ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧದ ಸರ್ಕಾರಿ ಜಮೀನು ಒತ್ತುವರಿ ಆರೋಪದ ತನಿಖೆಗೆ ವಿಶೇಷ ತನಿಖಾ ತಂಡ(ಎಸ್ಐಟಿ) ರಚಿಸಿದ್ದ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಗುರುವಾರ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿದೆ.
ತಮ್ಮ ವಿರುದ್ಧದ ಸರ್ಕಾರಿ ಜಮೀನು ಒತ್ತುವರಿ ಆರೋಪದ ಬಗ್ಗೆ ಎಸ್ಐಟಿ ತನಿಖೆ ಪ್ರಶ್ನಿಸಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ನೇತೃತ್ವದ ಪೀಠ ಈ ಆದೇಶ ನೀಡಿದೆ.
ಕಾನೂನುಬಾಹಿರವಾಗಿ ಸರ್ಕಾರಿ ಅಧಿಸೂಚನೆಯಿಲ್ಲದೆ ಎಸ್ಐಟಿ ರಚನೆ ಮಾಡಿದ್ದು ತಪ್ಪು ಎಂದು ಕುಮಾರಸ್ವಾಮಿ ತಮ್ಮ ಅರ್ಜಿಯಲ್ಲಿ ವಾದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತೆಗೆದುಕೊಂಡ ಎಲ್ಲಾ ಕ್ರಮಗಳನ್ನು ಅನೂರ್ಜಿತ ಎಂದು ಘೋಷಿಸಬೇಕೆಂದು ನ್ಯಾಯಾಲಯಕ್ಕೆ ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ.
ಕೇಂದ್ರ ಸಚಿವ ಕುಮಾರಸ್ವಾಮಿ ಪರವಾಗಿ ಹಿರಿಯ ವಕೀಲರಾದ ಉದಯ್ ಹೊಳ್ಳ ಮತ್ತು ಎನ್.ವಿ. ನಿಶಾಂತ್ ಅವರು ಹೈಕೋರ್ಟ್ ನಲ್ಲಿ ವಾದ ಮಂಡಿಸಿದರು.
ಬೆಂಗಳೂರು ಹೊರ ವಲಯದ ಬಿಡದಿ ಪಟ್ಟಣದ ಬಳಿಯ ಕೇತಗಾನಹಳ್ಳಿ ಗ್ರಾಮದಲ್ಲಿ ಭೂಕಬಳಿಕೆ ಆರೋಪದ ತನಿಖೆ ನಡೆಸಲು ಕರ್ನಾಟಕ ಸರ್ಕಾರ ಜನವರಿಯಲ್ಲಿ ಎಸ್ಐಟಿ ರಚಿಸಿತ್ತು. ಪ್ರಕರಣದಲ್ಲಿ ಆರು ಎಕರೆ ಅತಿಕ್ರಮಣವನ್ನು ತೆರವುಗೊಳಿಸಲು ತಹಶೀಲ್ದಾರ್ ಆದೇಶ ನೀಡಿದ್ದರು. ಸರ್ಕಾರವು ಹಿರಿಯ ಐಎಎಸ್ ಅಧಿಕಾರಿ ಆಮ್ಲಾನ್ ಆದಿತ್ಯ ಬಿಸ್ವಾಸ್ ಅವರನ್ನು ಎಸ್‌ಐಟಿ ಮುಖ್ಯಸ್ಥರನ್ನಾಗಿ ನೇಮಿಸಿ ಆದೇಶಿಸಿತ್ತು.
ಕೇತಗಾನಹಳ್ಳಿ ಗ್ರಾಮದ ಸರ್ವೆ ಸಂಖ್ಯೆ 8, 9, 10, 16 ಮತ್ತು 79 ರಲ್ಲಿ 14.04 ಎಕರೆ ಸರ್ಕಾರಿ ಭೂಮಿಯನ್ನು ಅತಿಕ್ರಮಣ ಮಾಡಿರುವ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.
ಕಳೆದ ಜನವರಿ 28 ರಂದು ಎಸ್‌ಐಟಿ ರಚನೆಯ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಮೂರು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಲು ಸೂಚಿಸಲಾಗಿದೆ.
ಸುಮಾರು 14 ಎಕರೆ ಸರ್ಕಾರಿ ಭೂಮಿಯನ್ನು ಅತಿಕ್ರಮಣ ಮಾಡಿರುವ ಆರೋಪವನ್ನು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಸ್ಪಷ್ಟವಾಗಿ ತಳ್ಳಿಹಾಕಿದ್ದು, ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರ, ತಮ್ಮ ಮೇಲೆ ದಾಳಿ ಮಾಡಲು ಯತ್ನಿಸುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದರು.
ನಾನು ಯಾವುದೇ ತನಿಖೆ ಎದುರಿಸಲು ಸಿದ್ಧನಿದ್ದೇನೆ. ಆ ಭೂಮಿ ನನ್ನ ಆಸ್ತಿ ಎಂದು ಸಾಬೀತುಪಡಿಸಲು ನನ್ನ ಬಳಿ ಎಲ್ಲಾ ದಾಖಲೆಗಳಿವೆ. ರಾಜ್ಯ ಸರ್ಕಾರ ಉದ್ದೇಶಪೂರ್ವಕವಾಗಿ ವಿವಾದಿತ ಕೇತಗಾನಹಳ್ಳಿ ಭೂಮಿಯ ಸಮೀಕ್ಷೆ ನಡೆಸುತ್ತಿದೆ ಎಂದು ಕುಮಾರಸ್ವಾಮಿ ದೂರಿದ್ದರು.