ಸ್ವಚ್ಛತಾ ಜಾಗೃತಿ ಕಾರ್ಯದಲ್ಲಿ ಪೊರಕೆ ಹಿಡಿದು ಸ್ವಚ್ಛ ಮಾಡಿ ಮಾದರಿಯಾದ ನ್ಯಾಯಾಧೀಶರುಗಳು

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸ್ವಚ್ಛತಾ ಹೀ ಸೇವಾ ಅಭಿಯಾನದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯಾಲಯದ ಹಲವು ನ್ಯಾಯಾಧೀಶರುಗಳು ಸ್ವತಃ ಪೊರಕೆ ಪುಟ್ಟಿ ಹಿಡಿದು ನ್ಯಾಯಾಲಯದ ಆವರಣ ಸ್ವಚ್ಛಗೊಳಿಸುವ ಮೂಲಕ ಸಾರ್ವಜನಿಕರಿಗೆ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುವುದರೊಂದಿಗೆ ಮಾದರಿ ನ್ಯಾಯಾಧೀಶರುಗಳಾಗಿದ್ದಾರೆ.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ರೋಣ ವಾಸುದೇವ್ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ ಪರಿಸರ ಸ್ವಚ್ಛವಿದ್ದಾಗ ಮಾತ್ರ ನಮ್ಮ ಸುತ್ತಮುತ್ತಲಿನ ಸಮಾಜ ಸುಂದರವಾಗಿರುತ್ತದೆ. ಜತೆಗೆ ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗಲಿದೆ. ಸ್ವಚ್ಛತೆ ಕುರಿತು ಸಾರ್ವಜನಿಕರಿಗೆ ಜಾಗೃತಿ ಅವಶ್ಯ ಎಂದು ಹೇಳಿದರು.

 ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಭಾನುವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾ ನ್ಯಾಯಾಂಗ ಇಲಾಖೆ, ನಗರಸಭೆ ಸಹಯೋಗದಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

 ಹಸಿ ಕಸ, ಒಣ ಕಸ ಪ್ರತ್ಯೇಕಿಸಿ ನೀಡುವಂತೆ ನಗರಸಭೆಯವರು ಸಾಕಷ್ಟು ಬಾರಿ ತಿಳಿ ಹೇಳಿದರೂ ಸಾರ್ವಜನಿಕರು ನಿರ್ಲಕ್ಷ್ಯ ವಹಿಸುತ್ತಾರೆ. ಹಸಿ ಕಸ ಮತ್ತು ಒಣ ಕಸ ಕೂಡಿಸಿ ಕೊಡುವುದರಿಂದ ಅವುಗಳನ್ನು ಪ್ರತ್ಯೇಕಿಸುವುದು, ವಿಲೇವಾರಿ ಮಾಡುವುದು ಕಷ್ಟವಾಗಲಿದೆ. ಹಾಗಾಗಿ ಸಾರ್ವಜನಿಕರು ಹಸಿ ಕಸ, ಒಣ ಕಸವನ್ನು ಪ್ರತ್ಯೇಕಿಸಿ ಕಸದ ವಾಹನಗಳಿಗೆ ನೀಡಬೇಕು ಎಂದು ಕಿವಿಮಾತು ಹೇಳಿದರು.

 ಪರಿಸರ ಸ್ವಚ್ಛ ಮಾಡುವುದರ ಜತೆಗೆ ನಮ್ಮ ಮನಸ್ಸನ್ನು ಕೂಡ ಸ್ವಚ್ಛಗೊಳಿಸಬೇಕು. ಪ್ರತಿಯೊಬ್ಬರು ಸ್ವಚ್ಛತೆ ಹಾಗೂ ಪರಿಸರ ಕಾಳಜಿ ವಹಿಸಬೇಕು. ಆ ಮೂಲಕ ಕಸಮುಕ್ತ ಸುಂದರ ಚಿತ್ರದುರ್ಗ ನಗರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಹೇಳಿದರು.

ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಮಾತನಾಡಿ, ಜನರಲ್ಲಿ ನೈರ್ಮಲ್ಯ, ಶುಚಿತ್ವ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಗಾಂಧಿ ಜಯಂತಿಯ ಅಂಗವಾಗಿ ಈಗಾಗಲೇ ಸೆ.14 ರಿಂದ “ಸ್ವಚ್ಛತಾ ಹೀ ಸೇವಾ ಪಾಕ್ಷಿಕ” ಅಭಿಯಾನ ಪ್ರಾರಂಭವಾಗಿದ್ದು, ಅ.02 ರವರೆಗೆ ನಡೆಯಲಿದೆ. 15 ದಿನಗಳ ಕಾಲ ನಡೆಯುವ ಸ್ವಚ್ಛತಾ ಆಂದೋಲನದಲ್ಲಿ ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿ ಒಟ್ಟು 140ಕ್ಕೂ ಹೆಚ್ಚು ಸ್ವಚ್ಛತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

 ಸ್ವಚ್ಛತಾ ಹೀ ಸೇವಾ ಅಭಿಯಾನದ ಅಂಗವಾಗಿ ಪ್ರತಿನಿತ್ಯವೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯ, ಸ್ವಚ್ಛತೆ ಕುರಿತು ಅರಿವು ಮೂಡಿಸಲಾಗುತ್ತಿದೆ. ಈಗಾಗಲೇ ಉದ್ಯಾನವನಗಳ ಸ್ವಚ್ಛತೆ, ಕಲ್ಯಾಣಿಗಳ ಸ್ವಚ್ಛತೆ ಮಾಡಲಾಗುತ್ತಿದೆ ಎಂದು ಹೇಳಿದರು.

ಸ್ವಚ್ಛತಾ ಕಾರ್ಯ: ಸ್ವಚ್ಛತಾ ಹೀ ಸೇವಾ ಅಭಿಯಾನದ ಅಂಗವಾಗಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನ್ಯಾಯಾಧೀಶರು, ಸಿಬ್ಬಂದಿಗಳು, ವಕೀಲರು ಹಾಗೂ ನಗರಸಭೆಯ ಪೌರಾಯುಕ್ತರು, ಪೌರಕಾರ್ಮಿಕರು ಪೊರಕೆ ಹಿಡಿದು ನ್ಯಾಯಾಲಯದ ಸಂಕಿರ್ಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ನ್ಯಾಯಾಧೀಶರಾದ ರೋಣ ವಾಸುದೇವ್ ಅವರು ಸ್ವಚ್ಛತೆಯ ಪ್ರತಿಜ್ಞಾವಿಧಿ ಬೋಧಿಸಿದರು.

ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್, ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ ಸೇರಿದಂತೆ ಜಿಲ್ಲಾ ನ್ಯಾಯಾಲಯದ ಹಲವು ನ್ಯಾಯಾಧೀಶರುಗಳು ಹಾಗೂ ನ್ಯಾಯಾಂಗ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಇದ್ದರು.

- Advertisement -  - Advertisement -  - Advertisement - 
Share This Article
error: Content is protected !!
";