ಸಿದ್ದರಾಮಯ್ಯನವರ ವಿರುದ್ಧದ ಚುನಾವಣಾ ತಕರಾರು ಅರ್ಜಿ ವಜಾಗೊಳಿಸಿದ ಹೈಕೋರ್ಟ್​

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಶಾಸಕ ಸ್ಥಾನ ಅಸಿಂಧು ಮಾಡುವಂತೆ ಕೋರಿ ಸಲ್ಲಿಸಲಾಗಿದ್ದ ಚುನಾವಣಾ ತಕರಾರು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್​ ವಜಾಗೊಳಿಸಿ ಆದೇಶಿಸಿದೆ.

ಗ್ಯಾರಂಟಿ ಕಾರ್ಡ್‌ಯೋಜನೆಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗಿದೆ. ಹೀಗಾಗಿ ಸಿದ್ದರಾಮಯ್ಯನವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸುವಂತೆ ಮೈಸೂರಿನ ವರುಣ ಹೋಬಳಿಯ ಕೂಡನಹಳ್ಳಿ ಗ್ರಾಮದ ಕೆಎಂ ಶಂಕರ್‌ಅವರು ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.

ಚುನಾವಣಾ ತಕರಾರು ಅರ್ಜಿಯನ್ನು ವಜಾ ಮಾಡುವಂತೆ ಸಿದ್ದರಾಮಯ್ಯ ಪರ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್ ಅವರು ವಾದ ಮಂಡಿಸಿದ್ದರು. ಈ ವಾದವನ್ನು ಆಲಿಸಿದ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ, ಶಂಕರ್‌ಅವರು ಸಲ್ಲಿಸಿದ್ದ ತಕರಾರು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಏನಿದು ತಕರಾರು ಅರ್ಜಿ?

2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ವತಿಯಿಂದ ಗ್ಯಾರಂಟಿ ಕಾರ್ಡ್‌ಯೋಜನೆಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗಿದೆ. ಇದು ಲಂಚಕ್ಕೆ ಸಮವಾಗಿದ್ದು, ಪ್ರಜಾಪ್ರತಿನಿಧಿ ಕಾಯಿದೆ ಸೆಕ್ಷನ್‌123 (1) ಮತ್ತು ಸೆಕ್ಷನ್‌123 (2) ಪ್ರಕಾರ ಮತದಾರರ ಮೇಲೆ ಪ್ರಭಾವ ಬೀರುವ ಯತ್ನವಾಗಿದೆ. ಸೆಕ್ಷನ್‌123 (4)ರ ಪ್ರಕಾರ ಆಮಿಷವೊಡ್ಡಿ ಪ್ರಚಾರ ಮಾಡುವುದೂ ಅಪರಾಧ. ಹಾಗಾಗಿ, ಅಕ್ರಮ ಎಸಗುವ ಮೂಲಕ ವರುಣ ಕ್ಷೇತ್ರದಿಂದ ಸಿದ್ದರಾಮಯ್ಯ ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧು ಗೊಳಿಸಬೇಕು ಎಂದು ಕೆಎಂ ಶಂಕರ್‌ಅವರು ಹೈಕೋರ್ಟ್​ಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಸಿ ಮನವಿ ಮಾಡಿದ್ದರು.

ಕಾಂಗ್ರೆಸ್‌ಮತ್ತು ಅಭ್ಯರ್ಥಿ ಸಿದ್ದರಾಮಯ್ಯ ಅವರು ಪ್ರಕಟಿಸಿದ ಗ್ಯಾರಂಟಿ ಯೋಜನೆಗಳು ಕೊಡುಗೆ ಹಾಗೂ ಭರವಸೆ ಸ್ವರೂಪದ್ದಾಗಿವೆ. ಗ್ಯಾರಂಟಿ ಯೋಜನೆಗಳನ್ನು ಸಿದ್ದರಾಮಯ್ಯ ಅವರ ಸಮ್ಮತಿಯೊಂದಿಗೆ ಪ್ರಕಟಿಸಲಾಗಿದೆ. ಅವು ವರುಣ ಕ್ಷೇತ್ರದಲ್ಲಿ ಕಾಂಗ್ರೆಸ್‌ಅಭ್ಯರ್ಥಿಗೆ ಮತ ಹಾಕಲು ಮತದಾರರನ್ನು ಪ್ರೇರೇಪಿಸಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

ವರುಣಾದಲ್ಲಿ ಜಯಗಳಿಸಿದ್ದ ಸಿದ್ದರಾಮಯ್ಯ!
ಸಿದ್ದರಾಮಯ್ಯ ಅವರು ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧಿಸಿ ಭರ್ಜರಿ ಜಯ ಗಳಿಸಿದ್ದರು. ಬಾದಾಮಿ ಕ್ಷೇತ್ರ ತೊರೆದು ವರುಣಾ ಕ್ಷೇತ್ರದಲ್ಲಿ ಬಂದು ನಿಂತ ಅವರಿಗೆ ಬಿಜೆಪಿಯ ವಿ ಸೋಮಣ್ಣ ಅವರು ಎದುರಾಳಿಯಾಗಿದ್ದರು. ಆದರೆ, ಸಿದ್ದರಾಮಯ್ಯ 46,163 ಮತಗಳಿಂದ ಗೆಲುವು ಸಾಧಿಸಿದ್ದರು. ಸಿದ್ದರಾಮಯ್ಯ ಅವರು 1,19,816 ಮತಗಳನ್ನು ಪಡೆದ್ದರೆ, ಸೋಮಣ್ಣ 73,653 ಮತಗಳನ್ನು ಪಡೆದು ಸೋಲೊಪ್ಪಿಕೊಂಡಿದ್ದರು. ಬಳಿಕ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿ ನಂತರ ಮಖ್ಯಮಂತ್ರಿ ಹುದ್ದೆಗೇರಿದ್ದರು.

 

Share This Article
error: Content is protected !!
";