ಜಾಲಪ್ಪರವರ ಸಾಮಾಜಿಕ ಕಾಳಜಿ ಅನನ್ಯ: ಬೇಳೂರು ಗೋಪಾಲಕೃಷ್ಣ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ರಾಜ್ಯ ರಾಜಕಾರಣದಲ್ಲಿ ಆರ್.ಎಲ್.ಜಾಲಪ್ಪ ಒಂದು ಅನನ್ಯ ಅಧ್ಯಾಯವಾಗಿದ್ದು
, ಅವರ ಸಾಮಾಜಿಕ ಕಾಳಜಿ, ರಾಜಕೀಯ ನಿಲುವುಗಳು ಯುವ ರಾಜಕಾರಣಿಗಳಿಗೆ ದಾರಿದೀಪ ಎಂದು ಸಾಗರ ಕ್ಷೇತ್ರದ ಶಾಸಕ, ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು.

ಇಲ್ಲಿನ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆ ಕ್ಯಾಂಪಸ್‌ನಲ್ಲಿರುವ ದಿವಂಗತ ಆರ್.ಎಲ್.ಜಾಲಪ್ಪ ಅವರ ಸ್ಮೃತಿವನ ಹಾಗೂ ಮ್ಯೂಸಿಯಂಗೆ ಸೋಮವಾರ ಭೇಟಿ ನೀಡಿ ಗೌರವ ನಮನ ಸಲ್ಲಿಸಿದ ಅವರು, ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಯಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

ಜನಪರ ಕಾಳಜಿಯುಳ್ಳ ರಾಜಕಾರಣಿಗಳು ಇಂದಿನ ಅಗತ್ಯವಾಗಿದ್ದು, ಶಿಕ್ಷಣ ಕ್ಷೇತ್ರಕ್ಕೆ ಜಾಲಪ್ಪ ಅವರ ಕೊಡುಗೆ ದೊಡ್ಡದು. ಉತ್ತಮ ವಿದ್ಯಾ ಸಂಸ್ಥೆಗಳನ್ನು ನಿರ್ಮಾಣ ಮಾಡುವ ಮೂಲಕ ಗ್ರಾಮೀಣ ಬಡವರು, ಹಿಂದುಳಿದ ವರ್ಗಗಳ ಕುಟುಂಬಗಳಿಂದ ಬಂದ ವಿದ್ಯಾರ್ಥಿಗಳಿಗೆ ಸದೃಢ ಭವಿಷ್ಯ ನಿರ್ಮಾಣಕ್ಕೆ ಉತ್ತಮ ಅವಕಾಶ ಕಲ್ಪಿಸಿದ್ದಾರೆ ಎಂದು ತಿಳಿಸಿದರು.

ಶ್ರೀ ದೇವರಾಜ್‌ ಅರಸ್‌ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಂ.ಕೃಷ್ಣಮೂರ್ತಿ, ಪ್ರಾಂಶುಪಾಲ ಡಾ.ವಿಜಯಕಾರ್ತಿಕ್, ಲಯನ್ಸ್‌ ಕ್ಲಬ್‌ ಅಧ್ಯಕ್ಷ ಜೆ.ಆರ್.ರಾಕೇಶ್, ಉಪಾಧ್ಯಕ್ಷ ಪ್ರೊ.ಕೆ.ಆರ್.ರವಿಕಿರಣ್, ಕ್ಯಾಂಪಸ್‌ನ ಮಾನವ ಸಂಪನ್ಮೂಲ ನಿರ್ದೇಶಕ ಎನ್.ಎಸ್.ಬಾಬುರೆಡ್ಡಿ, ದೊಡ್ಡಬಳ್ಳಾಪುರ ಲಯನ್ಸ್‌ ಕ್ಲಬ್ ಮಾಜಿ ಅಧ್ಯಕ್ಷ ಎಳ್ಳುಪುರ ರಾಮಾಂಜಿನಪ್ಪ, ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು ಹಾಜರಿದ್ದರು.

 

 

Share This Article
error: Content is protected !!
";