ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2018 ರಲ್ಲಿ ಸುಪ್ರೀಂ ಕೋರ್ಟ್ ಕಳಸಾ ಬಂಡೂರಿ ಯೋಜನೆಗೆ ಒಪ್ಪಿಗೆ ಸೂಚಿಸಿದೆ. ಈಗಾಗಲೇ ಕಳಸಾ ಬಂಡೂರಿ ಯೋಜನೆಗೆ ಟೆಂಡರ್ ಕರೆದು ಏಜೆನ್ಸಿಗೆ ಒಪ್ಪಿಸಲಾಗಿದೆ. ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ನಾಳೆನೇ ಕಾಮಗಾರಿ ಆರಂಭಿಸಲಾಗುವುದು. ಕೇಂದ್ರ ಸರ್ಕಾರದಿಂದ ಅನುಮತಿ ದೊರೆಯಬೇಕಿದೆ. ಕೇಂದ್ರ ವನ್ಯಜೀವಿ ಮಂಡಳಿಯು ಬೇಗನೆ ಅನುಮತಿ ನೀಡಬೇಕು ಎನ್ನುವುದು ನಮ್ಮ ಒತ್ತಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೂರನೇ ಹಂತದ ಕೃಷ್ಣಾ ಮೇಲ್ದಂಡೆ ಯೋಜನೆ ಕೇಂದ್ರ ಸರ್ಕಾರದಿಂದ ನಿಂತು ಹೋಗಿದೆ. ಕೇಂದ್ರ ಸರ್ಕಾರ ಕೂಡಲೇ ಗೆಜೆಟ್ ನೋಟಿಫಿಕೇಶನ್ ಮಾಡಬೇಕು. ಮೇಕೆದಾಟು ಯೋಜನೆಗೆ ಸಹ ಕೇಂದ್ರ ಸರ್ಕಾರ ಅನುಮತಿ ನೀಡಬೇಕು. ಈಗಾಗಲೇ ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. 65 ಟಿಎಂಸಿ ಕುಡಿಯುವ ನೀರಿನ ಯೋಜನೆ ಇದಾಗಿದೆ ಎಂದು ಸಿಎಂ ತಿಳಿಸಿದರು.
ಭದ್ರಾ ಮೇಲ್ದಂಡೆ ಯೋಜನೆಗೆ ರೂ.5300 ಕೋಟಿ ಕೊಡುತ್ತೇವೆ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಆದರೆ ಯಾವುದೇ ಹಣ ಇದುವರೆಗೂ ನೀಡಿಲ್ಲ. ರಾಷ್ಟ್ರೀಯ ಯೋಜನೆಯಾಗಿ ಮಾಡುತ್ತೇವೆ ಎಂದು ಬಣ್ಣಿಸಿದ್ದರು.

