ಸಿದ್ದರಾಮಯ್ಯ ಭಂಡತನ ಬಿಟ್ಟು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ-ಕಾರಜೋಳ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ವಾಲ್ಮೀಕಿ, ಮುಡಾ ಹಗರಣದಲ್ಲಿ ಸಿಲುಕಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೆ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಭಾರತೀಯ ಜನತಾಪಾರ್ಟಿಯಿಂದ ನಗರದ ಒನಕೆ ಓಬವ್ವ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಸಂಸದ ಗೋವಿಂದ ಕಾರಜೋಳರವರು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಎತ್ತಿ ಹಿಡಿದಿರುವ ಹೈಕೋರ್ಟ್ ತನಿಖೆ ನಡೆಸುವಂತೆ ತೀರ್ಪು ನೀಡಿದ್ದರು ಭಂಡತನ ತೋರುವ ಬದಲು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಬೇಕು. ಸ್ವಾರ್ಥ ಕುಟುಂಬ ರಾಜಕಾರಣಕ್ಕೆ ಬಲಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವುದೇ ತಪ್ಪು ಮಾಡಿಲ್ಲವೆಂದು ಎಲ್ಲವನ್ನು ಸಮರ್ಥಿಸಿಕೊಳ್ಳುವುದು ಸರಿಯಲ್ಲ. ಏನಿದ್ದರೂ ಕಾನೂನು ಮೂಲಕ ಹೋರಾಟ ನಡೆಸಿ ನಿರಪರಾಧಿ ಎನ್ನುವುದನ್ನು ಸಾಬೀತುಪಡಿಸಲಿ ಎಂದು ಸವಾಲು ಹಾಕಿದರು.

ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ ಮೂಡಾ ಹಾಗೂ ವಾಲ್ಮೀಕಿ ಹಗರಣದಲ್ಲಿ ಸಿಕ್ಕಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಲಿತರ ಪರ ಎಂದು ಹೇಳಿಕೊಳ್ಳುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ. ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದವರ ಕಲ್ಯಾಣಕ್ಕಾಗಿ ಬಳಸಬೇಕಾಗಿದ್ದ ೨೪ ಸಾವಿರ ಕೋಟಿ ರೂ.ಗಳನ್ನ ಅನ್ಯ ಉದ್ದೇಶಕ್ಕೆ ದುರ್ಬಳಕೆ ಮಾಡಿಕೊಂಡಿರುವುದರಿಂದ ಕೂಡಲೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಕೊಡಬೇಕೆಂದು ಒತ್ತಾಯಿಸಿದರು.

ಕರ್ನಾಟಕ ವಾಲ್ಮೀಕಿ ಅಭಿವೃದ್ದಿ ನಿಗಮದ ೧೮೭ ಕೋಟಿ ರೂ.ಗಳನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಿಕೊಂಡು ಆಂಧ್ರ ಚುನಾವಣೆಗೆ ಖರ್ಚು ಮಾಡಿದ್ದಾರೆ. ಬಳ್ಳಾರಿಯ ಚುನಾವಣೆಗೂ ಈ ಹಣ ಬಳಕೆಯಾಗಿದೆ. ಒಂದು ಕ್ಷಣವೂ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯುವ ಅರ್ಹತೆಯಿಲ್ಲ. ರಾಜಿನಾಮೆ ಕೊಡುವತನಕ ನಮ್ಮ ಹೋರಾಟ ನಿರಂತರವಾಗಿರುತ್ತದೆಂದು ಹೇಳಿದರು.

ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ, ಮಾಜಿ ಶಾಸಕ ಎಸ್.ಕೆ.ಬಸವರಾಜನ್, ಪ್ರಧಾನ ಕಾರ್ಯದರ್ಶಿಗಳಾದ ಸಂಪತ್, ಜಿ.ಟಿ.ಸುರೇಶ್‌ಸಿದ್ದಾಪುರ, ಯುವ ಮುಖಂಡರುಗಳಾದ ಡಾ.ಸಿದ್ದಾರ್ಥ, ಜಿ.ಎಸ್.ಅನಿತ್‌ಕುಮಾರ್,

ನಗರ ಮಂಡಲ ಅಧ್ಯಕ್ಷ ನವೀನ್ ಚಾಲುಕ್ಯ, ಗ್ರಾಮಾಂತರ ಮಂಡಲ ಅಧ್ಯಕ್ಷ ಕಲ್ಲೇಶಯ್ಯ, ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್, ವಕ್ತಾರ ನಾಗರಾಜ್‌ಬೇದ್ರೆ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶೈಲಜಾರೆಡ್ಡಿ, ಗಾಯತ್ರಿ, ಬಸಮ್ಮ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ಹಿರಿಯೂರು ತಾಲ್ಲೂಕು ಅಧ್ಯಕ್ಷ ವಿಶ್ವನಾಥ್, ಶಾಂತಮ್ಮ, ಬಿಜೆಪಿ. ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ್, ಜಿಲ್ಲಾಧ್ಯಕ್ಷ ವೆಂಕಟೇಶ್‌ಯಾದವ್, ನಗರಸಭೆ ಸದಸ್ಯ ಹರೀಶ್, ನಂದಿ ನಾಗರಾಜ್ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

 

 

- Advertisement -  - Advertisement - 
Share This Article
error: Content is protected !!
";