ಕುಡಿಯುವ ನೀರಿನ ಅನಗತ್ಯ ಪೋಲು ಮಾಡಿದರೆ ದಂಡ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಂತರ್ಜಲ ಕುಸಿತದಿಂದ ಮುಂಬರುವ ಬೇಸಿಗೆಯಲ್ಲಿ ಎದುರಾಗಬಹುದಾದ ನೀರಿನ ಸಮಸ್ಯೆಯನ್ನು ಸಮರ್ಪಕವಾಗಿ ನಿಭಾಯಿಸುವ ನಿಟ್ಟಿನಲ್ಲಿ ಲಭ್ಯವಿರುವ ಶುದ್ದ ನೀರನ್ನು ಸಮರ್ಪಕವಾಗಿ ಬಳಸುವುದು ಬಹಳ ಮುಖ್ಯವಾಗಿದೆ. ಹಿನ್ನಲೆಯಲ್ಲಿ ಕುಡಿಯುವ ನೀರನ್ನು ಸಾರ್ವಜನಿಕರು ವ್ಯರ್ಥವಾಗಿ ಬಳಸುವುದನ್ನು ತಪ್ಪಿಸಲು, ಕುಡಿಯುವ ನೀರು ಪೋಲು ಮಾಡುವವರ ವಿರುದ್ದ ದಂಡ ವಿಧಿಸಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮುಂದಾಗಿದೆ. ಸಂಬಂಧ ಬೆಂಗಳೂರು ಜಲಮಂಡಳಿಯ ಅಧ್ಯಕ್ಷರಾದ ಡಾ. ರಾಮ್ ಪ್ರಸಾತ್ ಮನೋಹರ್ ಅವರು ಆದೇಶ ಹೊರಡಿಸಿದ್ದಾರೆ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ1964 ಕಲಂ 33 ಮತ್ತು 34 ಅನುಸಾರ ಬೆಂಗಳೂರು ನಗರದಲ್ಲಿ ಕುಡಿಯುವ ನೀರನ್ನು, ವಾಹನಗಳ ಸ್ವಚ್ಚತೆಗೆ, ಕೈದೋಟಕ್ಕೆ, ಕಟ್ಟಡ ನಿರ್ಮಾಣಕ್ಕೆ, ಮನೋರಂಜಕವಾಗಿ ಕಾರಂಜಿಯಂತಹ ಆಕರ್ಷಕ ವ್ಯವಸ್ಥೆಗೆ, ಸಿನಿಮಾ ಮಂದಿರ ಮತ್ತು ಮಾಲುಗಳಲ್ಲಿನ ಕುಡಿಯುವ ನೀರಿನ ಹೊರತು ಇನ್ನಿತರೆ ಬಳಕೆಗೆ, ರಸ್ತೆ ನಿರ್ಮಾಣ ಹಾಗೂ ಸ್ವಚ್ಚತೆಗೆ ಕುಡಿಯುವ ನೀರಿನ ಬಳಕೆಯನ್ನು ಮಾಡುವುದನ್ನು ನಿಷೇಧಿಸಲಾಗಿದೆ.

ಪ್ರಸ್ತುತ ನಗರದಲ್ಲಿ ಪ್ರತಿದಿನ ಉಷ್ಣಾಂಶ ಏರುತ್ತಿದೆ. ಇತ್ತೀಚಿನ ದಿನಗಳಲ್ಲಿ ಮಳೆಯ ಕೊರತೆಯಿಂದ ಅಂತರ್ಜಲ ಕುಸಿತವಾಗಿದ್ದು, ಮುಂದಿನ ಬೇಸಿಗೆಯಲ್ಲಿ ಅಂತರ್ಜಲ ಕುಸಿತದಿಂದ ನೀರಿನ ಅಭಾವ ಎದುರಾಗಬಹುದು ಎಂದು ಐಐಎಸ್ಸ್ಸಿ ವಿಜ್ಞಾನಿಗಳು ತಮ್ಮ ವರದಿಯಲ್ಲಿ ತಿಳಿಸಿದ್ದಾರೆ.

ಈಗಿನಿಂದಲೇ ಸಾರ್ವಜನಿಕರು ಕುಡಿಯುವ ನೀರನ್ನು ಸಮರ್ಪಕವಾಗಿ ಬಳಸುವುದು ಹಾಗೂ ಅನಗತ್ಯವಾಗಿ ಪೋಲು ಮಾಡುವುದನ್ನು ತಡೆಯುವುದು ಆದೇಶದ ಉದ್ದೇಶವಾಗಿದೆ. ಆದೇಶವನ್ನು ಉಲ್ಲಂಘನೆ ಮಾಡುವವರ ವಿರುದ್ಧ ಜಲಮಂಡಳಿಯ ಕಾಯ್ದೆಯ ಕಲಂ 109 ರಂತೆ ರೂ. 5000 ಗಳ ದಂಡ ವಿಧಿಸಲಾಗುವುದು. ಉಲ್ಲಂಘನೆಯು ಮರುಕಳಿಸಿದಲ್ಲಿ ದಂಡ ಮೊತ್ತ ರೂ. 5000 ಜೊತೆಯಾಗಿ ಹೆಚ್ಚುವರಿಯಾಗಿ ಪ್ರತಿದಿನ ರೂ. 500/- ದಂಡ ವಿಧಿಸಲಾಗುವುದು.

ಸಾರ್ವಜನಿಕರು ಮೇಲ್ಕಂಡ ನಿಷೇಧಗಳನ್ನು ಯಾರಾದರೂ ಉಲ್ಲಂಘನೆ ಮಾಡುವುದು ಕಂಡುಬಂದಲ್ಲಿ ಕೂಡಲೇ ಜಲಮಂಡಳಿಯ ಕಾಲ್ ಸೆಂಟರ್ ಸಂಖ್ಯೆ: 1916 ಗೆ ದೂರು ನೀಡಬಹುದಾಗಿದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷರಾದ ಡಾ. ರಾಮ್ ಪ್ರಸಾತ್ ಮನೋಹರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

Share This Article
error: Content is protected !!
";