ನಾನು ಬಿಜೆಪಿ – ಜೆಡಿಎಸ್ ಷಡ್ಯಂತ್ರಕ್ಕೆ ಹೆದರಲ್ಲ- ಸಿದ್ದರಾಮಯ್ಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಜನತೆ ನನ್ನ ಜೊತೆಗೆ ಇರುವವರೆಗೂ ನಾನು ಬಿಜೆಪಿ – ಜೆಡಿಎಸ್ ಷಡ್ಯಂತ್ರಕ್ಕೆ ಹೆದರಲ್ಲ. ಎಲ್ಲಾ ಷಡ್ಯಂತ್ರವನ್ನು ಸೋಲಿಸುತ್ತೇನೆ. ಅವರ ಆಟಗಳಿಗೆ ಜಗ್ಗಲ್ಲ, ಬಗ್ಗಲ್ಲ. ಸಾಮಾಜಿಕ ನ್ಯಾಯದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ.

ವರುಣಾ ಜನರ ಆಶೀರ್ವಾದದಿಂದ ಎರಡು ಬಾರಿ ಸಿಎಂ‌ಆಗಿದ್ದೇನೆ. ವರುಣಾ ನಮ್ಮ ಪಕ್ಷದ ಭದ್ರಕೋಟೆ. ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಗಿಂತ ಹೆಚ್ಚು ಮತ ಕೊಟ್ಟಿದ್ದೀರಿ. ನನಗೆ ವಿಶೇಷವಾಗಿ ಆಶೀರ್ವಾದ ಮಾಡಿದ್ದಕ್ಕಾಗಿ ಕ್ಷೇತ್ರದ ಮತದಾರರಿಗೆ ಅನಂತ ಅನಂತ ಧನ್ಯವಾದಗಳು.

 ವರುಣಾ ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಅನುದಾನ ಕೊಡಲಾಗುತ್ತಿದೆ. ನಾನು ಉಪಕಾರ ಮಾಡುತ್ತಿಲ್ಲ. ಕ್ಷೇತ್ರದ ಪ್ರತಿನಿಧಿಯಾಗಿ ಅಭಿವೃದ್ಧಿ ಮಾಡುವ ನನ್ನ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದೇನೆ, ಜನರ ಋಣ ತೀರಿಸುತ್ತಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ 501.81 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಹಲವಾರು ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಮಾತನಾಡಿದರು.

ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೆಲ್ಲಾ ವರುಣ ಕ್ಷೇತ್ರ ಮಾತ್ರವಲ್ಲದೆ ರಾಜ್ಯದ ಎಲ್ಲ ಬಡವರಿಗೆ ಆರ್ಥಿಕ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಹತ್ತು ಹಲವು ಭಾಗ್ಯಗಳನ್ನು ಕೊಡುವ ಜೊತೆಗೆ ಹಲವು ನಿಗಮಗಳ ಸಾಲ ಮನ್ನಾ ಮಾಡಿದ್ದೇನೆ. ಅಂಬೇಡ್ಕರ್ ಅವರ ಆಶಯದಂತೆ ಬಡವರಿಗೆ ಆರ್ಥಿಕ‌ಶಕ್ತಿ ಕೊಡುವ ಕಾರ್ಯಕ್ರಮ ರೂಪಿಸಿ ಜಾರಿ ಮಾಡಿದ್ದೇನೆ.

ಎರಡನೇ ಬಾರಿ ಮುಖ್ಯಮಂತ್ರಿ ಆದಾಗಲೂ ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ, ಮಧ್ಯಮ ವರ್ಗದವರ ಬದುಕಿಗೆ ಆಸರೆ ಆಗುವ ಐದೂ ಗ್ಯಾರಂಟಿ ಯೋಜನೆಗಳನ್ನು ರೂಪಿಸಿ ಜಾರಿ ಮಾಡಿದ್ದೇವೆ. ಪ್ರತೀ ವರ್ಷ ಈ ಗ್ಯಾರಂಟಿಗಳ ಮೂಲಕ 56 ಸಾವಿರ ಕೋಟಿ ರೂಪಾಯಿಗಳನ್ನು ಜನರ ಖಾತೆಗೆ ನೇರವಾಗಿ ಹಾಕುತ್ತಿದ್ದೇವೆ. ಹೀಗೆ ದೇಶದಲ್ಲಿ ನುಡಿದಂತೆ ನಡೆದುಕೊಂಡಿರುವ ಪಕ್ಷ ನಿಮ್ಮ ಪಕ್ಷ – ನಮ್ಮ ಪಕ್ಷವಾಗಿದೆ.

