ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಿಜೆಪಿ ನಾಯಕಿ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕೈಗೆ ರಕ್ತ ಅಂಟಿದೆ ಎಂದು ಶನಿವಾರ ಟೀಕಿಸಿದ್ದಾರೆ.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಸಚಿವೆ, ಜೂನ್ 4 ರಂದು ನಡೆದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದು, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ನೇರ ಹೊಣೆ. ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದರು.
ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ ಮತ್ತು ಇತರ ನಾಲ್ವರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಕ್ಕಾಗಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಶೋಭಾ ಕರಂದ್ಲಾಜೆ, ಸತ್ಯ ಹೊರಬರಲು ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಘಟನೆಯ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಮತ್ತು ಪಕ್ಷದ ನಾಯಕ ರಾಹುಲ್ ಗಾಂಧಿಯವರ ಮೌನವನ್ನು ಪ್ರಶ್ನಿಸಿದ ಶೋಭಾ ಕರಂದ್ಲಾಜೆ, ಧಮ್ ಇದ್ದರೆ ಸಿಎಂ ಮತ್ತು ಉಪಮುಖ್ಯಮಂತ್ರಿ ರಾಜೀನಾಮೆ ಪಡೆಯಲಿ ಎಂದು ಸವಾಲು ಹಾಕಿದರು.
ಕಾಲ್ತುಳಿತದಲ್ಲಿ ಮಕ್ಕಳನ್ನು ಕಳೆದುಕೊಂಡ ಪೋಷಕರು ಕಣ್ಣೀರು ಹಾಕ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕೈಯಲ್ಲಿ ರಕ್ತ ಅಂಟಿದೆ. ತಮ್ಮ ಕೈಯಲ್ಲಿರುವ ರಕ್ತವನ್ನು ಪೊಲೀಸರ ಮೂತಿಗೆ ಒರೆಸ್ತಿದ್ದಾರೆ. ಒಬ್ಬ ಪ್ರಾಮಾಣಿಕ ಕಮಿಷನರ್ ಅನ್ನು ಸಸ್ಪೆಂಡ್ ಮಾಡಿದ್ದಾರೆ. ಬೆಂಗಳೂರಿನ ಇತಿಹಾಸದಲ್ಲೇ ಇದೊಂದು ಕಪ್ಪು ಚುಕ್ಕೆ ಎಂದು ಶೋಭಾ ಕರಂದ್ಲಾಜೆ ಕಿಡಿಕಾರಿದರು.
ಆರ್ಸಿಬಿ ಸೆಲೆಬ್ರೇಷನ್ ಅನ್ನು ಹೆಣದ ಮೇಲೆ ಕಾಂಗ್ರೆಸ್ ಸರ್ಕಾರದವರು ಮಾಡಿದ್ದಾರೆ. ಒಬ್ಬ ಜವಾಬ್ದಾರಿಯುತ ಸರ್ಕಾರ ಈ ರೀತಿ ನಡೆದುಕೊಳ್ಳುತ್ತಾ ಎಂದು ಕೇಂದ್ರ ಸಚಿವೆ ಪ್ರಶ್ನೆ ಮಾಡಿದರು.
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಹೊರತುಪಡಿಸಿ ಬೇರೆ ನಾಯಕರಿಂದ ದಿವಾಳಿಯಾಗಿದೆಯೇ? ಈ ಇಬ್ಬರೂ ತನಿಖೆ ಎದುರಿಸಲಿ. ಇತರರನ್ನು ಸಿಎಂ ಮತ್ತು ಉಪಮುಖ್ಯಮಂತ್ರಿಗಳನ್ನಾಗಿ ಮಾಡಲಿ. ಎಲ್ಲದಕ್ಕೂ ರಾಜ್ಯಕ್ಕೆ ಬರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಈಗ ಎಲ್ಲಿ ಅಡಗಿಕೊಂಡಿದ್ದಾರೆ? ಎಂದು ಶೋಭಾ ಕರಂದ್ಲಾಜೆ ತೀಕ್ಷ್ಣವಾಗಿ ಪ್ರಶ್ನಿಸಿದರು.
ದೆಹಲಿ ಹೈಕಮಾಂಡ್ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಎಟಿಎಂ ಆಗಿರುವುದರಿಂದ ಅವರು ಈ ವಿಷಯದ ಬಗ್ಗೆ ಮೌನವಾಗಿದ್ದಾರೆ ಎಂದು ಶೋಭಾ ಕರಂದ್ಲಾಜೆ ಆರೋಪಿಸಿದರು.