ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಈಗಾಗಲೇ ಮಳೆಯಾಗಿದ್ದು, ತಡರಾತ್ರಿ ಅಥವಾ ಇಂದು ಮುಂಜಾನೆ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆ ಬೀಳುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆ ಬೀಳುವ ಮುನ್ಸೂಚನೆ ಇದೆ. ಮುಂದಿನ 10 ದಿನಗಳವರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಇಲಾಖೆ ತಿಳಿಸಿದೆ.
ಆರಂಜ್ ಅಲರ್ಟ್?: ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಹಾವೇರಿ, ಬಳ್ಳಾರಿ, ಧಾರವಾಡ, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ಹಾಸನ, ದಾವಣಗೆರೆ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ ಹಾಗೂ ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

