ಸೆ.17ರಂದು ಕಲ್ಯಾಣ ಕರ್ನಾಟಕ ಉತ್ಸವ;ಎಡಿಸಿ

News Desk

ಚಂದ್ರವಳ್ಳಿ ನ್ಯೂಸ್, ಬಳ್ಳಾರಿ:
ಭಾರತ ಆ.
15 ರಂದು ಸ್ವಾತಂತ್ರ್ಯ ಪಡೆದರೆ, ಕಲ್ಯಾಣ ಕರ್ನಾಟಕ ಭಾಗದ ಪ್ರದೇಶಗಳು  ಸೆ.17ರಂದು ವಿಮೋಚನೆಗೊಂಡ ದಿನ. ಹಾಗಾಗಿ ಜಿಲ್ಲಾ ಕೇಂದ್ರದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನವಾಗಿ ಆಚರಿಸಲಾಗುತ್ತಿದ್ದು, ಆಚರಣೆಯು ಹಬ್ಬದಂತಿರಬೇಕು, ಇದಕ್ಕೆ ಬೇಕಾದ ಎಲ್ಲ ರೀತಿಯ ಸಿದ್ಧತೆಗಳನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ನೂತನ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಶುಕ್ರವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

 ಸೆ. 17 ಹೈದ್ರಾಬಾದ್ ನ ನಿಜಾಮರಿಂದ ಹೈದ್ರಾಬಾದ್ ಕರ್ನಾಟಕ ಪ್ರದೇಶಗಳು ವಿಮುಕ್ತಿ ಪಡೆದ ದಿನವಾಗಿದ್ದು, ಇದನ್ನು ಸರ್ಕಾರದ ಸೂಚನೆಯಂತೆ ಕಲ್ಯಾಣ ಕರ್ನಾಟಕ ಉತ್ಸವ ದಿನವಾಗಿ ಆಚರಿಸಲಾಗುತ್ತಿದೆ.  ಸೆ.17 ರಂದು ಬೆಳಿಗ್ಗೆ 09 ಗಂಟೆಗೆ ನಗರದ ಡಾ.ರಾಜ್‍ಕುಮಾರ್ ರಸ್ತೆಯ ಸರ್ಕಾರಿ (ಮಾಜಿ ಪುರಸಭೆ) ಪದವಿ ಪೂರ್ವ ಕಾಲೇಜಿನ ಮೈದಾನದ ಆವರಣದಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದೆ ಎಂದರು.

ಕಲ್ಯಾಣ ಕರ್ನಾಟಕ ಉತ್ಸವವನ್ನು ಜಿಲ್ಲಾಡಳಿತದ ವತಿಯಿಂದ ಅತ್ಯಂತ ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ಆಚರಿಸುವ ನಿಟ್ಟಿನಲ್ಲಿ ಸ್ವಾಗತ ಸಮಿತಿ, ವೇದಿಕೆ ಸಮಿತಿ, ಸನ್ಮಾನ ಸಮಿತಿ, ಸ್ವಚ್ಛತೆ ಮತ್ತು ಕುಡಿಯುವ ನೀರಿನ ಸಮಿತಿ, ವಿದ್ಯುತ್ ಸಮಿತಿ, ದೀಪಾಲಂಕಾರ ಸಮಿತಿ, ಲಘು ಉಪಹಾರ ಸಮಿತಿ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಿ, ಜವಾಬ್ದಾರಿಗಳನ್ನು ವಹಿಸಿ, ಅಗತ್ಯ ಸಲಹೆ-ಸೂಚನೆಗಳನ್ನು ಇದೇ ಸಂದರ್ಭದಲ್ಲಿ ನೀಡಿದರು.

ಕಲ್ಯಾಣ ಕರ್ನಾಟಕ ಉತ್ಸವ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳಿಗೆ ವಹಿಸಲಾದ ಜವಾಬ್ದಾರಿಯನ್ನು ಅತ್ಯಂತ ಸಮರ್ಪಕವಾಗಿ ನಿರ್ವಹಿಸುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶಾಲಾ ಕಾಲೇಜುಗಳಲ್ಲಿ 371 ಜೆ ಕುರಿತು ಪ್ರಬಂಧ ಆಯೋಜಿಸಬೇಕು ಮತ್ತು ಎಲ್ಲಾ ಶಾಲಾ-ಕಾಲೇಜುಗಳಿಂದ ವಿದ್ಯಾರ್ಥಿಗಳು ಕಲ್ಯಾಣಕರ್ನಾಟಕ ಉತ್ಸವದಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಿ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಅಪರ ಜಿಲ್ಲಾಧಿಕಾರಿಗಳು ಈ ಸಂದರ್ಭದಲ್ಲಿ ಸೂಚಿಸಿದರು.

ಕುಡಿಯುವ ನೀರಿನ ವ್ಯವಸ್ಥೆ, ಶ್ಯಾಮಿಯಾನ, ಕುರ್ಚಿ ಮತ್ತು ಲಘು ಉಪಹಾರದ ವ್ಯವಸ್ಥೆ ಹಾಗೂ ಮೈದಾನದ ಸ್ವಚತೆಯ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮ ನಡೆಯುವ ಮೈದಾನದಲ್ಲಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಸೂಚಿಸಿದ ಅವರು, ಕಲ್ಯಾಣ ಕರ್ನಾಟಕ ಉತ್ಸವ ದಿನದಂದು ಜರುಗಲಿರುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವುದರಿಂದ ವಾಹನ ಸಂಚಾರ ಕ್ರಮಬದ್ಧಗೊಳಿಸಲು ಹಾಗೂ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯ ಕುರಿತು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಆಯೋಜಿಸಬೇಕು. ಶಿಷ್ಟಾಚಾರದನ್ವಯ ಆಹ್ವಾನ ಪತ್ರಿಕೆ ಮುದ್ರಿಸಿ, ಗಣ್ಯರನ್ನು ಮತ್ತು ವಿವಿಧ ಸಂಘ- ಸಂಸ್ಥೆಗಳ ಪದಾಧಿಕಾರಿಗಳನ್ನು ಆಹ್ವಾನಿಸಬೇಕು ಎಂದು ಸೂಚಿಸಿದರು.

ಜಿಲ್ಲೆಯ ಎಲ್ಲಾ ತಾಲೂಕು ಮಟ್ಟದಲ್ಲಿಯೂ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲು ಆಯಾ ತಾಲೂಕು ಮಟ್ಟದ ತಹಸೀಲ್ದಾರರು ಹಾಗೂ ಇಲಾಖಾ ಅಧಿಕಾರಿಗಳು ಕ್ರಮ ವಹಿಸಬೇಕು. ಜಿಲ್ಲಾ ಮಟ್ಟದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದರು.

ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಪ್ರಮೋದ್, ಬಳ್ಳಾರಿ ನಗರ ಡಿವೈಎಸ್ಪಿ ನಂದಾರೆಡ್ಡಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -  - Advertisement -  - Advertisement - 
Share This Article
error: Content is protected !!
";