ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗೋವು‘ ಎಂದರೆ ಸಕಲ ಜೀವರಾಶಿಗಳಿಗೂ ಮಾತೆ. ಹೀಗಾಗಿ ಹಿಂದೂಗಳು ಗೋವನ್ನು ಮಾತೃದೇವತೆಯ ಸ್ಥಾನ ನೀಡಿ ಕಾಮಧೇನು ಎಂದು ಪೂಜಿಸುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಿಳಿಸಿದ್ದಾರೆ.
ಕರ್ನಾಟಕದ ಸಂಸ್ಕೃತಿಯಲ್ಲಿ ಪುಣ್ಯಕೋಟಿಯ ಕಥೆಯ ಹಾಡು ಜಗತ್ತಿನ ಮೂಲೆ ಮೂಲೆಗೂ ಪಸರಿಸಿದೆ. ನಾಡಿದ್ದು ಮಕರ ಸಂಕ್ರಾಂತಿಯಂದು ಗೋ ಮಾತೆಗೆ ಪೂಜೆ ಸಲ್ಲಿಸುವುದು ಹಬ್ಬದ ಆಚರಣೆಯ ಮಹತ್ವದ ಭಾಗ, ಇಂತಹ ಪಾವಿತ್ರ್ಯತೆಯ ಸಂದರ್ಭದಲ್ಲಿ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ರಾಕ್ಷಸಿ ಮನಸ್ಥಿತಿಯ ಪಾಪಿಗಳು ನಿರ್ದಯವಾಗಿ ಹಸುಗಳ ಕೆಚ್ಚಲನ್ನು ಭೀಕರವಾಗಿ ಕತ್ತರಿಸಿರುವುದು ಅತ್ಯಂತ ಹೇಯ, ಅಮಾನುಷ ಹಾಗೂ ಖೂಳ ಕೃತ್ಯವಾಗಿದ್ದು ಇದನ್ನು ಕರ್ನಾಟಕ ಕಾಂಗ್ರೆಸ್ ಅತ್ಯುಗ್ರವಾಗಿ ಖಂಡಿಸಬೇಕು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಗೋ ಸುರಕ್ಷತೆಯ ಬಗ್ಗೆ ತಾತ್ಸಾರ ಧೋರಣೆ ಅನುಸರಿಸುತ್ತಿದೆ. ಮೊನ್ನೆಯಷ್ಟೇ ಗೋಶಾಲೆಗಳನ್ನು ಮುಚ್ಚುವ ನಿರ್ಧಾರವನ್ನು ಪ್ರಕಟಿಸಿದೆ, ಇದೆಲ್ಲವೂ ಗೋ ಭಕ್ಷಕ ಜನರ ಓಲೈಕೆಗಾಗಿ ಅಲ್ಲದೆ ಬೇರೇನೂ ಅಲ್ಲ ಎಂದು ವಿಜಯೇಂದ್ರ ವಾಗ್ದಾಳಿ ಮಾಡಿದ್ದಾರೆ.
ಇರಿಯುವುದು, ಕತ್ತರಿಸುವುದನ್ನು ಕೇಳಿದ್ದೇವೆ, ಆದರೆ ಮಾತೃ ಕೊರತೆ ನೀಗಿಸಲು ಕ್ಷೀರಧಾರೆ ಹರಿಸುವ ಕೆಚ್ಚಲನ್ನೇ ಕತ್ತರಿಸುವಷ್ಟು ಪರಮ ನೀಚ ಕೃತ್ಯಕ್ಕೆ ಇಳಿದಿರುವ ಘಟನೆ ಕರ್ನಾಟಕದ ರಾಜಧಾನಿಯಲ್ಲೇ ನಡೆಯುತ್ತಿದೆ ಎಂದರೆ ಇದರ ಹಿಂದಿರುವ ಕುಮ್ಮಕ್ಕಿನ ಶಕ್ತಿ ಯಾವುದು ಎನ್ನುವುದು ಊಹಿಸಿಕೊಳ್ಳದಷ್ಟು ಕರುನಾಡಿನ ಜನತೆ ಮುಗ್ಧರಲ್ಲ, ಕೃತ್ಯ ನಡೆದಿರುವ ಕ್ಷೇತ್ರ ಯಾರ ಮುಷ್ಠಿಯಲ್ಲಿದೆ, ಈ ರಾಜ್ಯ ಆಳುತ್ತಿರುವವರ ಮನಸ್ಥಿತಿ ಯಾರ ಪರವಿದೆ ಎನ್ನುವುದು ಎಲ್ಲರಿಗೂ ತಿಳಿದ ವಿಚಾರವೇ.
ದಿನದಿಂದ ದಿನಕ್ಕೆ ಹಿಂದೂ ಆಚಾರ -ವಿಚಾರ ಹಾಗೂ ಜನರ ಮೇಲೆ ನಡೆಯುತ್ತಿರುವ ಅಟ್ಟಹಾಸ ಮೇರೆ ಮೀರುತ್ತಿದೆ. ಜನರ ತಾಳ್ಮೆಯ ಕಟ್ಟೆ ಒಡೆಯುವ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಸರ್ಕಾರ ಎಚ್ಚೆತ್ತುಕೊಂಡು ಇಂತಹ ಕೃತ್ಯಗಳ ಹಿಂದಿರುವ ಶಕ್ತಿಯನ್ನು ಬಗ್ಗು ಬಡಿಯದಿದ್ದರೆ ಇದಕ್ಕೆ ಕುಮ್ಮಕ್ಕು ನೀಡುತ್ತಿರುವವರು ಸರ್ಕಾರದೊಳಗಿನ ಶಕ್ತಿಗಳು ಎಂಬ ತೀರ್ಮಾನಕ್ಕೆ ಜನ ಬರಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.