ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪ್ರಸಕ್ತ ಸಾಲಿನಲ್ಲಿ ನರೇಗಾ ಜಾಬ್‍ಕಾರ್ಡ್ ಹೊಂದಿರುವ ಅರ್ಹ ಬಡ ಕುಟುಂಬಗಳಿಗೆ ಉದ್ಯೋಗ ನೀಡಲು ಸೂಚಿಸಿದ ಅವರು, ವೈಯಕ್ತಿಕ ಕಾಮಗಾರಿಗಳಿಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ. ಸೋಮಶೇಖರ್ ತಿಳಿಸಿದರು.
ಚಿತ್ರದುರ್ಗ ತಾಲ್ಲೂಕಿನ ಮಾಡನಾಯಕನಹಳ್ಳಿ ಗ್ರಾಮ ಪಂಚಾಯಿತಿಗೆ ಬುಧವಾರ ಭೇಟಿ ನೀಡಿ, ಪರಿಶೀಲನೆ ನಡೆಸಿ, ಅವರು ಮಾತನಾಡಿದರು.
ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ಬಗ್ಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಸಹಾಯಕ ಇಂಜಿನಿಯರ್ ಅವರಿಂದ ಮಾಹಿತಿ ಪಡೆದ ಜಿ.ಪಂ ಸಿಇಒ, ನರೇಗಾ ಜಾಬ್‍ಕಾರ್ಡ್ ಹೊಂದಿರುವ ಅರ್ಹ ಬಡ ಕುಟುಂಬಗಳಿಗೆ ಉದ್ಯೋಗ ಒದಗಿಸಿ, ವೈಯಕ್ತಿಕ ಕಾಮಗಾರಿಗಳಿಗೆ ಆದ್ಯತೆ ನೀಡಬೇಕು. ಗ್ರಾಮಗಳಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡಿಕೊಳ್ಳಲು ಸಾರ್ವಜನಿಕರು ಸಹಕರಿಸಬೇಕು ಎಂದು ತಿಳಿಸಿದರು.
ನಂತರ ಮಾಡನಾಯಕನಹಳ್ಳಿ ಗ್ರಾಮ ಪಂಚಾಯತ್ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರೊಂದಿಗೆ ಗ್ರಾಮಗಳ ಅಭಿವೃದ್ಧಿ ಬಗ್ಗೆ ಸಂವಾದ ನಡೆಸಿದರು. ಬಹುಮುಖ್ಯವಾಗಿ ಕುಡಿಯುವ ನೀರಿನ ಸಮಸ್ಯೆಗಳೇನಾದರೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇದೆಯಾ ಎಂದು ಜಿ.ಪಂ ಸಿಇಒ ಕೇಳಿದಾಗ, ಸಾರ್ವಜನಿಕರು ಪಂಚಾಯಿತಿ ವ್ಯಾಪ್ತಿಯಲ್ಲಿ ಯಾವುದೇ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ತಿಳಿಸಿದರು.
ಗ್ರಂಥಾಲಯ, ಅಂಗನವಾಡಿ ಕೇಂದ್ರ, ಕರವಸೂಲಾತಿ ಮತ್ತು 15ನೇ ಹಣಕಾಸು ಆಯೋಗ ಬಗ್ಗೆ, ಮಾಹಿತಿ ಪಡೆದು, ಇ-ಸ್ವತ್ತುಗಳನ್ನು ಸಕಾಲದಲ್ಲಿ ಸಾರ್ವಜನಿಕರಿಗೆ ವಿತರಿಸುವಂತೆ ಸಿಇಒ ಸೂಚಿಸಿದರು.
ಈ ಸಂದರ್ಭದಲ್ಲಿ ಚಿತ್ರದುರ್ಗ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರವಿಕುಮಾರ್, ಸಹಾಯಕ ನಿರ್ದೇಶಕ (ನರೇಗಾ) ಯರ್ರಿಸ್ವಾಮಿ, ಮಾಡನಾಯಕನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿ ಇದ್ದರು.