ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದಲ್ಲಿ ಮುಂದಿನ 5 ದಿನಗಳ ಕಾಲ ಗುಡುಗು, ಮಿಂಚು, ಸಿಡಿಲು ಮತ್ತು ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಕರ್ನಾಟಕ ಹವಮಾನ ಇಲಾಖೆ ಮಾಹಿತಿ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಈಗಾಗಲೇ ರೂಪುಗೊಂಡಿರುವ ಚಂಡಮಾರುತದ ಪರಿಚಲನೆಯು ಮರಾಠವಾಡ ಪ್ರದೇಶದಿಂದ ಕರ್ನಾಟಕ ಮತ್ತು ತಮಿಳುನಾಡಿನಾದ್ಯಂತ ಮನ್ನಾರ್ ಕೊಲ್ಲಿಯವರೆಗೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ವಿಸ್ತರಿಸುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದ ಹವಾಮಾನದ ಮೇಲೆ ಪ್ರಭಾವ ಬೀರುತ್ತಿದೆ. ಉತ್ತರ ಒಳನಾಡು ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಮತ್ತು ಕರಾವಳಿ ಪ್ರದೇಶಗಳಲ್ಲಿ ಲಘು ಮಳೆಯಾಗುವ ಮುನ್ಸೂಚನೆ ಇರುವುದರಿಂದ ಬೆಂಗಳೂರಿನಲ್ಲಿ ಆಹ್ಲಾದಕರ ಹವಾಮಾನವಿರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಮತ್ತು ಎಚ್ಚರಿಕೆಗಳನ್ನು ನೀಡಿದೆ.
ರಾಜ್ಯದಾದ್ಯಂತ ಮುಂದಿನ 5 ದಿನಗಳವರೆಗೆ ಅಲ್ಲಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದ್ದು, ಗಾಳಿಯ ವೇಗ ಗಂಟೆಗೆ 40-60 ಕಿಮೀ ತಲುಪುವ ಸಾದ್ಯತೆ ಇದೆ ಎಂದು ಹೇಳಿದೆ. ಅಂತೆಯೇ ಹಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಕರ್ನಾಟಕದ ಒಳನಾಡಿನ ವಿಜಯನಗರ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಹಾಸನ, ಮಂಡ್ಯ, ಮೈಸೂರು, ಬೆಂಗಳೂರು, ರಾಮನಗರ, ಚಾಮರಾಜನಗರಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದ್ದು, ಕೋಲಾರದ ಮುಳಬಾಗಿಲು, ಬಂಗಾರಪೇಟೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಅಂತೆಯೇ ಚಿತ್ರದುರ್ಗದ ಹೊಳಲ್ಕೆರೆ, ಚಳ್ಳಕೆರೆ, ಹಿರಿಯೂರು ಮತ್ತು ಹೊಸದುರ್ಗದಲ್ಲಿ ಚದುರಿದಂತೆ ಮಳೆಯಾಗಲಿದ್ದು, ಚಿತ್ರದುರ್ಗ ನಗರದಲ್ಲಿ ಒಣಹವೆ ಮುಂದುವರೆಯಲಿದೆ ಎನ್ನಲಾಗಿದೆ. ಉಳಿದಂತೆ ಉತ್ತರ ಕರ್ನಾಟಕ ಗದಗ, ಕೊಪ್ಪಳ, ಬಳ್ಳಾರಿ, ಹಾವೇರಿ ಯಲ್ಲಿ ಸಾಧಾರಣ ಮಳೆ ಜೊತೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಆಲಿಕಲ್ಲು ಮಳೆ-
ಬೆಂಗಳೂರು ಮತ್ತು ಅದರ ಸುತ್ತಮುತ್ತ ಪ್ರದೇಶಗಳಲ್ಲಿ ಏಪ್ರಿಲ್ 30 ಮತ್ತು ಮೇ 01, 2025 ರಂದು ಅಲ್ಲಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.