ಚಂದ್ರವಳ್ಳಿ ನ್ಯೂಸ್, ತುಮಕೂರು:
ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಸೆಪ್ಟೆಂಬರ್ ೧೪ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
ಸಚಿವರು ಅಂದು ಬೆಳಿಗ್ಗೆ ೧೦.೩೦ ಗಂಟೆಗೆ ತುಮಕೂರು ನಗರದ ಎಸ್.ಮಾಲ್ ಬಳಿ ಸೇತುವೆ ಪುನರ್ ನಿರ್ಮಾಣ ಕಾಮಗಾರಿ ಹಾಗೂ ಬೆಳಿಗ್ಗೆ ೧೧ ಗಂಟೆಗೆ ಜಿಲ್ಲೆಯ ಶ್ರೀ ಸಿದ್ಧಗಂಗಾ ಮಠದ ಆವರಣದಲ್ಲಿರುವ ಯಾತ್ರಿ ನಿವಾಸದ ಪಕ್ಕದಲ್ಲಿ ಭಕ್ತಾಧಿಗಳಿಗೆ ಮತ್ತು ಗಣ್ಯ ವ್ಯಕ್ತಿಗಳಿಗೆ ತಂಗಲು ಅತಿಥಿ ಗೃಹ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆಗೆ ಚಾಲನೆ ನೀಡಲಿದ್ದಾರೆ.
ಶ್ರೀ ಸಿದ್ಧಗಂಗಾ ಮಠದ ಅಧ್ಯಕ್ಷರಾದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ದಿವ್ಯ ಸಾನಿಧ್ಯ, ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ಹಾಗೂ ಸಂಸದ ವಿ. ಸೋಮಣ್ಣ ಅವರ ಘನ ಉಪಸ್ಥಿತಿಯಲ್ಲಿ ಕಾರ್ಯಕ್ರಮಗಳು ನೆರವೇರಲಿವೆ.
ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅಧ್ಯಕ್ಷತೆವಹಿಸುವರು. ಮುಖ್ಯ ಅತಿಥಿಗಳಾಗಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಸಹಕಾರ ಸಚಿವ ಕೆ.ಎನ್.ರಾಜಣ್ಣ, ನವದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ.ಜಯಚಂದ್ರ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಸೇರಿದಂತೆ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು, ಗಣ್ಯರು ಭಾಗವಹಿಸುವರು.