ಕೇಂದ್ರದಲ್ಲಿರುವ ನರೇಂದ್ರ ಮೋದಿ ಅವರ ಸರ್ಕಾರವಾಗಲಿ, ರಾಜ್ಯದಲ್ಲಿದ್ದ ಯಡಿಯೂರಪ್ಪ, ಬೊಮ್ಮಾಯಿ, ಕುಮಾರಸ್ವಾಮಿ ಜನರ ಕಲ್ಯಾಣ ಮಾಡದೆ ಲೂಟಿ ಮಾಡಿದರು.

 ಬಿಜೆಪಿ ಸಾಮಾಜಿಕ ನ್ಯಾಯದ ವಿರೋಧಿ. ಬಡವರ ವಿರೋಧಿ. ಮೂರು ಬಾರಿ ಪ್ರಧಾನಿ ಆಗಿರುವ ನರೇಂದ್ರ ಮೋದಿ ಅವರು ಕೊಟ್ಟ ಮಾತಿನಂತೆ ನಡೆದ ಉದಾಹರಣೆ ಇದೆಯಾ? ಇಷ್ಟು ವರ್ಷ ಪ್ರಧಾನಿಯಾಗಿ ಮೋದಿ ಬಡಪರ ಪರವಾಗಿ ಒಂದೇ ಒಂದು ಯೋಜನೆ ಜಾರಿ ಮಾಡಿದ್ದಾರಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ಕಟ್ಟುವವರು ನಾವು. ನಾವು ನಮ್ಮ ಪಾಲಿನ ತೆರಿಗೆ ಪಡೆಯಲು ಭಿಕ್ಷೆ ಬೇಡಬೇಕಾ? ಮೊನ್ನೆ ಉತ್ತರ ಪ್ರದೇಶ, ಬಿಹಾರ ರಾಜ್ಯಗಳಿಗೆ ಅತಿ ಹೆಚ್ಚು ತೆರಿಗೆ ಪಾಲು ಕೊಟ್ಟಿರುವ ನರೇಂದ್ರ ಮೋದಿ ಸರ್ಕಾರವು ರಾಜ್ಯಕ್ಕೆ ಮಾತ್ರ ಕೇವಲ 6,000 ಕೋಟಿ ಕೊಟ್ಟು ಭಯಂಕರ ಅನ್ಯಾಯ ಮಾಡಿದೆ. ಇದನ್ನು ಸಹಿಸಲು ಸಾಧ್ಯವಿಲ್ಲ.

ಈ ಅನ್ಯಾಯದ ವಿರುದ್ಧ ದೆಹಲಿಗೇ ಹೋಗಿ ನಾವು ಪ್ರತಿಭಟನೆ ಮಾಡಿದೆವು. ಬಿಜೆಪಿ-ಜೆಡಿಎಸ್‌ನ ಒಬ್ಬೇ ಒಬ್ಬ ಲೋಕಸಭಾ ಸದಸ್ಯ ರಾಜ್ಯದ ಪಾಲನ್ನು ಕೇಳುವ ಧೈರ್ಯ ಮಾಡಿಲ್ಲ. ಮಾಡುವುದೂ ಇಲ್ಲ. ಆದ್ದರಿಂದ ಕೇಂದ್ರದ ದ್ರೋಹದ ವಿರುದ್ಧ ರಾಜ್ಯದ ಜನತೆ ಮಾತನಾಡಬೇಕು.

ರಾಜ್ಯಕ್ಕೆ 5,495 ಕೋಟಿ ವಿಶೇಷ ಅನುದಾನದ ಜೊತೆಗೆ ನೀರಾವರಿ ಯೋಜನೆಗೆ ಅನುದಾನ ನೀಡಲು ಹಣಕಾಸು ಆಯೋಗ ಮಾಡಿದ್ದ ಶಿಫಾರಸ್ಸನ್ನು ನಿರ್ಮಲಾ ಸೀತಾರಾಮನ್ ತಿರಸ್ಕರಿಸಿದರು. ರಾಜ್ಯದ ಫೆರಿಫೆರಲ್ ರಸ್ತೆಗೆ, ಕೆರೆಗಳ ಅಭಿವೃದ್ಧಿಗೆ 3 ಸಾವಿರ ಕೋಟಿ ಕೊಡ್ತೀವಿ ಎಂದು ಘೋಷಿಸಿದರು. ಆದರೆ ನಯಾಪೈಸೆ ಕೊಡಲಿಲ್ಲ. ಈ ಅನ್ಯಾಯಗಳ ವಿರುದ್ಧ ರಾಜ್ಯದ ಜನತೆ ಮಾತನಾಡಿದರೆ ತಪ್ಪಾ, ನಾವು ಪ್ರತಿಭಟಿಸಿದರೆ ತಪ್ಪಾ?

