ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮವಹಿಸಬೇಕು ಹಾಗೂ ಸ್ವಚ್ಛ ಭಾರತ ಮಿಷನ್ (ಗ್ರಾಮೀಣ) ಯೋಜನೆಯ ಬೂದು ನೀರು ಮತ್ತು ಮಲತ್ಯಾಜ್ಯ ಸಂಸ್ಕರಣಾ ಘಟಕ, ಸಮಗ್ರ ಘನತ್ಯಾಜ್ಯ ನಿರ್ವಹಣಾ ಘಟಕದ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಜಲಜೀವನ್ ಮಿಷನ್ ಯೋಜನೆಯಡಿ ಅನುಷ್ಠಾನಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮತ್ತು ಬೇಸಿಗೆಯಲ್ಲಿ ಕುಡಿಯುವ ನೀರು ತೊಂದರೆ ಇರುವ ಗ್ರಾಮಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕುಡಿಯುವ ನೀರು ಸಮಸ್ಯೆ ತೀವ್ರವಾಗಿರುವ ಗ್ರಾಮಗಳಲ್ಲಿ ಖಾಸಗಿ ಬೋರ್ವೆಲ್ ಮಾಲೀಕರಿಂದ ಬಾಡಿಗೆ ಪಡೆದುಕೊಂಡು ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದು ತಿಳಿಸಿದ ಅವರು, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಎಲ್ಲ ತಾಲ್ಲೂಕು ಪಂಚಾಯಿತಿಗಲ್ಲಿ ಸಹಾಯವಾಣಿ ತೆರೆಯುವಂತೆ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಜಿ.ಪಂ.ಸಿಇಒ ಸೂಚನೆ ನೀಡಿದರು.
ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಓವರ್ ಹೆಡ್ ಟ್ಯಾಂಕ್ಗಳ ಸ್ವಚ್ಛಗೊಳಿಸಿ, ಕ್ಲೋರಿನೇಷನ್ ಮಾಡಬೇಕು. ಈ ಕುರಿತು ಆರೋಗ್ಯ ಇಲಾಖೆ ಅಧಿಕಾರಿಗಳು ಮೇಲ್ವಿಚಾರಣೆ ನಡೆಸಬೇಕು. ಜವನಗೊಂಡನಹಳ್ಳಿ ಮತ್ತು ಹರ್ತಿಕೋಟೆ ಕುಡಿಯುವ ನೀರು ಯೋಜನೆಗಳ ಬಾಕಿ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ, ಟ್ರಯಲ್ ರನ್ ಮಾಡಬೇಕು ಎಂದು ಹೇಳಿದರು.
ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಗಳು ಸಭೆಗಳನ್ನು ಆಯೋಜಿಸಿ, ನಡಾವಳಿ ಜಿಲ್ಲಾ ಪಂಚಾಯಿತಿಗೆ ಸಲ್ಲಿಸಬೇಕು. ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ನಿಗಧಿತ ಕಾಲಮಿತಿಯೊಳಗೆ ಬೂದು ನೀರು ಕಾಮಗಾರಿಗಳನ್ನು ಪೂರ್ಣಗೊಳಿಸಿ ಎಂದು ತಾಕೀತು ಮಾಡಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸ್ವಚ್ಛ ಸಂಕೀರ್ಣ ಘಟಕಗಳಲ್ಲಿ ಕಸ ಸಂಗ್ರಹಣೆ, ವಿಂಗಡಣೆ ಸಮರ್ಪಕವಾಗಿ ನಿರ್ವಹಿಸಲು ತಿಳಿಸಿದರು.
ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಿ.ವಿ.ಪುರ ಗ್ರಾಮ ಪಂಚಾಯಿತಿಯಲ್ಲಿ ಮಲತ್ಯಾಜ್ಯ ಸಂಸ್ಕರಣಾ ಘಟಕ ಪೂರ್ಣಗೊಂಡಿದ್ದು, ಟ್ರಯಲ್ ರನ್ ಮಾಡಲು ಸೂಚಿಸಿದರು. ಚಳ್ಳಕೆರೆ ತಾಲ್ಲೂಕಿನ ನಗರಂಗೆರೆ, ಮೊಳಕಾಲ್ಮುರು ತಾಲ್ಲೂಕಿನ ರಾಂಪುರ, ಹೊಳಲ್ಕೆರೆ ತಾಲ್ಲೂಕಿನ ಗುಂಡೇರಿ, ಚಿತ್ರದುರ್ಗ ತಾಲ್ಲೂಕಿನ ದ್ಯಾಮವ್ವನಹಳ್ಳಿ, ಹೊಸದುರ್ಗ ತಾಲ್ಲೂಕಿನ ಬೆಲಗೂರು ಗ್ರಾಮ ಪಂಚಾಯಿತಿಗಳಲ್ಲಿ ಮಲತ್ಯಾಜ್ಯ ಸಂಸ್ಕರಣಾ ಘಟಕ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಜಿಪಂ ಯೋಜನಾ ನಿರ್ದೇಶಕಿ ಸಿ.ಎಸ್.ಗಾಯಿತ್ರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ಬಸನಗೌಡ ಪಾಟೀಲ್, ಜಿಪಂ ಸಹಾಯಕ ಯೋಜನಾಧಿಕಾರಿ ಡಿ.ಎಸ್.ಸುಮಾ, ಜಲಜೀವನ್ ಮಿಷನ್ ಯೋಜನೆಯ ಯೋಜನಾ ವ್ಯವಸ್ಥಾಪಕ ಮಂಜುನಾಥ ಎಸ್ ನಾಡರ್, ಐಇಸಿ ಸಮಾಲೋಚಕ ಬಿ.ಸಿ.ನಾಗರಾಜ್, ಹೆಚ್ಆರ್ಡಿ ಸಮಾಲೋಚಕ ವಿನಯ್ ಕುಮಾರ್, ಎಸ್.ಹೆಚ್ ಸಮಾಲೋಚಕ ಪ್ರಮೀಳಾ, ಎಂಐಎಸ್ ಸಮಾಲೋಚಕ ಶಶಿಧರ್ ಮತ್ತು ಸ್ನೇಹನ್ ಹಾಗೂ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಾದ ಸತೀಶ್, ರವಿಕುಮಾರ್, ವಿಶ್ವನಾಥ್, ಸುನೀಲ್, ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರು ಹಾಗೂ ಸಿಬ್ಬಂದಿ ಇದ್ದರು.