ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗ್ಯಾರೆಂಟಿಗಳಿಂದ ಅಭಿವೃದ್ಧಿಗೆ ಹಿನ್ನೆಡೆ ಆಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರು ಹೇಳಿರುವುದು ಕಾಂಗ್ರೆಸ್ ಸರ್ಕಾರದ ಅವೈಜ್ಞಾನಿಕ ನೀತಿಗಳು ರಾಜ್ಯವನ್ನ ಯಾವ ಅಧೋಗತಿಗೆ ತಳ್ಳಿದೆ ಎನ್ನುವುದಕ್ಕೆ ಮತ್ತೊಮ್ಮೆ ಕನ್ನಡಿ ಹಿಡಿದಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.
ಹೇಗಾದರೂ ಮಾಡಿ ಅಧಿಕಾರ ಹಿಡಿಯಬೇಕು ಎನ್ನುವ ಹಪಹಪಿಯಿಂದ ಬೇಕಾಬಿಟ್ಟಿ ಗ್ಯಾರೆಂಟಿ ಯೋಜನೆಗಳನ್ನು ಮಾಡಿದ ಕರ್ನಾಟಕ ಕಾಂಗ್ರೆಸ್ ಪಕ್ಷಕ್ಕೆ ಈಗ ಗ್ಯಾರೆಂಟಿಗಳು ಬಿಸಿ ತುಪ್ಪವಾಗಿದೆ.
ಸಿಎಂ ಸಿದ್ದರಾಮಯ್ಯ ಸರ್ಕಾರ ಪಾಪರ್ ಆಗಿದೆ ಎನ್ನುವ ಕೂಗು ಕಾಂಗ್ರೆಸ್ ಪಕ್ಷದಲ್ಲೇ ಏಳುತ್ತಿದ್ದು ಈ ಹಿಂದೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ್ ಖರ್ಗೆ ಅವರೇ “ಸರ್ಕಾರದ ಬಳಿ ರಸ್ತೆಗೆ ಒಂದು ಬುಟ್ಟಿ ಮಣ್ಣು ಹಾಕಲೂ ದುಡ್ಡಿಲ್ಲ” ಎಂದು ಒಪ್ಪಿಕೊಂಡಿದ್ದರು.
ಸಿಎಂ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಅವರು “ರಸ್ತೆ ಬೇಕು ಅಂದರೆ ಗ್ಯಾರೆಂಟಿ ಸ್ಕೀಮ್ ಬಂದ್ ಮಾಡಬೇಕಾಗುತ್ತದೆ” ಎಂದು ಹೇಳಿದ್ದರು.
ಈಗ ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ಶಾಸಕರು, ಮಾಜಿ ಸಚಿವರಾದ ಆರ್.ವಿ ದೇಶಪಾಂಡೆ ಅವರು “ನಾನು ಮುಖ್ಯಮಂತ್ರಿ ಆಗಿದ್ದರೆ ಗ್ಯಾರೆಂಟಿ ಯೋಜನೆಗಳನ್ನು ಜಾರಿ ಮಾಡುತ್ತಿರಲಿಲ್ಲ” ಎಂದು ಹೇಳಿರುವುದು ಸಿಎಂ ಸಿದ್ದರಾಮಯ್ಯ ಅವರು ಎಷ್ಟು ಅಸಮರ್ಥ ಮುಖ್ಯಮಂತ್ರಿ ಎನ್ನುವುದನ್ನ ಮತ್ತೊಮ್ಮೆ ಸಾಬೀತು ಮಾಡಿದೆ.
ಇನ್ನೆಷ್ಟು ದಿನ ಈ ಭಂಡ ಬಾಳು ಸಿದ್ದರಾಮಯ್ಯನವರೇ? ಸಾಕು ನಿಮ್ಮ ದುರಾಡಳಿತ. ರಾಜೀನಾಮೆ ಕೊಟ್ಟು ಕರ್ನಾಟಕವನ್ನು ಉಳಿಸಿ ಎಂದು ಅಶೋಕ್ ತಾಕೀತು ಮಾಡಿದ್ದಾರೆ.

