನು ಆಚರಿಸಲಾಗುತ್ತಿದೆ ಎಂದರು.
ಇದೇ ವೇಳೆ ಜಿಲ್ಲಾ ಪಂಚಾಯಿತಿ ಆವರಣದಲ್ಲಿ “ತಾಯಿ ಹೆಸರಿನಲ್ಲಿ ಒಂದು ವೃಕ್ಷ” ಸಸಿ ನೆಡುವಿಕೆ ಅಭಿಯಾನಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಬಸನಗೌಡ ಪಾಟೀಲ್, ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಮಧು, ಸಹಾಯಕ ಯೋಜನಾಧಿಕಾರಿ ಸುಮಾ, ಸಾಮಾಜಿಕ ಅರಣ್ಯ ವಿಭಾಗದ ಅಧಿಕಾರಿಗಳು, ಸ್ವಚ್ಛ ಭಾರತ್ ಮಿಷನ್ ಜಿಲ್ಲಾ ಸಮಾಲೋಚಕರು, ನರೇಗಾ ಜಿಲ್ಲಾ ಸಂಯೋಜಕರು, ಎನ್‌ಆರ್‌ಎಲ್‌ಎಂ ಸಮಾಲೋಚಕರು, ಜಿಲ್ಲಾ ಪಂಚಾಯಿತಿ ಎಲ್ಲಾ ವಿಭಾಗಗಳ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಇದ್ದರು.