 ಲೋಕಸಭಾ ಚುನಾವಣೆ ಬಳಿಕ ನಮ್ಮ ಗ್ಯಾರಂಟಿ ಯೋಜನೆಗಳು ಬಂದ್ ಆಗುತ್ತವೆ ಎಂದು ದೆಹಲಿಯ ನರೇಂದ್ರ ಮೋದಿಯಿಂದ, ಇಲ್ಲಿನ ಆರ್.ಅಶೋಕ್ ವರೆಗೂ ಸುಳ್ಳುಗಳ ಮೇಲೆ ಸುಳ್ಳು ಹೇಳಿದರು. ಇದುವರೆಗೂ ಗ್ಯಾರಂಟಿಗಳು ನಿಂತಿಲ್ಲ, ನಿಲ್ಲುವುದೂ ಇಲ್ಲ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ನಿಲ್ಲಲ್ಲ.‌ನಾನು ಮಂತ್ರಿಯಾಗಿ 45 ವರ್ಷ ಆಯ್ತು. ನನ್ನ ಮೇಲೆ ಸಣ್ಣ ಕಪ್ಪುಚುಕ್ಕೆ ಇಲ್ಲ. ಹಿಂದುಳಿದ ವರ್ಗದ ನಾನು ಎರಡು ಬಾರಿ ಸಿಎಂ ಆದೆ ಅಂತ ಬಿಜೆಪಿಗೆ ಹೊಟ್ಟೆಕಿಚ್ಚು. ಇದನ್ನು ನೀವು ಸಹಿಸ್ತೀರಾ? ಎಂದು ಸಿಎಂ ಸಾರ್ವಜನಿಕರನ್ನು ಪ್ರಶ್ನಿಸಿದರು.

ನಾನು ಎರಡು ಬಾರಿ ಸಿಎಂ ಆಗಿ ಮೈಸೂರಲ್ಲಿ ಒಂದೂ ಮನೆ ಇಲ್ಲ. ಮರಿಸ್ವಾಮಿ ಮನೇಲಿ ಇದೀನಿ. ಕುವೆಂಪು ರಸ್ತೇಲಿ 3 ವರ್ಷದಿಂದ ಮನೆ ಕಟ್ಟುತ್ತಲೇ ಇದ್ದೀನಿ. ಇದುವರೆಗೂ ಪೂರ್ತಿ ಆಗಿಲ್ಲ. ನನಗೆ ವರ್ಚಸ್ಸು ಕೊಡುವವರು ನೀವು. ನಿಮ್ಮ ಎದುರಿಗೆ ಪ್ರಾಮಾಣಿಕವಾಗಿ ಇದ್ದೇನೆ.

ನೀವೇ ನನ್ನ ಮಾಲೀಕರು. ನೀವೇ ನನ್ನ ಯಜಮಾನರು. ನಿಮ್ಮ ಆಶೀರ್ವಾದವೇ ನನಗೆ ಶ್ರೀರಕ್ಷೆ. ಬಿಜೆಪಿ-ಜೆಡಿಎಸ್ ನಾಯಕರ ಹೊಟ್ಟೆಕಿಚ್ಚಿನಿಂದ ನನ್ನ ವರ್ಚಸ್ಸು ಕಡಿಮೆ ಆಗಲ್ಲ. ನನ್ನ ವರ್ಚಸ್ಸು ವರುಣಾ ಜನತೆ, ನನ್ನ ವರ್ಚಸ್ಸು ರಾಜ್ಯದ ಜನತೆ ಎಂದು ತಿಳಿಸಿದರು.

 

- Advertisement -  - Advertisement -  - Advertisement - 
Share This Article
error: Content is protected !!
";