ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಾಮಾನ್ಯವಾಗಿ ರಾಜ್ಯಪಾಲರ ಭಾಷಣ ಸರ್ಕಾರದ ಒಂದು ವರ್ಷದ ಸಾಧನೆ ಮತ್ತು ಮುಂದಿನ ವರ್ಷಕ್ಕೆ ಇರಬೇಕಾದ ಮುನ್ನೋಟದ ಗುರಿಗಳನ್ನು ಒಳಗೊಂಡಿರುತ್ತದೆ. ಆದರೆ ಈ ಕರ್ನಾಟಕ ಕಾಂಗ್ರೆಸ್ ಸರ್ಕಾರ ಕಳೆದ ಒಂದು ವರ್ಷದಿಂದ ಏನನ್ನೂ ಮಾಡಿಲ್ಲ, ಮುಂದೆ ಏನನ್ನಾದರೂ ಮಾಡಲು ಯಾವ ದೂರದೃಷ್ಟಿಯೂ ಹೊಂದಿಲ್ಲ ಎಂಬುದಕ್ಕೆ ರಾಜ್ಯಪಾಲರ ಭಾಷಣವೇ ಸಾಕ್ಷಿ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ಮಾಡಿದ್ದಾರೆ.
ಕಾಂಗ್ರೆಸ್ ಸರ್ಕಾರ ರಾಜ್ಯಪಾಲರ ಭಾಷಣದ ಮೂಲಕ ಸುಳ್ಳು ಹೇಳಿಸಿ, ಅವರ ದಾರಿ ತಪ್ಪಿಸಿದ್ದಲ್ಲದೆ ನಾಡಿನ ಜನರ ದಿಕ್ಕನ್ನೂ ತಪ್ಪಿಸಿದೆ. ರಾಜ್ಯಪಾಲರ ಭಾಷಣ ಕೇಳಿದರೆ ಈ ಸರ್ಕಾರಕ್ಕೆ ಯಾವ ಗೊತ್ತು ಗುರಿಯಿಲ್ಲ ಎಂಬುದಂತು ಸ್ಪಷ್ಟ ಎಂದು ಅಶೋಕ್ ಟೀಕಿಸಿದರು.
ಕನ್ನಡಿಗರನ್ನು ಸಾಲದ ಪ್ರಪಾತಕ್ಕೆ ತಳ್ಳಿದ್ದರ ಬಗ್ಗೆ ಇಂದಿನ ರಾಜ್ಯಪಾಲರ ಭಾಷಣದಲ್ಲಿ ಪ್ರಸ್ತಾಪವೇ ಇಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಕೆಲವು ಯೋಜನೆಗಳನ್ನು ರಾಜ್ಯ ಕರ್ನಾಟಕ ಕಾಂಗ್ರೆಸ್ ಸರ್ಕಾರ ತನ್ನ ಯೋಜನೆಗಳು ಎಂದು ಬಿಂಬಿಸಿಕೊಂಡಿರುವುದೇ ದೊಡ್ಡ ಸಾಧನೆಯಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಯಾವುದೇ ಸರ್ಕಾರಕ್ಕೆ ಪ್ರಮುಖವಾಗಿ ಎರಡು ಆದ್ಯತೆಗಳಿರುತ್ತವೆ. ಒಂದು ಜನಕಲ್ಯಾಣ ಮತ್ತೊಂದು ಅಭಿವೃದ್ಧಿ. ಆದರೆ ಕಾಂಗ್ರೆಸ್ ಸರ್ಕಾರ ಇವೆರಡರ ನಡುವೆ ಸಮತೋಲನ ಸಾಧಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಅಶೋಕ್ ದೂರಿದರು.
ಒಟ್ಟಿನಲ್ಲಿ ನಾನು ನನ್ನ ರಾಜಕೀಯ ಜೀವನದಲ್ಲೇ ಇಷ್ಟೊಂದು ನಿಸ್ಸಾರವಾದ ರಾಜ್ಯಪಾಲರ ಭಾಷಣವನ್ನು ಎಂದೂ ಕೇಳಿರಲಿಲ್ಲ. ಏನನ್ನೂ ಮಾಡದ, ಮಾಡಲಾಗದ ಸರ್ಕಾರವನ್ನು ಆರಿಸಿ ಕಳುಹಿಸಿದ್ದು ಈ ನಾಡಿನ ದೌರ್ಭಾಗ್ಯ ಎಂಬುದು ರಾಜ್ಯಪಾಲರ ಭಾಷಣದಿಂದ ರಾಜ್ಯದ ಜನರಿಗೆ ಇಂದು ಮನವರಿಕೆಯಾಗಿದೆ ಎಂದು ಅಶೋಕ್ ಬೇಸರ ವ್ಯಕ್ತಪಡಿಸಿದರು.

